ಚಿಕ್ಕಮಗಳೂರು: ಕಾಫಿನಾಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟ್ನಲ್ಲಿ ಎರಡು ಲಾರಿಗಳು ಪಲ್ಟಿಯಾದ ಪರಿಣಾಮ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ಕಡಿದಾದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದ್ದು, ರಸ್ತೆಯ ಮಧ್ಯೆಯೇ ಲಾರಿಗಳು ಉರುಳಿ ಬಿದ್ದಿರುವುದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದಾಗಿ ಘಾಟ್ ರಸ್ತೆಯುದ್ದಕ್ಕೂ ಹತ್ತು ಕಿಲೋಮೀಟರ್ಗಿಂತಲೂ ಹೆಚ್ಚು ದೂರ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ಸಂಚಾರ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕೊಟ್ಟಿಗೆಹಾರದಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ ರಸ್ತೆಯನ್ನು ಬಂದ್ ಮಾಡಲಾಗಿದ್ದು, ವಾಹನಗಳು ಘಾಟ್ ಪ್ರದೇಶಕ್ಕೆ ಪ್ರವೇಶಿಸದಂತೆ ತಡೆಯಲಾಗಿದೆ.
ಸದ್ಯ ಪಲ್ಟಿಯಾಗಿರುವ ಲಾರಿಗಳನ್ನು ರಸ್ತೆಯಿಂದ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಸಂಚಾರ ಸುಗಮವಾಗಲು ಇನ್ನೂ ಕೆಲ ಸಮಯ ಹಿಡಿಯುವ ಸಾಧ್ಯತೆ ಇದೆ. ಆದ್ದರಿಂದ ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು ಪರ್ಯಾಯ ರಸ್ತೆಗಳನ್ನು ಬಳಸುವಂತೆ ಪೊಲೀಸ್ ಇಲಾಖೆ ಸೂಚಿಸಿದೆ.
Two trucks overturn at Charmadi Ghat – traffic disrupted
Leave a comment