ಚಿಕ್ಕಮಗಳೂರು: ವಿದ್ಯಾರ್ಥಿಗಳು ಸಾಮೂಹಿಕವಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿದಾಗ ಆರೋಗ್ಯ, ದೈಹಿಕ, ಮಾನಸಿಕ, ಶಾಂತಿ, ಶಿಸ್ತು, ಸಹನೆ, ಆತ್ಮವಿಶ್ವಾಸ ಮೂಡಲು ಸಹಕಾರಿಯಾಗಲಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅಭಿಪ್ರಾಯಿಸಿದರು.
ಅವರು ಇಂದು ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ತಾ.ಪಂ, ಜಿ.ಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಾಗರ ಹೋಬಳಿ ವಲಯಮಟ್ಟದ ಕ್ರೀಡಾಕೂಟ ೨೦೨೫-೨೬ ಅತಿಥೇಯ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತೊಗರಿಹಂಕಲ್ ಹೊಸಪೇಟೆ ಇವರುಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕ್ರೀಡೆಯ ಎಲ್ಲಾ ವಿಭಾಗದಲ್ಲಿಯೂ ಸ್ಪರ್ಧೆ ಮಾಡುವುದರ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಅಂತರಾಷ್ಟ್ರೀಯ ಕ್ರೀಡಾಪಟುಗಳಾಗಿ ಎಂದು ಶುಭ ಹಾರೈಸಿದರು.
ಸಾರ್ವಜನಿಕ ಸಹಭಾಗಿತ್ವದಲ್ಲಿ ಸರ್ಕಾರಿ ಕಾರ್ಯಕ್ರಮಗಳು ನಡೆದರೆ ಅವು ಯಶಸ್ವಿಯಾಗಲು ಸಾಧ್ಯ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಕ್ರೀಡಾಕೂಟಗಳಿಗೆ ಹೆಚ್ಚಿನ ಅನುದಾನ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ ಎಂಬ ಕೀಳರಿಮೆ ಬೇಡ, ಮುರಾರ್ಜಿ ವಸತಿ ಶಾಲೆಯಲ್ಲಿ ಓದಿದ ವಿದ್ಯಾಥಿನಿಯೊಬ್ಬಳು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾಳೆ ಎಂಬುದನ್ನು ಅರಿಯಬೇಕಾಗಿದೆ ಎಂದರು.
ವಿದ್ಯಾರ್ಥಿನಿಯರಿಗೆ ಜಿಲ್ಲಾಧಿಕಾರಿ ಮೀನಾನಾಗರಾಜ್, ಜಿ.ಪಂ ಸಿಇಓ ಹೆಚ್.ಎಸ್. ಕೀರ್ತನ ಮಾದರಿಯಾಗಬೇಕು. ವಿದ್ಯಾರ್ಥಿಗಳಿಗೆ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ಇವರುಗಳು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವುದು ಮಾದರಿಯಾಗಬೇಕು ಎಂದು ಕಿವಿಮಾತು ಹೇಳಿದರು.
ಶೋಷಿತರು ಮತ್ತು ಬಡ ಕುಟುಂಬದ ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವುದು, ಶಿಕ್ಷಣ ನೀಡುವುದು ಸರ್ಕಾರ ಮತ್ತು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ. ಮುಂದಿನ ತಾಲ್ಲೂಕು, ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಸುವ ಸಂದರ್ಭದಲ್ಲಿ ಕ್ರೀಡಾಂಗಣ ಕೆಸರು ಆಗದ ರೀತಿ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಜಿ.ಪಂ ಮಾಜಿ ಸದಸ್ಯೆ ಜೆಸಂತಾ ಅನಿಲ್ಕುಮಾರ್ ಮಾತನಾಡಿ, ಮಕ್ಕಳಲ್ಲಿ ಕಾಣುವ ಪ್ರೀತಿ ಎಲ್ಲೂ ಕಾಣಲು ಸಾಧ್ಯವಿಲ್ಲ. ನನಗೆ ಇದು ಅಪೂರ್ವವಾದ ಅವಕಾಶ. ಮುಂದೆ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದರೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡುತ್ತೇನೆಂದು ಭರವಸೆ ನೀಡಿದರು.
ಗ್ರಾ.ಪಂ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಅತಿಥೇಯ ತಂಡಗಳಿಗೆ ಕೈಲಾದ ಧನಸಹಾಯ ಮಾಡಿ ಪ್ರೋತ್ಸಾಹಿಸುವಂತೆ ಮನವಿ ಮಾಡಿದ ಅವರು, ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಸ್ಪರ್ಧೆ ಮಾಡಿ ಎಂದು ಶುಭ ಹಾರೈಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಿದ್ದು, ಎಲ್ಲರೂ ಕ್ರೀಡಾ ಮನೋಭಾವದಿಂದ ಭಾಗವಹಿಸಿದಾಗ ಎಂತಹ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹೇಶ್, ಕೃಷ್ಣಮೂರ್ತಿ ಅರಸು, ವೀರೇಶ್, ಜಾನಕಮ್ಮ, ಜಗಧೀಶ್, ಪ್ರಾಥಮಿಕ ಕಾರ್ಯದರ್ಶಿ ಪರಮೇಶ್, ಶಿವಪ್ಪ, ಕುಮಾರ ಸ್ವಾಮಿ, ಅನಿಲ್ ಕುಮಾರ್, ಅಜ್ಜಯ್ಯ, ದಾವೂದ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೀಲಕಂಠಪ್ಪ, ಮೂಡಲಗಿರಿಯಪ್ಪ, ಗ್ರಾಪಂ ಸುರೇಶ್, ರತ್ನ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಹೇಮಲತಾ ಸ್ವಾಗತಿಸಿದರು
Jagar Hobli Zonal Level Sports Meet
Leave a comment