ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ಸಿಗುತ್ತಿರುವ ಆರೋಗ್ಯ ಸೇವೆಗಳನ್ನು ಪರಿಶೀಲಿಸಿದರು.
ಆಸ್ಪತ್ರೆಯ ಪರಿಶೀಲನೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರಿಗೆ ಸುಲಲಿತವಾಗಿ ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹೊಸದಾಗಿ ನೇಮಕಗೊಂಡಿರುವ ಡೀನ್ ಹಾಗೂ ಸರ್ಜನ್ ಅವರೊಂದಿಗೆ ಚರ್ಚಿಸಲಾಗಿದ್ದು, ನೇರ ಸಂದರ್ಶನ ಮತ್ತು ಗುತ್ತಿಗೆ ಆಧಾರದ ಮೇಲೆ ವೈದ್ಯರು ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.
ಹೊರರೋಗಿಗಳ ವಿಭಾಗದಲ್ಲಿ ನೋಂದಣಿ, ರಕ್ತ ತಪಾಸಣೆ ಹಾಗೂ ವೈದ್ಯರ ಭೇಟಿಗೆ ತೆಗೆದುಕೊಳ್ಳುವ ಸಮಯವನ್ನು ಕಡಿತಗೊಳಿಸಿ ಶೀಘ್ರ ಸೇವೆ ಸಿಗುವಂತೆ ಸೂಚಿಸಲಾಗಿದೆ. ಪ್ರಸ್ತುತ ವೈರಲ್ ಫೀವರ್ ಹಾಗೂ ಹೆಚ್೧ಎನ್೧ ಪ್ರಕರಣಗಳು ಹೆಚ್ಚುತ್ತಿರುವುದರಿಂದ ತ್ವರಿತ ಚಿಕಿತ್ಸೆಗೆ ಕ್ರಮ ವಹಿಸಲಾಗುವುದು. ರೋಗಿಗಳಿಗೆ ಆಸ್ಪತ್ರೆಯ ಪ್ರವೇಶ ಮತ್ತು ನಿರ್ಗಮನದ ದಾರಿಗಳ ಗೊಂದಲ ನಿವಾರಿಸಲು ಆಸ್ಪತ್ರೆಯ ವಿನ್ಯಾಸಕ್ಕೆ ತಕ್ಕಂತೆ ಸುಧಾರಣೆ ತರಲಾಗುವುದು.
ತುರ್ತು ವಿಭಾಗದಲ್ಲಿ ಪ್ರಸ್ತುತ ೨೪ ಬೆಡ್‌ಗಳಿದ್ದು, ಮುಂಬರುವ ದಿನಗಳಲ್ಲಿ ಮೆಡಿಕಲ್ ಕಾಲೇಜಿನ ಎಂಸಿಎಚ್ ಹಾಗೂ ಸೂಪರ್ ಸ್ಪೆಷಾಲಿಟಿ ವಿಭಾಗಗಳು ಉದ್ಘಾಟನೆಯಾದ ನಂತರ ಜಿಲ್ಲಾ ಆಸ್ಪತ್ರೆಯ ಮೇಲಿನ ಒತ್ತಡ ಕಡಿಮೆಯಾಗಲಿದೆ. ತಾಲೂಕು ಆಸ್ಪತ್ರೆಗಳಿಂದ ಅನಗತ್ಯವಾಗಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಶಿಫಾರಸು ಮಾಡುವುದನ್ನು ತಡೆಯಲಾಗುವುದು. ಆಸ್ಪತ್ರೆಯ ಆವರಣದಲ್ಲಿ ಹಾಳಾದ ರಸ್ತೆಗಳ ದುರಸ್ತಿ ಹಾಗೂ ನೀರಿನ ಸಮಸ್ಯೆಯನ್ನು ನಗರಸಭೆ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಲಾಗುವುದು. ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಬಸ್ ಸೌಕರ್ಯ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.
