Home namma chikmagalur chikamagalur ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕಿಂತ ಜನಸೇವೆ ಮುಖ್ಯ
chikamagalurHomeLatest Newsnamma chikmagalur

ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕಿಂತ ಜನಸೇವೆ ಮುಖ್ಯ

Share
Share

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿಗೆ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿರುವುದು ಸಂತಸದ ಸಂಗತಿ. ಕಟ್ಟಡದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸಿ, ಜನಸಾಮಾನ್ಯರ ಕೆಲಸಗಳನ್ನು ಸಕಾಲದಲ್ಲಿ ಮಾಡಿಕೊಟ್ಟಾಗ ಮಾತ್ರ ಕಟ್ಟಡ ನಿರ್ಮಾಣ ಸಾರ್ಥಕವಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

ತಾಲೂಕಿನ ಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಸುಮಾರು ೪೦ ಲಕ್ಷ ರೂ. ವೆಚ್ಚದಲ್ಲಿ ಗ್ರಾಮ ಪಂಚಾಯಿತಿಯ ವರ್ಗ ಒಂದು ಅನುದಾನದಲ್ಲಿ ಕಟ್ಟಡ ನಿರ್ಮಾಣಗೊಂಡಿದೆ. ಸರ್ಕಾರದ ಅನುದಾನಕ್ಕಾಗಿ ಕಾಯದೆ, ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಶ್ರಮಿಸಿದ ಹಿಂದಿನ ಅಧ್ಯಕ್ಷರು, ಸದಸ್ಯರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಅಭಿನಂದಿಸಿದರು.

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸ್ವರೂಪ ಬದಲಾಗಿದ್ದರೂ, ಹೊಸ ಮಾರ್ಗಸೂಚಿಗಳಡಿ ಗ್ರಾಮ ಪಂಚಾಯಿತಿಗಳು ಸಾಧ್ಯವಾದಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಈಗಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಬಡವರ ಬದುಕನ್ನು ಸುಧಾರಿಸುವ ಉದ್ದೇಶದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಗೆ ಮಾಸಿಕ ೨ ಸಾವಿರ ರೂ. ನೀಡಲಾಗುತ್ತಿದ್ದು, ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬ ಫಲಾನುಭವಿಗೂ ೧೦ ಕೆ.ಜಿ. ಅಕ್ಕಿ ಒದಗಿಸುವ ಮೂಲಕ ಯಾರೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ಚಿಕ್ಕಮಗಳೂರು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗಿದೆ. ಬರ ಪರಿಹಾರ ಹಣವನ್ನು ಅರ್ಹ ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸುವ ವ್ಯವಸ್ಥೆ ಮಾಡಲಾಗಿದೆ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರದ ಗಮನಕ್ಕೂ ತರಲಾಗಿದೆ ಎಂದರು.

ಹವಾಮಾನ ವೈಪರೀತ್ಯದ ಪರಿಣಾಮವಾಗಿ ರಾಜ್ಯ ಮಾತ್ರವಲ್ಲದೆ ದೇಶದ ವಿವಿಧ ಭಾಗಗಳಲ್ಲಿಯೂ ಮಳೆ ಕೊರತೆ ಉಂಟಾಗಿದೆ. ಮುಂಬರುವ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ನಾಲ್ಕೈದು ತಿಂಗಳು ಅಧಿಕಾರಿಗಳು ಸವಾಲಾಗಿ ಸ್ವೀಕರಿಸಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಮಲ್ಲೇನಹಳ್ಳಿ ಸೇರಿದಂತೆ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ. ದಾಸರಹಳ್ಳಿ, ಮಲ್ಲೇನಹಳ್ಳಿ ಹಾಗೂ ತೊಗರಿಹಂಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ ಕಾಮಗಾರಿಗಳಿಗೆ ಸುಮಾರು ೧.೨೦ ಕೋಟಿ ರೂ. ವೆಚ್ಚದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಹಲವು ವರ್ಷಗಳಿಂದ ಅಭಿವೃದ್ಧಿಯಾಗದೆ ಉಳಿದಿದ್ದ ರಸ್ತೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.

