ಚಿಕ್ಕಮಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಾಗಿ ಉಳಿಯದೆ, ಇಂದು ನಾಡಿನ ಆರ್ಥಿಕತೆಯ ಗತಿಯನ್ನೇ ಬದಲಿಸಿವೆ. ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಶಕ್ತಿ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಹೆಚ್.ಎಂ.ರೇವಣ್ಣ ತಿಳಿಸಿದರು.
ನಗರದ ಕುವೆಂಪು ಕಲಾಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವು ರಾಜ್ಯದ ಬಜೆಟ್ ಗಾತ್ರವನ್ನು ೨.೫ ಲಕ್ಷ ಕೋಟಿ ರೂ.ಗಳಿಂದ ೪.೦೯ ಲಕ್ಷ ಕೋಟಿ ರೂಪಾಯಿಗಳಿಗೆ ಏರಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ ಎಂದು ತಿಳಿಸಿದ ಅವರು, ವಿಶ್ವಸಂಸ್ಥೆಯ ಉನ್ನತ ಅಧಿಕಾರಿಗಳೇ ಕರ್ನಾಟಕಕ್ಕೆ ಭೇಟಿ ನೀಡಿ ಇಲ್ಲಿನ ಅಭಿವೃದ್ಧಿ ಮಾದರಿಯನ್ನು, ವಿಶೇಷವಾಗಿ ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಯ ವಿಷಯದಲ್ಲಿ ಮುಕ್ತವಾಗಿ ಶ್ಲಾಘಿಸಿದ್ದಾರೆ ಎಂದು ಅವರು ತಿಳಿಸಿದರು.
ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗುತ್ತಿದ್ದಾರೆ ಹಾಗೂ ಉಚಿತ ಬಸ್ ಪ್ರಯಾಣವು ಅವರ ಕೆಲಸದ ಅವಕಾಶಗಳನ್ನು ಹೆಚ್ಚಿಸಿದೆ ಎಂಬುದು ಹೆಮ್ಮೆಯ ವಿಷಯ ಎಂದು ಅವರು ಅಭಿಪ್ರಾಯಪಟ್ಟರು. ರಾಜ್ಯದಲ್ಲಿ ೧,೪೬,೦೫೬ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ೧೬೬೪ ಮರಣ ಹೊಂದಿರುವವರ ಖಾತೆಗಳಿಗೆ ಗೃಹಲಕ್ಷ್ಮೀ ಹಣವು ಜಮೆಯಾಗಿದ್ದು, ಅವುಗಳನ್ನು ವಾಪಸು ಪಡೆಯಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಜಾಗೃತ ಕರ್ನಾಟಕ ಸಂಚಾಲಕ ಡಾ.ಹೆಚ್.ವಿ.ವಾಸು ಅಭಿವೃದ್ಧಿಯ ಚಾಲಕ ಶಕ್ತಿಯಾಗಿ ಗ್ಯಾರಂಟಿಗಳು ಕುರಿತು ಉಪನ್ಯಾಸ ನೀಡಿ, ರಾಜ್ಯ ಸರ್ಕಾರವು ಕಳೆದ ಎರಡು-ಮೂರು ವರ್ಷಗಳಲ್ಲಿ ಈ ಯೋಜನೆಗಳಿಗಾಗಿ ಒಟ್ಟು ೧ ಲಕ್ಷ ೧೬ ಸಾವಿರ ಕೋಟಿ ರೂ.ಗಳನ್ನು ವ್ಯಯಿಸಿದೆ ಎಂದು ಮಾಹಿತಿ ನೀಡಿದರು. ಈ ಬೃಹತ್ ಮೊತ್ತವನ್ನು ನೇರವಾಗಿ ಮಹಿಳೆಯರು ಮತ್ತು ಯುವಜನರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವ ಮೂಲಕ ಜನಸಾಮಾನ್ಯರ ಆರ್ಥಿಕ ಸ್ಥಿತಿಯನ್ನು ಬಲಪಡಿಸಲಾಗಿದೆ ಎಂದರು.
ಯೋಜನೆಗಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರಗಳ ಬಗ್ಗೆ ಮಾತನಾಡಿದ ಅವರು, ಈ ಗ್ಯಾರಂಟಿಗಳು ಜಾರಿಯಾಗುವುದಿಲ್ಲ ಅಥವಾ ಚುನಾವಣೆಯ ನಂತರ ನಿಂತುಹೋಗುತ್ತವೆ ಎಂಬ ವದಂತಿಗಳು ಸುಳ್ಳಾಗಿವೆ ಮತ್ತು ಮುಂಬರುವ ಬಜೆಟ್‌ನಲ್ಲಿಯೂ ಇವು ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದರು.
ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂಬ ಟೀಕೆಗಳನ್ನು ತಳ್ಳಿಹಾಕಿದ ಅವರು, ಜನರ ಕೈಗೆ ಹಣ ಮತ್ತು ಉಚಿತ ಸೌಲಭ್ಯಗಳು ತಲುಪುವುದರಿಂದ ಅವರ ಬದುಕು ಹಸನಾಗುತ್ತಿದೆ ಎಂದರು. ವಿಶೇಷವಾಗಿ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿದ್ದು, ಫಲಾನುಭವಿಗಳು ಈ ಯೋಜನೆಗಳ ಮಹತ್ವದ ಬಗ್ಗೆ ಸಮಾಜದಲ್ಲಿ ಹೆಮ್ಮೆಯಿಂದ ಮಾತನಾಡಬೇಕು ಎಂದು ಕರೆ ನೀಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿವೆ. ಗೃಹಲಕ್ಷ್ಮಿ ಯೋಜನೆಯು ಜಿಲ್ಲೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದು, ಇಲ್ಲಿಯವರೆಗೆ ಒಟ್ಟು ೧,೩೧೯ ಕೋಟಿ ರೂ.ಗಳನ್ನು ಮಹಿಳಾ ಯಜಮಾನಿಯರ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಜಿಲ್ಲೆಯ ಸುಮಾರು ೩ ಲಕ್ಷ ಮನೆಗಳ ಪೈಕಿ ೨,೬೨,೪೨೮ ಮಹಿಳಾ ಯಜಮಾನಿಯರು ಪ್ರತಿ ತಿಂಗಳು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಪ್ರತಿ ತಿಂಗಳು ಸರಾಸರಿ ೫೨.೪೫ ಕೋಟಿ ರೂ.ಗಳು ಜಿಲ್ಲೆಯ ಮಹಿಳೆಯರ ಕೈ ಸೇರುತ್ತಿವೆ. ತಾಂತ್ರಿಕ ಕಾರಣಗಳಿಂದ ಹಣ ಸಂದಾಯವಾಗದ ಪ್ರಕರಣಗಳನ್ನು ಪರಿಹರಿಸಲು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ನೆರವಾಗುತ್ತಿದ್ದಾರೆ ಎಂದರು.
’ಶಕ್ತಿ’ ಯೋಜನೆಯಡಿ ಜಿಲ್ಲೆಯ ಆರು ಡಿಪೋಗಳ ಮೂಲಕ ಇದುವರೆಗೆ ಮಹಿಳೆಯರು ಒಟ್ಟು ೫ ಕೋಟಿ ೯೫ ಲಕ್ಷ ಬಾರಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಯೋಜನೆಯ ಯಶಸ್ವಿ ನಿರ್ವಹಣೆಗಾಗಿ ಸರ್ಕಾರವು ಕೆ.ಎಸ್.ಆರ್.ಟಿ.ಸಿಗೆ ೨೩೧ ಕೋಟಿ ರೂಪಾಯಿಗಳ ಅನುದಾನ ನೀಡಿದೆ. ಇದಲ್ಲದೆ, ಪ್ರಯಾಣಿಕರ ಅನುಕೂಲಕ್ಕಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ೮ ರಿಂದ ೧೧ ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ ಎಂದರು.
ಜಿಲ್ಲೆಯ ಸುಮಾರು ೮,೨೧,೫೯೬ ಜನರಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಮತ್ತು ಹಣ ತಲುಪುತ್ತಿದ್ದು, ಇದು ಜಿಲ್ಲೆಯ ಒಟ್ಟು ಜನಸಂಖ್ಯೆಯ ಶೇ.೭೫ ರಿಂದ ೮೦ ರಷ್ಟು ಜನರನ್ನು ತಲುಪಿದಂತಾಗಿದೆ. ಇನ್ನು ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯ ಒಟ್ಟು ೩,೧೦,೦೦೦ ಮನೆಗಳ ಪೈಕಿ ೩,೦೬,೦೦೦ ಮನೆಗಳಿಗೆ, ಅಂದರೆ ಸುಮಾರು ೧೦ ಲಕ್ಷ ಜನರಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆಯುತ್ತಿದೆ. ಯುವನಿಧಿ ಯೋಜನೆಯ ಮೂಲಕ ಜಿಲ್ಲೆಯ ೫,೬೪೧ ಪದವೀಧರ ಹಾಗೂ ಡಿಪ್ಲೊಮಾ ನಿರುದ್ಯೋಗಿಗಳಿಗೆ ಇದುವರೆಗೆ ಒಟ್ಟು ೧೪.೫ ಕೋಟಿ ರೂ.ಗಳ ಭತ್ಯೆಯನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದರು.
ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್, ತರೀಕೆರೆ ಶಾಸಕ ಜಿ.ಹೆಚ್.ಶ್ರೀನಿವಾಸ್, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಮಾತನಾಡಿದರು. ರಾಜ್ಯ ಪರಿಸರ ಮೌಲ್ಯ ಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್.ಮಹೇಶ್, ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್.ಹರೀಶ್, ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಕಾರ್ಯಕ್ರಮದಲ್ಲಿದ್ದರು. ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಸ್ವಾಗತಿಸಿದರು. ಸಮಾವೇಶಕ್ಕೆ ಮುನ್ನ ನಗರದ ಆಜಾದ್‌ಪಾರ್ಕ್ ವೃತ್ತದಿಂದ ಕುವೆಂಪು ಕಲಾಮಂದಿರದವರೆಗೆ ಗ್ಯಾರಂಟಿ ಯೋಜನೆಗಳ ಕುರಿತ ಆಕರ್ಷಕ ಮೆರವಣಿಗೆ ನಡೆಯಿತು.
Guarantee schemes are the economic strength of the state.
Leave a comment