ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ಕಾಡಾನೆ ಮತ್ತು ಕಾಡೆಮ್ಮೆಗಳ ಬೆನ್ನಲ್ಲೇ ಇದೀಗ ಕಾಡು ಹಂದಿಗಳ ಭೀತಿ ಹೆಚ್ಚಾಗಿದೆ.
ಮೂಡಿಗೆರೆ ತಾಲೂಕಿನ ಆಲೂರು ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆಯ ಮೇಲೆ ಕಾಡು ಹಂದಿ ದಾಳಿ ನಡೆಸಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ವಿವರ: ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಆಲೂರು ಗ್ರಾಮದ ಲಕ್ಷ್ಮಿ (41) ಎಂಬುವವರೇ ಹಂದಿ ದಾಳಿಗೆ ಒಳಗಾದವರು. ಇವರು ಎಂದಿನಂತೆ ತಮ್ಮ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ, ಪೊದೆಯೊಳಗೆ ಅಡಗಿದ್ದ ಕಾಡು ಹಂದಿ ಏಕಾಏಕಿ ನುಗ್ಗಿ ದಾಳಿ ಮಾಡಿದೆ.
ಈ ಅನಿರೀಕ್ಷಿತ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ಲಕ್ಷ್ಮಿ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯರ ಸಹಾಯದಿಂದ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಕಾಡು ಪ್ರಾಣಿಗಳ ದಾಳಿಗಳು ನಡೆಯುತ್ತಿರುವುದರಿಂದ ಸ್ಥಳೀಯ ರೈತರಲ್ಲಿ ಆತಂಕ ಹೆಚ್ಚಾಗಿದೆ.
Woman seriously injured in wild boar attack
Leave a comment