ಚಿಕ್ಕಮಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ಪೂರ್ಣಗೊಳಿಸಿ ಮುಂದಿನ ಆರರಿಂದ ಎಂಟು ತಿಂಗಳೊಳಗೆ ಸಾರ್ವಜನಿಕರ ಸೇವೆಗೆ ಸಮರ್ಪಿಸುವ ಗುರಿ ಹೊಂದಲಾಗಿದೆ. ನಗರದ ಬಹುದಿನಗಳ ಬೇಡಿಕೆಯಾಗಿರುವ ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಯನ್ನೂ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮ ಪಂಚಾಯಿತಿಗೆ ಖಾತೆ ಬದಲಾವಣೆ, ಜನನ-ಮರಣ ಪ್ರಮಾಣಪತ್ರ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಬರುವ ಬಡವರು ಮತ್ತು ಸಾಮಾನ್ಯ ಜನರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಅವರ ಕೆಲಸಗಳನ್ನು ಅನಗತ್ಯವಾಗಿ ವಿಳಂಬ ಮಾಡದೆ ಸಕಾಲದಲ್ಲಿ ಮಾಡಿಕೊಡುವ ಮೂಲಕ ಜನಸ್ನೇಹಿ ಆಡಳಿತ ನೀಡಬೇಕು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ರವೀಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಷ್ಮಿತಾ, ಕೆಡಿಪಿ ಸದಸ್ಯ ಅಶೋಕ್, ಮುಖಂಡರಾದ ಜೆ.ಬಿ. ಮಹೇಶ್ ಸೇರಿದಂತೆ ಹಿಂದಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Public service is more important than Gram Panchayat building construction

Share

Leave a comment

Leave a Reply

Your email address will not be published. Required fields are marked *

Don't Miss

ವಾಲ್ಮೀಕಿ ರಚಿತ ರಾಮಾಯಣ ಜಗತ್ತಿಗೆ  ಸನ್ಮಾರ್ಗದ ದಾರಿದೀಪ

ಚಿಕ್ಕಮಗಳೂರು:  ಶ್ರೀ ಮಹರ್ಷಿ ವಾಲ್ಮೀಕಿಯವರು ರಚಿಸಿದ ರಾಮಾಯಣ ಮಹಾಕಾವ್ಯವು ಇಡೀ ಜಗತ್ತಿಗೆ ಆದರ್ಶ ಜೀವನ ಮತ್ತು ಸನ್ಮಾರ್ಗದ ದಾರಿ ತೋರಿಸಿದೆ ಎಂದು  ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್...

‘ಪ್ರೇಮದ ಊರಲ್ಲಿ’ ಚಿತ್ರತಂಡಕ್ಕೆ ಚಿಕ್ಕಮಗಳೂರಿನ ಸನ್ಮಾನ

ಚಿಕ್ಕಮಗಳೂರು: ರೈತರ ಬದುಕು, ಕೃಷಿಕರ ಸಂಕಷ್ಟ ಹಾಗೂ ಗ್ರಾಮೀಣ ಬದುಕಿನ ಭಾವನೆಗಳನ್ನು ತೆರೆಮೇಲೆ ಕಟ್ಟಿಕೊಟ್ಟಿರುವ ‘ಪ್ರೇಮದ ಊರಲ್ಲಿ’ ಕನ್ನಡ ಚಲನಚಿತ್ರವು ಯಶಸ್ವಿಯಾಗಿ 25 ದಿನಗಳ ಪ್ರದರ್ಶನ ಪೂರೈಸಿದ್ದು, ಚಿತ್ರತಂಡಕ್ಕೆ ಸೋಮವಾರ ನಗರದ...

Related Articles

ರಾಜ್ಯೋತ್ಸವದಲ್ಲಿ ಕನ್ನಡಕ್ಕೆ ಗೌರವ ನೀಡುವ ಸಂಕಲ್ಪ ಮಾಡೋಣ

ಚಿಕ್ಕಮಗಳೂರು: ಕನ್ನಡ ರಾಜ್ಯೋತ್ಸವದಲ್ಲಿ ನಾವು ಕೆಲವು ಸಂಕಲ್ಪಗಳನ್ನು ಮಾಡೋಣ. ನಮ್ಮ ಮನೆಯಲ್ಲಿ, ಶಾಲೆಯಲ್ಲಿ, ಕಚೇರಿಯಲ್ಲಿ ಮತ್ತು...

ಕಾರು ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು

ಕಡೂರು: ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಡೂರು...

ಮಾಕೋನಹಳ್ಳಿ ಗ್ರಾಮದ ಶನೇಶ್ವರ ದೇವಸ್ಥಾನದಲ್ಲಿ ಕಳ್ಳತನ

ಮೂಡಿಗೆರೆ: ದೇವಸ್ಥಾನದ ಬೀಗ ಒಡೆದು ದೇವರ ಬೆಳ್ಳಿ ಆಭರಣಗಳು ಹಾಗೂ ಹುಂಡಿಗಳನ್ನು ಕಳ್ಳತನ ಮಾಡಿರುವ ಘಟನೆ...

ಪ್ರತ್ಯೇಕ ಅಪಘಾತದಲ್ಲಿ- ನಾಲ್ವರಿಗೆ ಗಾಯ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಬಾಲಕಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ವಾಹನಗಳು...