ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರ್ಣಗೊಳಿಸುತ್ತಿದ್ದು, ಮೇ ೨೦ ರಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸಮರ್ಪಣಾ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಜಿಲ್ಲೆಯಿಂದ ೫ ಸಾವಿರಕ್ಕೂ ಹೆಚ್ಚು ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆಂದು ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಸೋಮವಾರ ಮಾತನಾಡಿ, ರಾಜ್ಯ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಐದು ಗ್ಯಾರೆಂಟಿಗಳನ್ನು ರಾಜ್ಯದ ಜನತೆಗೆ ನೀಡಿದೆ. ಇದಕ್ಕಾಗಿ ಬಜೆಟ್‌ನಲ್ಲಿ ೫೬ ಸಾವಿರ ಕೋಟಿ ರೂ. ಮೀಸಲಿರಿಸಿದ್ದಾರೆಂದು ತಿಳಿಸಿದರು.
ಇದೇ ಸಮಾವೇಶದಲ್ಲಿ ಕಂದಾಯ ಸೇವೆಗಳ ಸುಧಾರಣೆಗೆ ಭೂ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲಿದ್ದಾರೆ. ರಾಜ್ಯದ ಜನತೆ ಸರ್ಕಾರದ ಮೇಲೆ ವಿಶ್ವಾಸವಿಟ್ಟಿದ್ದರಿಂದ ಎರಡು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದರು.
ರೈತರ ಜಮೀನುಗಳು ಪೋಡಿಯಾಗದೆ ಸಮಸ್ಯೆ ಎದುರಿಸುತ್ತಿದ್ದ ವೇಳೆ, ಕೃಷಿ ಸಚಿವರು ಪೋಡಿ ಮುಕ್ತ ಗ್ರಾಮ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿದರು. ಹೊಸ ಕಂದಾಯ ಗ್ರಾಮಗಳನ್ನು ರಚಿಸಿದರು. ಭೂ ನ್ಯಾಯ ಮಂಡಳಿ ತೆರೆದು ಪೌತಿಖಾತೆ ಆಂದೋಲನ ನಡೆಸಿದರು. ಈಗ ಕಂದಾಯ ಸೇವೆಗಳ ಸುಧಾರಣೆಗಾಗಿ ಭೂ ಗ್ಯಾರೆಂಟಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಕಳೆದ ವರ್ಷ ಎತ್ತಿನಹೊಳೆ ಯೋಜನೆ ಜಾರಿಗೊಳಿಸಿದೆ. ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಜಿಲ್ಲೆಯ ಬೆಳವಾಡಿ ಗ್ರಾಮದ ಕರೆಗೆ ನೀರು ಬಂದಿದೆ. ಜಿಲ್ಲೆಯ ರಣಘಟ್ಟ ಯೋಜನೆಗೆ ಅನುದಾನ ನೀಡಿದೆ ಎಂದರು.
ಪಂಚಗ್ಯಾರಂಟಿ ಯೋಜನೆ ಕುರಿತು ಬಿಜೆಪಿಯವರು ಅಪಹಾಸ್ಯ ಮಾಡಿದ್ದರು. ಆದರೆ, ದೆಹಲಿ ಚುನಾವಣೆ, ಮಹಾರಾಷ್ಟ್ರ ಚುನಾವಣೆಯಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳನ್ನೇ ನಕಲು ಮಾಡಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಅನುದಾನವನ್ನು ಶೀಘ್ರವೇ ನೀಡಬೇಕೆಂದು ಒತ್ತಾಯಿಸಿದರು.
ಐದು ಗ್ಯಾರಂಟಿಗಳು ಜನರನ್ನು ಆರ್ಥಿಕವಾಗಿ ಪುನಶ್ಚೇತನಗೊಳಿಸುವ ಕೆಲಸ ಮಾಡಿದೆ. ನೀಡಿದ ಭರವಸೆಯಂತೆ ನಡೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯ ಮಂತ್ರಿಮಂಡಲವನ್ನು ಅಭಿನಂದಿಸುವುದಾಗಿ ಇದೇ ವೇಳೆ ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಹಿರೇಮಗಳೂರು ರಾಮಚಂದ್ರ, ನಟರಾಜ್ ಎಸ್.ಕೊಪ್ಪಲು, ರಘು ಪಿಳ್ಳೇನಹಳ್ಳಿ, ವಿಜಯಕುಮಾರ್, ನಾಗಭೂಷಣ್, ಕಾಂತರಾಜ್, ರಾಕೇಶ್ ಇದ್ದರು.
5000 people from the district attend the dedication ceremony
Leave a comment