ಕಡೂರು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಬಳಿಕ ರಸ್ತೆಗೆ ಬಿದ್ದ ಸವಾರರ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಳೆಹಟ್ಟಿ ಗೇಟ್ ಸಮೀಪ ನಡೆದಿದೆ.
ಮೃತರು ಮೂಲತಃ ರಾಜಸ್ಥಾನ ಮೂಲದವರು ಎಂದು ತಿಳಿದುಬಂದಿದ್ದು, ಅವರ ನಿಖರ ಹೆಸರು ಹಾಗೂ ಇತರ ವಿವರಗಳನ್ನು ಪೊಲೀಸರು ಪತ್ತೆಹಚ್ಚುತ್ತಿದ್ದಾರೆ.
ಕಡೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬಂದ ಮತ್ತೊಂದು ಬೈಕ್ ನಡುವೆ ಹಳೆಹಟ್ಟಿ ಗೇಟ್ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸವಾರರು ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂಬದಿಯಿಂದ ಬಂದ ಸರ್ಕಾರಿ ಬಸ್ ಅವರ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮತ್ತೊಂದು ಬೈಕ್‌ನಲ್ಲಿದ್ದ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಖರಾಯಪಟ್ಟಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಅಪಘಾತದ ನಿಖರ ಕಾರಣ ಹಾಗೂ ಮೃತರ ಗುರುತು ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
Head-on collision between two bikes: Two dead after being run over by a government bus.
Leave a comment