ಚಿಕ್ಕಮಗಳೂರು: ಮುಖ್ಯಮಂತ್ರಿಗಳು ಏಪ್ರಿಲ್ ೧೩ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಮಾಡಲಿದ್ದಾರೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ ತಿಳಿಸಿದರು.
ನರಸಿಂಹರಾಜಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿಗಳ ಭೇಟಿ ಕಾರ್ಯಕ್ರಮದ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಸುಮಾರು ೧೫೦ ಕೋಟಿ ರೂ.ಗಳಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಸಿಗಲಿದೆ. ಗುದ್ದಲಿ ಪೂಜೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯಬೇಕಿದ್ದು, ಇದರಲ್ಲಿ ಅಧಿಕಾರಿಗಳ ಜವಾಬ್ದಾರಿ ದೊಡ್ಡದಿದೆ ಎಂದರು.
ಯಾವುದೇ ಕಾರಣಕ್ಕೂ ಕೆಲಸದಲ್ಲಿ ನಿರ್ಲಕ್ಷ್ಯ ಸಲ್ಲದು. ಮಲೆನಾಡಿನ ಸಂಸ್ಕೃತಿ ಮತ್ತು ಶಿಸ್ತನ್ನು ಬಿಂಬಿಸುವ ರೀತಿಯಲ್ಲಿ ಕಾರ್ಯಕ್ರಮ ರೂಪಿಸಬೇಕು. ಸಭೆ ಮತ್ತು ಸಮಾರಂಭದ ನಡುವೆ ಅಧಿಕಾರಿಗಳು ಶಿಸ್ತು ಕಾಪಾಡಿಕೊಳ್ಳಬೇಕು. ಕಾರ್ಯಕ್ರಮದ ಸಿದ್ಧತೆಗಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಮಾರ್ಗದರ್ಶನ ನೀಡಲಿದ್ದು, ಅಧಿಕಾರಿಗಳಿಗೆ ಬೇಕಾದ ಪೂರಕ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮಾತನಾಡಿ, ಮುಖ್ಯಮಂತ್ರಿಗಳು ಏಪ್ರಿಲ್ ೧೩ ರಂದು ರಸ್ತೆ ಅಗಲೀಕರಣದ ಭೂಮಿ ಪೂಜೆ, ಸೇತುವೆ ಉದ್ಘಾಟನೆ ಹಾಗೂ ಶೃಂಗೇರಿ ಕ್ಷೇತ್ರ ಮಟ್ಟದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.
ಅಧಿಕಾರಿಗಳು ತಮಗೆ ವಹಿಸಿರುವ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದ ಅವರು, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ವೇದಿಕೆಯನ್ನು ಅಚ್ಚುಕಟ್ಟಾಗಿ ನಿರ್ಮಿಸುವಂತೆ ಸೂಚಿಸಿದ ಅವರು, ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತಿತರ ಸೌಲಭ್ಯಗಳನ್ನು ಒದಗಿಸುವಂತೆ, ಆರೋಗ್ಯ ಇಲಾಖೆಯಿಂದ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ಸಭೆಯಲ್ಲಿ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೀರ್ತನ, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಪ ಕಾರ್ಯದರ್ಶಿ ಗೌರವ್ ಕುಮಾರ ಶೆಟ್ಟಿ, ತರೀಕೆರೆ ಉಪ ವಿಭಾಗಾಧಿಕಾರಿ ನಟೇಶ್, ೩ ತಾಲೂಕುಗಳ ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.
Indications for the success of the Chief Minister’s program in the district
Leave a comment