ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಮತ್ತು ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರನ್ನು ಭಯಭೀತರನ್ನಾಗಿಸಿದ್ದ ಅಂತರ್ ಜಿಲ್ಲಾ ಸರಗಳ್ಳನನ್ನು ಬಂಧಿಸುವಲ್ಲಿ ಕೊಪ್ಪ ಉಪವಿಭಾಗದ ವಿಶೇಷ ಪೊಲೀಸ್ ತನಿಖಾ ತಂಡ ಯಶಸ್ವಿಯಾಗಿದೆ.
ಬಂಧಿತ ಆರೋಪಿಯಿಂದ ₹4,83,000 ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಾಸನ ಜಿಲ್ಲೆ ಆಲೂರು ತಾಲೂಕಿನ ಮಾದಿಹಳ್ಳಿ ಮೂಲದ, ಪ್ರಸ್ತುತ ಕೊಪ್ಪ ತಾಲೂಕಿನ ಜಯಪುರದಲ್ಲಿ ಲಾರೆನ್ಸ್ ಹೌಸ್‌ನಲ್ಲಿ ವಾಸವಿದ್ದ ಪ್ರವೀಣ್ ಎಂಬಿ (25) ಬಂಧಿತ ಆರೋಪಿಯಾಗಿದ್ದು, ಈತ ಬಿಂದು ಜೀರಾ ಕಂಪನಿಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಕಳೆದ 2025ರ ಡಿಸೆಂಬರ್ 5 ರಂದು ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾರಣ್ಯಪುರ ಗ್ರಾಮದ ಭವಾನಿ ಎಂಬುವವರು ನಡೆದುಕೊಂಡು ಹೋಗುತ್ತಿದ್ದಾಗ, ಬೈಕಿನಲ್ಲಿ ಬಂದ ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಸುಮಾರು 24 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು.
ಈ ಬಗ್ಗೆ ಶೃಂಗೇರಿ ಠಾಣೆಯಲ್ಲಿ ಬಿ.ಎನ್.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಜೀತೇಂದ್ರ ಕುಮಾರ್ ದಾಯಮ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಸಿ.ಟಿ. ಹಾಗೂ ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.
ಶೃಂಗೇರಿ ಪೊಲೀಸ್ ನಿರೀಕ್ಷಕ ಅಬ್ದುಲ್ ಖಾದರ್ ನೇತೃತ್ವದಲ್ಲಿ ಪಿಎಸ್‌ಐಗಳಾದ ನಾಗರಾಜ್ ಬಿ ಆರ್, ಅಭಿಷೇಕ್ ಕೆ, ಮಧು ಬಿ, ಶ್ರೀಧರ ನಾಯ್ಕ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ವೈಜ್ಞಾನಿಕ ಹಾಗೂ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಹೆಡೆಮುರಿಕಟ್ಟಿದೆ.
ಬಂಧಿತ ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಆತ ಶೃಂಗೇರಿ ಕೃತ್ಯದ ಜೊತೆಗೆ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹಾಲ್ಕತ್ತೂರು ಗ್ರಾಮದ ಲೋಕಪರಮೇಶ್ವರಿ ದೇವಸ್ಥಾನದ ರಸ್ತೆಯಲ್ಲೂ ಮಹಿಳೆಯೊಬ್ಬರ ಚಿನ್ನದ ಸರ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ನ್ಯಾಯಾಲಯದ ಅನುಮತಿ ಮೇರೆಗೆ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದ ಅಧಿಕಾರಿಗಳು, ಆತ ಶಿವಮೊಗ್ಗದಲ್ಲಿ ಮಾರಾಟ ಮಾಡಿದ್ದ ಒಟ್ಟು 30.830 ಗ್ರಾಂ ತೂಕದ ಚಿನ್ನದ ಸರವನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
ಇದರೊಂದಿಗೆ ಒಂದು ವಿವೋ ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ್ದ ಹೀರೋ ಸ್ಪೆಂಡರ್ ಪ್ಲಸ್ ಬೈಕನ್ನು ಜಪ್ತಿ ಮಾಡಲಾಗಿದೆ. ಸರಗಳ್ಳತನದ ಎರಡು ಪ್ರಮುಖ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ, ಕದ್ದ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಶ್ರಮಿಸಿದ ಕೊಪ್ಪ ಉಪವಿಭಾಗದ ವಿಶೇಷ ಅಪರಾಧ ತನಿಖಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಕರ್ತವ್ಯ ನಿಷ್ಠೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದು, ಸೂಕ್ತ ಬಹುಮಾನ ಘೋಷಿಸಿದ್ದಾರೆ.
Inter-district chain gang arrested by Special Police Investigation Team
Leave a comment