ಚಿಕ್ಕಮಗಳೂರು: ಜೂನ್ ೭ ರಂದು ನಡೆಯಲಿರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ದನ, ಎಮ್ಮೆ, ಕರು ಮತ್ತು ಒಂಟೆಗಳನ್ನು ಅಕ್ರಮವಾಗಿ ಕೂಡಿ ಹಾಕುವುದು ಹಾಗೂ ಅವುಗಳ ಸಾಗಣೆ ಮತ್ತು ವಧೆ ಮಾಡುವ ಸಾಧ್ಯತೆ ಇರುವುದರಿಂದ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಪಾಸಣಾ ತಂಡಗಳನ್ನು ರಚಿಸಲಾಗಿದ್ದು, ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿಕೊಂಡು ನಿಯೋಜಿತ ದಿನಾಂಕಗಳಾದ ಜೂನ್ ೫ ರಿಂದ ೧೦ರವರೆಗೆ ತಮ್ಮ ವ್ಯಾಪ್ತಿಯಲ್ಲಿ ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಚಿಕ್ಕಮಗಳೂರು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ತಂಡಗಳು ಪ್ರಾಣಿ ವಧೆ ತಡೆಯುವ ಕಾರ್ಯದಲ್ಲಿ ನಿಗಾ ಇಡಲಿವೆ. ಉಳಿದಂತೆ ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ, ತರೀಕೆರೆ, ಅಜ್ಜಂಪುರ ಹಾಗೂ ಕಡೂರು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಆಯಾ ತಾಲ್ಲೂಕಿನ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತಂಡಗಳು ಕಾರ್ಯ ನಿರ್ವಹಿಸಲಿವೆ. ಈ ತಂಡಗಳಲ್ಲಿ ಮುಖ್ಯವಾಗಿ ನಗರಸಭೆ, ಪುರಸಭೆ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಹಾಗೂ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು, ಪೊಲೀಸ್ ಉಪನಿರೀಕ್ಷಕರು ಈ ತಂಡಗಳಲ್ಲಿ ಇರಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
10 teams formed across the district to prevent animal slaughter
Leave a comment