ಆಸ್ಪತ್ರೆಯಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸೂಚನೆ: ಆಸ್ಪತ್ರೆಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಕುಂದುಕೊರತೆಗಳ ಕುರಿತು ಮಾಹಿತಿ ನೀಡಿದರು. ಆಸ್ಪತ್ರೆಯಿಂದ ರೋಗಿಗಳನ್ನು ಅನಗತ್ಯವಾಗಿ ಬೇರೆ ಆಸ್ಪತ್ರೆಗಳಿಗೆ ರೆಫರ್ ಮಾಡುತ್ತಿರುವ ದೂರುಗಳಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ಸರ್ಕಾರಿ ವೈದ್ಯರು ಖಾಸಗಿಯಾಗಿ ಪ್ರಾಕ್ಟೀಸ್ ಮಾಡುತ್ತಿರುವ ಕುರಿತು ಆಡಳಿತದಿಂದ ಈಗಾಗಲೇ ತನಿಖೆ ಪ್ರಾರಂಭವಾಗಿದೆ ಎಂದು ತಿಳಿಸಿದರು.
ಮೆಡಿಕಲ್ ಕಾಲೇಜಿನಲ್ಲಿ ಸಿಬ್ಬಂದಿಗೆ ಪಿಎಫ್ ಪಾವತಿಯಾಗದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಏಜೆನ್ಸಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ತನಿಖಾ ಸಮಿತಿ ರಚಿಸಲಾಗಿದೆ. ವೈದ್ಯರು ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಎಂಬ ದೂರುಗಳಿಗೆ ಪ್ರತಿಕ್ರಿಯಿಸಿ, ತಮ್ಮ ಭೇಟಿಯ ವೇಳೆ ವೈದ್ಯರು ಉಪಸ್ಥಿತರಿದ್ದರು ಎಂದರಲ್ಲದೆ, ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ವೈದ್ಯರ ಹಾಜರಾತಿ ಬಗ್ಗೆ ಪರಾಮರ್ಶೆ ನಡೆಸಲಾಗುವುದು ಎಂದು ಹೇಳಿದರು.
ಆಸ್ಪತ್ರೆಗೆ ಪ್ರತಿದಿನ ಸಾವಿರದಿಂದ ೧,೨೦೦ಕ್ಕೂ ಹೆಚ್ಚು ರೋಗಿಗಳು ಆಗಮಿಸುತ್ತಿದ್ದು, ವಿಶೇಷವಾಗಿ ಸೋಮವಾರದಂದು ಜನಸಂದಣಿ ಹೆಚ್ಚಿರುತ್ತದೆ. ಸಾರ್ವಜನಿಕರು ಮೊಬೈಲ್ ಮೂಲಕವೇ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಸೌಲಭ್ಯವಿದ್ದು, ಇದರ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಹಳೆಯ ಚೀಟಿಗಳನ್ನು ತಂದರೂ ಪರಿಶೀಲಿಸಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಲ್ಯಾಬ್‌ನಲ್ಲಿ ಸ್ವಯಂಚಾಲಿತ ಯಂತ್ರಗಳು ಲಭ್ಯವಿದ್ದು, ಸಾರ್ವಜನಿಕರಿಗೆ ಶೀಘ್ರ ಸೇವೆ ತಲುಪಿಸಲು ಮತ್ತಷ್ಟು ಸುಧಾರಣೆ ತರುವ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಮೆಡಿಕಲ್ ಕಾಲೇಜಿನ ಡೀನ್ ಡಾ.ಶ್ರೀನಿವಾಸ್ ದೇಶಪಾಂಡೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಮಂಜುನಾಥ್, ಜಿಲ್ಲಾ ಸರ್ಜನ್ ಡಾ.ದೇವರಾಜ್, ಡಾ.ಚಂದ್ರಶೇಖರ್ ಸಾಲಿಮಠ್, ಡಾ.ಲೋಹಿತ್ ಮುಂತಾದವರಿದ್ದರು.
District Collector instructed to strengthen Mallegowda Hospital health service
Leave a comment