Home namma chikmagalur chikamagalur ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ₹3,500 ಕೋಟಿ ಯೋಜನೆ
chikamagalurHomeLatest Newsnamma chikmagalur

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ₹3,500 ಕೋಟಿ ಯೋಜನೆ

Share
Share

ಚಿಕ್ಕಮಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವುದು, ಗುಣಮಟ್ಟದ ಶಿಕ್ಷಣ ಒದಗಿಸುವುದು ಹಾಗೂ ಗ್ರಾಮೀಣ ಭಾಗದ ಮಕ್ಕಳಿಗೆ ಒಂದೇ ಆವರಣದಲ್ಲಿ ಪೂರ್ವ ಪ್ರಾಥಮಿಕದಿಂದ ಪಿಯುಸಿವರೆಗೆ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಮಹತ್ವದ ಯೋಜನೆಗಳನ್ನು ರೂಪಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ವ್ಯವಸ್ಥೆ ಜಾರಿಗೆ ತರಲು ಉದ್ದೇಶಿಸಲಾಗಿದ್ದು, ಎಡಿಬಿ ಬ್ಯಾಂಕ್ ನೆರವಿನೊಂದಿಗೆ ಸುಮಾರು ₹2,500 ಕೋಟಿ ವೆಚ್ಚದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಅಭಿವೃದ್ಧಿಪಡಿಸಲಾಗುವುದು. ಇದರ ಜೊತೆಗೆ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಧಿಯಡಿ ₹1,000 ಕೋಟಿ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಬಲವರ್ಧನೆ, ಶಿಕ್ಷಕರ ಕೊರತೆ ನೀಗಿಸುವುದು ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಮತ್ತೊಂದು ಅವಕಾಶ ನೀಡಿದ್ದು, ಇಲಾಖೆಯಲ್ಲಿ ಬಾಕಿ ಉಳಿದಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿತಕ್ಕೆ ಕಾರಣಗಳನ್ನು ಅಧ್ಯಯನ ಮಾಡಿ, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

ಒಂದೇ ಆವರಣದಲ್ಲಿ 14 ವರ್ಷಗಳ ಶಿಕ್ಷಣ

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ವ್ಯವಸ್ಥೆ ಇಲ್ಲದಿರುವುದರಿಂದ ಅನೇಕ ಪೋಷಕರು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ. ಒಂದನೇ ತರಗತಿಯಿಂದ ಸರ್ಕಾರಿ ಶಾಲೆಯಲ್ಲಿ ಓದಿದರೂ, ಅದೇ ಗ್ರಾಮದಲ್ಲಿ ಪ್ರೌಢಶಾಲೆ ಅಥವಾ ಪಿಯು ಕಾಲೇಜು ಇಲ್ಲದಿದ್ದರೆ ಮಕ್ಕಳು ಬೇರೆ ಊರುಗಳಿಗೆ ತೆರಳಬೇಕಾದ ಪರಿಸ್ಥಿತಿಯಿದೆ. ಈ ಸಮಸ್ಯೆಗೆ ಪರಿಹಾರವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ಕೆಪಿಎಸ್ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ, ಮೂರನೇ ತರಗತಿಯಿಂದ ಕೃತಕ ಬುದ್ಧಿಮತ್ತೆ (ಎಐ) ಪರಿಚಯ ಹಾಗೂ ಆರನೇ ತರಗತಿಯಿಂದ ಕೌಶಲ್ಯಾಭಿವೃದ್ಧಿ ಶಿಕ್ಷಣ ನೀಡಲಾಗುತ್ತದೆ. ಎಲ್ಲ ತರಗತಿಗಳಿಗೂ ಶಿಕ್ಷಕರನ್ನು ಹಾಗೂ ಆರನೇ ತರಗತಿಯಿಂದ ವಿಷಯವಾರು ಶಿಕ್ಷಕರನ್ನು ನೇಮಿಸುವ ವ್ಯವಸ್ಥೆ ಕಲ್ಪಿಸಲಾಗುವುದು. ಒಂದೇ ಆವರಣದಲ್ಲಿ ಮಗುವಿಗೆ 14 ವರ್ಷಗಳವರೆಗೆ ಶಿಕ್ಷಣ ದೊರೆಯುವಂತೆ ಮಾಡುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ದೂರದ ಊರುಗಳಿಂದ ಬರುವ ಮಕ್ಕಳ ಅನುಕೂಲಕ್ಕಾಗಿ ಉಚಿತ ಬಸ್ ವ್ಯವಸ್ಥೆಯನ್ನೂ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದರು.

