ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಡ್ಡರ ಸಮುದಾಯದವರಿಗೆ ಭೋವಿ ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಅಧಿಕಾರಿಗಳು ಅನಗತ್ಯ ತೊಂದರೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಉಪ್ಪಳ್ಳಿ ಭರತ್ ಆರೋಪಿಸಿದರು.
ನಗರದ ಪ್ರೆಸ್ ಕ್ಲಬ್ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ವಾಸಿಸುತ್ತಿರುವ ವಡ್ಡರ ಸಮುದಾಯದ ಉಪಜಾತಿಗಳಿಗೆ ಸರ್ಕಾರದ ಆದೇಶಗಳಂತೆ ಭೋವಿ ಜಾತಿ ಹೆಸರಿನಲ್ಲಿ ಜಾತಿ ಪ್ರಮಾಣಪತ್ರ ನೀಡಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ (ಎಸ್ಸಿ) ಒಳಪಡುವ ಭೋವಿ ಸಮುದಾಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಅಧಿಸೂಚನೆ ಹಾಗೂ ರಾಜ್ಯ ಸರ್ಕಾರದ ಆದೇಶಗಳಲ್ಲಿ ಭೋವಿ, ಓಡ್, ಒಡ್ಡೆ, ವಡ್ಡರ್, ಒಡ್ಡರ್ ಸೇರಿದಂತೆ ಸಂಬಂಧಿತ ಹೆಸರುಗಳನ್ನು ಸಮಾನಾಂತರ ಪದಗಳಾಗಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಾಸಿಸುತ್ತಿರುವ ವಡ್ಡರ ಉಪಜಾತಿಗಳ ಅರ್ಹರಿಗೆ ಭೋವಿ ಜಾತಿ ಪ್ರಮಾಣಪತ್ರ ನೀಡಲು ಯಾವುದೇ ಗೊಂದಲಕ್ಕೆ ಅವಕಾಶ ಇರಬಾರದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಭೋವಿ ಸಮುದಾಯದವರು ಹಲವು ವರ್ಷಗಳಿಂದ ಭೋವಿ ಜಾತಿ ಪ್ರಮಾಣಪತ್ರಗಳನ್ನು ಪಡೆಯುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ತಾಲೂಕು ಹಾಗೂ ಜಿಲ್ಲೆಗಳಲ್ಲಿ ಪ್ರಮಾಣಪತ್ರ ನೀಡುವ ಸಂದರ್ಭದಲ್ಲಿ ಅಧಿಕಾರಿಗಳು ವಿವಿಧ ಕಾರಣಗಳನ್ನು ಮುಂದಿಟ್ಟು ವಿಳಂಬ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ ಎಂದು ಆರೋಪಿಸಿದರು.
ಜಾತಿ ಪ್ರಮಾಣಪತ್ರ ದೊರೆಯದ ಕಾರಣ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ಇತರ ಅರ್ಹ ಫಲಾನುಭವಿಗಳು ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಬ್ಯಾಂಕ್ ಸಾಲ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯಲು ಮತ್ತು ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಜಾತಿ ಪ್ರಮಾಣಪತ್ರದ ಅಗತ್ಯವಿರುವುದರಿಂದ ಸಮಸ್ಯೆ ಎದುರಾಗಿದೆ ಎಂದು ತಿಳಿಸಿದರು.
ಇದೇ ರೀತಿ, ಸರ್ಕಾರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭೋವಿ ಸಮುದಾಯದ ನೌಕರರು ಮತ್ತು ಅಧಿಕಾರಿಗಳ ಮುಂಬಡತಿಗೂ ಈ ಸಮಸ್ಯೆ ಪರಿಣಾಮ ಬೀರುತ್ತಿದೆ ಎಂದು ಅವರು ಹೇಳಿದರು. ಸಾವಿರಾರು ನೌಕರರು ಮುಂಬಡತಿಯಿಂದ ವಂಚಿತರಾಗಿದ್ದಾರೆ ಎಂದು ಆರೋಪಿಸಿದರು.
ಈ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಕಚೇರಿಗೆ ಮನವಿ ಸಲ್ಲಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷ ಡಾ. ಎಲ್. ಮೂರ್ತಿ ಅವರಿಗೂ ಮನವಿ ಸಲ್ಲಿಸಲಾಗಿದ್ದು, ಈ ಹಿಂದೆ ಯಾರಿಗೆ ಭೋವಿ ಜಾತಿ ಪ್ರಮಾಣಪತ್ರ ನೀಡಲಾಗಿದೆಯೋ, ಅರ್ಹತೆ ಇರುವವರಿಗೆ ಅದೇ ರೀತಿಯ ಪ್ರಮಾಣಪತ್ರ ನೀಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉಪ್ಪಳ್ಳಿ ಭರತ್ ಹೇಳಿದರು.
ಆದರೂ ಕೊಪ್ಪ, ಶೃಂಗೇರಿ, ಕಡೂರು ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಅರ್ಹರಿಗೆ ಪ್ರಮಾಣಪತ್ರ ನೀಡುವಲ್ಲಿ ತೊಂದರೆ ಉಂಟಾಗುತ್ತಿದೆ ಎಂದು ಅವರು ಆರೋಪಿಸಿದರು.
ಜನರ ಕೆಲಸಗಳಿಗೆ ಸ್ಪಂದಿಸದ ಹಾಗೂ ಅನಗತ್ಯ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಬಗ್ಗೆಯೂ ಪರಿಶೀಲನೆ ನಡೆಸಿ, ಅಗತ್ಯವಿದ್ದಲ್ಲಿ ವರ್ಗಾವಣೆ ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಅಧಿಕಾರಿಗಳ ಇಂತಹ ನಡೆಗಳಿಂದ ಸರ್ಕಾರ ಹಾಗೂ ಚುನಾಯಿತ ಪ್ರತಿನಿಧಿಗಳ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲಾಡಳಿತ ಕೂಡಲೇ ಸಮಸ್ಯೆಗಳನ್ನು ಪರಿಹರಿಸಿ ಅರ್ಹರಿಗೆ ಜಾತಿ ಪ್ರಮಾಣಪತ್ರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದೇವರಾಜ್, ಸುಜೀತ್, ಅಭಿ ಹಾಗೂ ಸೋಮಶೇಖರ್ ಉಪಸ್ಥಿತರಿದ್ದರು.
Delay in issuing Bhovi caste certificate
Leave a comment