ಚಿಕ್ಕಮಗಳೂರು: ಪತ್ನಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು ₹75 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ವಿವರದಂತೆ, ಆರೋಪಿ ತನ್ನ ಪತ್ನಿಯನ್ನು ಪ್ರೀತಿಸಿ ವಿವಾಹವಾಗಿದ್ದನು. 2025ರ ಜನವರಿ 14ರಂದು ಸಂಜೆ 6 ಗಂಟೆ ಸುಮಾರಿಗೆ ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಆಕೆ ಸುಮಾರು 9 ತಿಂಗಳ ಗರ್ಭಿಣಿಯಾಗಿದ್ದರೂ, ಆರೋಪಿ ಆಕೆಯೊಂದಿಗೆ ಜಗಳ ಮಾಡಿ, ಆಕೆಯ ತಲೆ ಕೂದಲನ್ನು ಹಿಡಿದು ನೆಲಕ್ಕೆ ಎಳೆದು ಬಲವಾಗಿ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕಮಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪಿಯ ಮೇಲಿನ ಆರೋಪಗಳು ಸಂಶಯಾತೀತವಾಗಿ ಸಾಬೀತಾಗಿವೆ ಎಂದು ತೀರ್ಮಾನಿಸಿತು. ಪ್ರಕರಣದ ಆರೋಪಿ ಮಂಜುನಾಥ ಅಲಿಯಾಸ್ ಮಂಜು (38) ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿ, ವಿವಿಧ ಕಲಂಗಳಡಿ ಒಟ್ಟು ₹75,000 ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
2026ರ ಸೆಪ್ಟೆಂಬರ್ 2ರಂದು ತೀರ್ಪು ಪ್ರಕಟಿಸಲಾಗಿದೆ. ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ತನಿಖೆಗೆ ಸಹಕರಿಸಿದ್ದು, ಸರ್ಕಾರಿ ಅಭಿಯೋಜಕರ ವಾದದ ಆಧಾರದ ಮೇಲೆ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ. ಸರ್ಕಾರಿ ಪರವಾಗಿ ಸರ್ಕಾರಿ ಅಭಿಯೋಜಕರಾದ ಲೋಹಿತಶೇಖರ್ ಹೆಚ್.ಎಸ್. ಅವರು ವಾದ ಮಂಡಿಸಿದ್ದರು.
Life sentence for husband who murdered wife
Leave a comment