ಎಡಿಬಿ ಬ್ಯಾಂಕ್ ನೆರವಿನೊಂದಿಗೆ ₹2,500 ಕೋಟಿ ವೆಚ್ಚದಲ್ಲಿ 500 ಕೆಪಿಎಸ್ ಶಾಲೆಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ಶಾಲೆಗಳ ಸ್ಥಳಗಳನ್ನು ಗುರುತಿಸಲಾಗಿದ್ದು, ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗುತ್ತಿದೆ. ಡಿಸೆಂಬರ್‌ನಲ್ಲಿ ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ರಾಜ್ಯಮಟ್ಟದ ಬೃಹತ್ ಕಾರ್ಯಕ್ರಮದ ಮೂಲಕ ಯೋಜನೆಗೆ ಚಾಲನೆ ನೀಡುವ ಉದ್ದೇಶವಿದೆ ಎಂದು ತಿಳಿಸಿದರು.

ಗಣಿಗಾರಿಕೆ ಬಾಧಿತ ಪ್ರದೇಶಗಳು, ಕಲ್ಯಾಣ ಕರ್ನಾಟಕ ಹಾಗೂ ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಭಾಗಗಳಲ್ಲಿ ಹೆಚ್ಚುವರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಅನುದಾನ ಬಳಸಿಕೊಳ್ಳಲಾಗುತ್ತದೆ ಎಂದರು.

2027ರಿಂದ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಶಿಕ್ಷಣಕ್ಕೂ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ವ್ಯವಸ್ಥೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಶಿಕ್ಷಕರಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ. ಡಯಟ್ ಸಂಸ್ಥೆಗಳ ಮೂಲಕ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಸುಮಾರು 15ರಿಂದ 20 ಜಿಲ್ಲೆಗಳಲ್ಲಿ ತರಬೇತಿ ಪೂರ್ಣಗೊಂಡಿದೆ. ಉಳಿದ ಜಿಲ್ಲೆಗಳಲ್ಲಿಯೂ ತರಬೇತಿ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

ಸಿಎಸ್‌ಆರ್‌ ನಿಧಿಯಿಂದ ₹1,000 ಕೋಟಿ ಸಂಗ್ರಹ ಗುರಿ

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಅನುದಾನದ ಜೊತೆಗೆ ಖಾಸಗಿ ಕಂಪನಿಗಳ ಸಿಎಸ್‌ಆರ್‌ ನಿಧಿಯನ್ನೂ ಬಳಸಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್‌ ನಿಧಿ ಸಂಗ್ರಹಿಸುವ ಕುರಿತು ವಿಶೇಷ ಆಸಕ್ತಿ ವಹಿಸಿದ್ದು, ₹1,000 ಕೋಟಿ ಸಂಗ್ರಹಿಸುವ ಗುರಿ ನಿಗದಿಪಡಿಸಿದ್ದಾರೆ. ಆರಂಭದಲ್ಲಿ 100 ದಿನಗಳಲ್ಲಿ ಈ ಗುರಿ ಸಾಧಿಸುವ ಉದ್ದೇಶವಿತ್ತಾದರೂ, ಸಿಎಸ್‌ಆರ್‌ ಅನುದಾನ ಸಂಗ್ರಹ ಪ್ರಕ್ರಿಯೆ ವಿಸ್ತೃತವಾಗಿರುವುದರಿಂದ ಅಲ್ಪಾವಧಿಯಲ್ಲಿ ಪೂರ್ಣಗೊಳಿಸುವುದು ಕಷ್ಟವಾಗಿದೆ. ಆದರೆ ಹಂತ ಹಂತವಾಗಿ ಗುರಿ ತಲುಪುವ ವಿಶ್ವಾಸವಿದೆ ಎಂದರು.

ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ವೈಯಕ್ತಿಕ ಆಸಕ್ತಿ ಹೊಂದಿದ್ದು, ವಿವಿಧ ಕಂಪನಿಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅದರಲ್ಲೂ ಪ್ರಾಥಮಿಕ ಶಿಕ್ಷಣದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕು. ಶಿಕ್ಷಣ ಕ್ಷೇತ್ರದಲ್ಲಿ ತೃಪ್ತಿಕರ ಪ್ರಗತಿ ಸಾಧಿಸಿದ ಬಳಿಕ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೂ ಸಿಎಸ್‌ಆರ್‌ ನಿಧಿ ಬಳಸುವ ಕುರಿತು ಚಿಂತನೆ ನಡೆಸೋಣ ಎಂದು ಸೂಚಿಸಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ವಿವಿಧ ಕಂಪನಿಗಳ ಸಹಕಾರದಿಂದ ಸುಮಾರು ₹208 ಕೋಟಿ ಸಿಎಸ್‌ಆರ್‌ ಅನುದಾನ ಸಂಗ್ರಹವಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇತ್ತೀಚೆಗೆ ನಡೆದ ಸಭೆಯಲ್ಲಿ 10ರಿಂದ 15 ಕಂಪನಿಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಯಾವ ಶಾಲೆಗಳನ್ನು ಅಭಿವೃದ್ಧಿಪಡಿಸಬಹುದು, ಯಾವ ರೀತಿಯ ಕಟ್ಟಡ ಹಾಗೂ ಮೂಲಸೌಕರ್ಯ ಅಗತ್ಯವಿದೆ, ಅದಕ್ಕೆ ಎಷ್ಟು ವೆಚ್ಚವಾಗಲಿದೆ ಎಂಬ ಸಮಗ್ರ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಉದ್ದೇಶಿಸಲಾಗಿದೆ. ಇದರಿಂದ ಕಂಪನಿಗಳು ತಮಗೆ ಅನುಕೂಲವಾಗುವ ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಬಹುದು ಎಂದರು.

10ರಿಂದ 15 ಕಂಪನಿಗಳು ಒಟ್ಟಾಗಿ 20ರಿಂದ 30 ಶಾಲೆಗಳನ್ನು ಅಭಿವೃದ್ಧಿಪಡಿಸುವ ಸಾಮರ್ಥ್ಯ ಹೊಂದಿವೆ. ಶಿವಮೊಗ್ಗದ ಪ್ರಮುಖ ಕಂಪನಿಯೊಂದು ಈ ಯೋಜನೆಗೆ ಕೈಜೋಡಿಸಲು ಆಸಕ್ತಿ ತೋರಿಸಿದೆ. ಶಿವಮೊಗ್ಗದಲ್ಲಿ ಶಾಲೆಯೊಂದರ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಮಿಪೂಜೆ ಕಾರ್ಯಕ್ರಮದ ಸಂದರ್ಭದಲ್ಲಿಯೇ ಕಂಪನಿಯ ಪ್ರತಿನಿಧಿಗಳಿಂದ ಘೋಷಣೆ ಮಾಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಂಪನಿಗಳನ್ನು ಸಂಪರ್ಕಿಸಿ ಹೆಚ್ಚಿನ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

18 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯೂ ದಾಖಲಾತಿ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು 11 ತಿಂಗಳೊಳಗೆ ಪೂರ್ಣಗೊಳಿಸಲಾಗಿದೆ. ಇದರ ಜೊತೆಗೆ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅರ್ಹ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಪ್ರಸ್ತುತ ಸುಮಾರು 18 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸುಮಾರು 183 ಪ್ರೌಢಶಾಲೆಗಳನ್ನು ಮಂಜೂರು ಮಾಡಲಾಗಿದೆ. ಆದರ್ಶ ಶಾಲೆಗಳ ಪೈಕಿ ಸುಮಾರು 75 ಶಾಲೆಗಳನ್ನು ಪಿಯು ಕಾಲೇಜುಗಳಾಗಿ ಮೇಲ್ದರ್ಜೆಗೇರಿಸಲಾಗಿದ್ದು, 60ಕ್ಕೂ ಹೆಚ್ಚು ಹೊಸ ಪಿಯು ಕಾಲೇಜುಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳ

