ಕಾಂಗ್ರೆಸ್ ಸರ್ಕಾರ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ ಮಾಡುವ ಮೂಲಕ ಅಂಬೇಡ್ಕರ್ ಅವರ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡಿದೆ ಎಂದು ಕೆಪಿಸಿಸಿ ಸಂಶೋಧನಾ ವಿಭಾಗದ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಆಶಯಗಳನ್ನು ಮತ್ತು ಬಸವಣ್ಣನವರ ಅನುಭಾವ ಮಂಟಪದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಮಸೂದೆಯು ಮಹತ್ವಪೂರ್ಣ ನಿರ್ಧಾರವಾಗಿದೆ ಎಂದಿದ್ದಾರೆ.
ಈ ಮಸೂದೆಯು ಗ್ರಾಮ ಅಥವಾ ಸಮುದಾಯದಿಂದ ಹೊರ ಹಾಕುವುದು, ಧಾರ್ಮಿಕ, ಸಾರ್ವಜನಿಕ ಸ್ಥಳಗಳ ಬಳಕೆಗೆ ನಿರ್ಬಂಧ ವಿಧಿಸುವುದು, ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿ ಮಾಡುವುದು, ವ್ಯವಹಾರ ಅಥವಾ ಉದ್ಯೋಗ ತಿರಸ್ಕಾರ ಮಾಡುವಂತಿಲ್ಲ.
ಶಾಲೆ, ಆಸ್ಪತ್ರೆ, ಸಮುದಾಯ ಭವನಗಳ ಪ್ರವೇಶಕ್ಕೆ ತಡೆಯೊಡ್ಡುವುದು, ಸೇವೆಗಳು, ಅವಕಾಶಗಳನ್ನು ನಿರಾಕರಿಸುವುದು, ಸಾಮಾಜಿಕ–ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ತಡೆಯೊಡ್ಡುವುದು,ಮದುವೆ, ಅಂತ್ಯಕ್ರಿಯೆಗಳಲ್ಲಿ ಭಾಗವಹಿಸುವುದಕ್ಕೆ ತಡೆಯೊಡ್ಡುವುದು, ವ್ಯಾಪಾರ, ಸಾಮಾಜಿಕ ಸಂಬಂಧಗಳಿಗೆ ತಡೆಯೊಡ್ಡುವುದು, ಮಕ್ಕಳನ್ನು ಒಟ್ಟಿಗೆ ಆಡಲು ಅಡ್ಡಿ ಪಡಿಸುವುದು, ಲಿಂಗತ್ವದ ಆಧಾರದ ಮೇಲೆ ಭೇದ ಮಾಡುವುದು, ಮಾನವ ಹಕ್ಕುಗಳನ್ನು ನಿರಾಕರಿಸುವುದು, ಬಟ್ಟೆ, ಭಾಷೆ, ಸಾಂಸ್ಕೃತಿಕ ಭೇದ ಎಸಗುವುದನ್ನು ಈ ಪ್ರಸ್ತಾಪಿತ ಮಸೂದೆಯಡಿ ನಿಷೇಧಿಸಲಾಗಿದೆ.
ಇದು ಸಮಾಜದ ಎಲ್ಲಾ ವರ್ಗಗಳಿಗೂ ಅನ್ವಯಿಸುವುದರಿಂದ ಪದೇ ಪದೇ ಬಹಿಷ್ಕಾರಕ್ಕೆ ಒಳಗಾಗುವ ಸಣ್ಣ ಸಾಮಾಜಿಕ ಸಮುದಾಯಗಳು ಸೇರಿದಂತೆ ಎಲ್ಲರಿಗೂ ಸದುಪಯೋಗವಾಗಲಿದೆ ಎಂದು ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡಿಸಿರುವುದಕ್ಕೆ ನಮ್ಮ ಸರ್ಕಾರಕ್ಕೆ ಅಭಿನಂದನೆಗಳು
Welcome introduction of social boycott ban bill
Leave a comment