ಸರ್ಕಾರಿ ಶಿಕ್ಷಣ ವ್ಯವಸ್ಥೆಯಲ್ಲಿ ಕೈಗೊಂಡಿರುವ ಸುಧಾರಣೆಗಳ ಪರಿಣಾಮವಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಗಣನೀಯವಾಗಿ ಹೆಚ್ಚಾಗಿದೆ. ಕಳೆದ ಸಾಲಿನಲ್ಲಿ ಸುಮಾರು 39 ಸಾವಿರ ವಿದ್ಯಾರ್ಥಿಗಳಿದ್ದ ದಾಖಲಾತಿ ಈ ಬಾರಿ 1.81 ಲಕ್ಷಕ್ಕೆ ಏರಿಕೆಯಾಗಿದೆ. ಉತ್ತೀರ್ಣ ಪ್ರಮಾಣ ಹೆಚ್ಚಳ ಹಾಗೂ ಸರ್ಕಾರಿ ಕಾಲೇಜುಗಳಲ್ಲಿ ಸೌಲಭ್ಯಗಳ ಸುಧಾರಣೆ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಸಚಿವರು ಹೇಳಿದರು.

ಶೂ, ಪಠ್ಯಪುಸ್ತಕ ವಿತರಣೆಯಲ್ಲಿ ವಿಳಂಬಕ್ಕೆ ಸ್ಪಷ್ಟನೆ

ವಿದ್ಯಾರ್ಥಿಗಳಿಗೆ ಶೂ ವಿತರಿಸುವಲ್ಲಿ ಈ ಬಾರಿ ಸ್ವಲ್ಪ ವಿಳಂಬವಾಗಿದೆ. ತಾವು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಸುಮಾರು ಎರಡು ಲಕ್ಷ ಶೂಗಳ ಉತ್ಪಾದನೆ ಪ್ರಕ್ರಿಯೆ ಬಾಕಿ ಇತ್ತು. ಶೂಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗಿಲ್ಲ. ಅಳತೆ ಸಮಸ್ಯೆಯಿಂದ ಕೆಲವೆಡೆ ತೊಂದರೆಯಾಗಿರಬಹುದು. ಮಕ್ಕಳ ಬೆಳವಣಿಗೆಯಿಂದ ಅಳತೆ ವ್ಯತ್ಯಾಸವಾಗಿರುವ ಸಾಧ್ಯತೆಯೂ ಇದೆ. ಈ ಕುರಿತು ಮಾಧ್ಯಮಗಳು ಹಾಗೂ ಸಾರ್ವಜನಿಕರು ಗಮನಕ್ಕೆ ತಂದರೆ ತಕ್ಷಣ ಸರಿಪಡಿಸಲಾಗುವುದು ಎಂದರು.

ಪಠ್ಯಪುಸ್ತಕ ವಿತರಣೆಯಲ್ಲಿಯೂ ಕೆಲವು ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಗಳಿಂದ ವಿಳಂಬವಾಗಿದೆ. ಸುಮಾರು 42 ಸಾವಿರ ಮಕ್ಕಳಿಗೆ ಅಗತ್ಯವಿದ್ದ ಪುಸ್ತಕಗಳ ಕೊರತೆ ಎದುರಾಗಿತ್ತು. ಹೆಚ್ಚುವರಿ ಪುಸ್ತಕಗಳ ಖರೀದಿಗೆ 10 ಕೋಟಿ ರೂ. ಮೀರಿದ ಅನುದಾನಕ್ಕೆ ಸಚಿವ ಸಂಪುಟದ ಅನುಮೋದನೆ ಅಗತ್ಯವಿದ್ದ ಕಾರಣ ಪ್ರಕ್ರಿಯೆ ಪೂರ್ಣಗೊಳಿಸಿ ಪುಸ್ತಕಗಳನ್ನು ಒದಗಿಸಲಾಗಿದೆ. ದ್ವಿಭಾಷಾ ಪಠ್ಯಪುಸ್ತಕಗಳ ಮುದ್ರಣ ಮತ್ತು ವಿತರಣೆಯಲ್ಲಿಯೂ ಕೆಲವು ಸಮಸ್ಯೆಗಳು ಎದುರಾಗಿದ್ದು, ಅವುಗಳನ್ನು ಪರಿಹರಿಸಲಾಗುತ್ತಿದೆ. ಅಧಿಕಾರಿಗಳಿಂದ ಲೋಪವಾಗಿದ್ದರೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಅನುದಾನದ ಜೊತೆಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳು ಹಾಗೂ ಖಾಸಗಿ ಕಂಪನಿಗಳ ಸಹಕಾರವೂ ಅಗತ್ಯವಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಉತ್ತಮ ಮೂಲಸೌಕರ್ಯ ಹಾಗೂ ಅಗತ್ಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎಚ್.ಡಿ. ತಮ್ಮಯ್ಯ, ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಾಧಿಕಾರದ ಅಧ್ಯಕ್ಷ ಎಂ.ಎಸ್. ಶಿವಾನಂದ ಸ್ವಾಮಿ, ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀನಾಕ್ಷಿ ಆರ್ಯ, ಭದ್ರಾ ಕಾಡಾ ಅಧ್ಯಕ್ಷ ಡಾ. ಅಂಜುಮಂತ್ ಉಪಸ್ಥಿತರಿದ್ದರು.

₹3500 crore scheme for the development of government schools

Share

Leave a comment

Leave a Reply

Your email address will not be published. Required fields are marked *

Don't Miss

ದೇವಿರಮ್ಮನವರ ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಚಿಕ್ಕಮಗಳೂರು: ಪ್ರಸಿದ್ಧ ದೇವಿರಮ್ಮನವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಭಕ್ತಾದಿಗಳ ಸುರಕ್ಷತೆ ಹಾಗೂ ಸುಗಮ ದರ್ಶನಕ್ಕೆ ಜಿಲ್ಲಾಡಳಿತದಿಂದ ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದರು. ಸೋಮವಾರ...

ಬಿಳೇಕಲ್ಲು ಅಪಘಾತ ಪ್ರಕರಣದಲ್ಲಿ 25 ಲಕ್ಷ ಪರಿಹಾರ

ಚಿಕ್ಕಮಗಳೂರು: ಕಳೆದ ಏಪ್ರಿಲ್ ೧೪ ರಂದು ಇಲ್ಲಿಗೆ ಸಮೀಪದ ಬಿಳೇಕಲ್ಲು ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಮೆರವಣಿಯ ಸಂದರ್ಭದಲ್ಲಿ ಏಕಾಏಕಿ ಕಾರು ಚಲಾಯಿಸಿದ ಪರಿಣಾಮ ಮೃತಪಟ್ಟ ಹಾಗೂ ಈ ಪ್ರಕರಣದಲ್ಲಿ...

Related Articles

ಬೈಕ್ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧ ಸಾವು

ಚಿಕ್ಕಮಗಳೂರು: ವೇಗವಾಗಿ ಬಂದ ಬೈಕ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೊಬ್ಬರಿಗೆ ಹಿಂದಿನಿಂದ ಡಿಕ್ಕಿ ಹೊಡೆದ...

ಮತ್ತಿಕಟ್ಟೆ–ಬಿ. ಹೊಸಹಳ್ಳಿ ರಸ್ತೆ ಅಭಿವೃದ್ಧಿಗೆ ₹2.5 ಕೋಟಿ ಅನುದಾನ

ಮೂಡಿಗೆರೆ: ಹಲವು ವರ್ಷಗಳಿಂದ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದ ಮತ್ತಿಕಟ್ಟೆ–ಬಿ. ಹೊಸಹಳ್ಳಿ ಸಂಪರ್ಕ ರಸ್ತೆಗೆ...

ಕೋಟೆ ಬಡಾವಣೆಯಲ್ಲಿ ಸಾಂಪ್ರದಾಯಿಕ ಲಕ್ಕೆ ಹಬ್ಬದ ಸಂಭ್ರಮ

ಚಿಕ್ಕಮಗಳೂರು: ನರಕ ಚತುರ್ದಶಿಯ ಅಂಗವಾಗಿ ನಗರದ ಐತಿಹಾಸಿಕ ಕೋಟೆ ಬಡಾವಣೆಯಲ್ಲಿ ಶತಮಾನಗಳ ಇತಿಹಾಸ ಹೊಂದಿರುವ ಸಾಂಪ್ರದಾಯಿಕ...

ಅನಂತ್ ಅಗಲಿಕೆ ವೈಯಕ್ತಿಕವಾಗಿ ಅಪಾರ ನೋವು ತಂದಿದೆ

ಮೂಡಿಗೆರೆ: ತಾವು ಸಚಿವೆಯಾಗಿದ್ದ ಸಂದರ್ಭದಲ್ಲಿ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದ್ದ ಎಂ.ಎಸ್. ಅನಂತ್ ಅವರು...