ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಸೌಲಭ್ಯಗಳನ್ನು ನೀಡುತ್ತಿರುವುದಾಗಿ ಪ್ರಚಾರ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಮತ್ತೊಂದೆಡೆ ವಿವಿಧ ವಸ್ತುಗಳು ಹಾಗೂ ಸೇವೆಗಳ ಬೆಲೆ ಏರಿಸುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ. ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಮೂಲಕ ರಾಜ್ಯದ ಜನರಿಗೆ ವರದಾನವಾಗುವ ಬದಲು ಶಾಪವಾಗಿ ಪರಿಣಮಿಸಿದೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ. ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ರಾಜ್ಯದಲ್ಲಿ ಜನಸಾಮಾನ್ಯರ ಜೀವನ ನಿರ್ವಹಣೆ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದೆ. ಇತ್ತೀಚೆಗೆ ನಂದಿನಿ ಹಾಲು ಮತ್ತು ಮೊಸರಿನ ದರ ಹೆಚ್ಚಿಸಿದ ಸರ್ಕಾರ ಇದೀಗ ಬಸ್ ಪ್ರಯಾಣ ದರವನ್ನೂ ಏರಿಸುವ ಮೂಲಕ ಜನರಿಗೆ ಮತ್ತೊಂದು ಆರ್ಥಿಕ ಹೊರೆ ಹೊರಿಸಿದೆ ಎಂದು ಟೀಕಿಸಿದ್ದಾರೆ.
ದಿನನಿತ್ಯ ಉದ್ಯೋಗಕ್ಕೆ ತೆರಳುವವರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಗ್ರಾಮೀಣ ಭಾಗದ ಜನರು ಸಾರ್ವಜನಿಕ ಸಾರಿಗೆಯನ್ನೇ ಅವಲಂಬಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಅವರ ಮಾಸಿಕ ವೆಚ್ಚವನ್ನು ಮತ್ತಷ್ಟು ಹೆಚ್ಚಿಸಿದಂತಾಗಿದೆ. ಕಳೆದ ಮೂರೂವರೆ ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಹಾಲು, ಮೊಸರು, ತುಪ್ಪ, ಬೆಣ್ಣೆ ಸೇರಿದಂತೆ ನಂದಿನಿ ಉತ್ಪನ್ನಗಳ ಬೆಲೆ ಏರಿಕೆಯಾಗಿದೆ. ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದಿಂದ ಇಂಧನದ ಹೊರೆ ಹೆಚ್ಚಿದ್ದು, ವಿದ್ಯುತ್, ನೀರು, ಮೆಟ್ರೋ ಪ್ರಯಾಣ, ಆಸ್ತಿ ತೆರಿಗೆ ಹಾಗೂ ವಿವಿಧ ಸರ್ಕಾರಿ ಸೇವೆಗಳ ಶುಲ್ಕಗಳೂ ಏರಿಕೆಯಾಗಿವೆ ಎಂದು ದೂರಿದ್ದಾರೆ.
ಮದ್ಯದ ದರ ಮತ್ತು ಅಬಕಾರಿ ಸುಂಕದಿಂದ ಹಿಡಿದು ಕಟ್ಟಡ ನಿರ್ಮಾಣಕ್ಕೆ ಅಗತ್ಯವಾದ ಮರಳು, ಎಂ-ಸ್ಯಾಂಡ್ ಸೇರಿದಂತೆ ವಿವಿಧ ಸಾಮಗ್ರಿಗಳ ಬೆಲೆಯೂ ಹೆಚ್ಚಾಗಿದೆ. ಇದರಿಂದ ಬಡವರು, ಮಧ್ಯಮ ವರ್ಗದ ಕುಟುಂಬಗಳು, ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಹಾಗೂ ಉದ್ಯಮಿಗಳು ಸೇರಿದಂತೆ ಎಲ್ಲ ವರ್ಗದ ಜನರು ಬೆಲೆ ಏರಿಕೆಯ ಬಿಸಿಯನ್ನು ಎದುರಿಸುವಂತಾಗಿದೆ ಎಂದು ಹೇಳಿದ್ದಾರೆ.
ಸಾರಿಗೆ ವೆಚ್ಚ ಹೆಚ್ಚಾದರೆ ಸರಕು ಸಾಗಣೆ ವೆಚ್ಚವೂ ಹೆಚ್ಚುತ್ತದೆ. ವಿದ್ಯುತ್ ಮತ್ತು ಇಂಧನ ದುಬಾರಿಯಾದರೆ ಉತ್ಪಾದನಾ ವೆಚ್ಚ ಏರಿಕೆಯಾಗುತ್ತದೆ. ಅಂತಿಮವಾಗಿ ಈ ಎಲ್ಲ ಹೊರೆ ಗ್ರಾಹಕರ ಮೇಲೆಯೇ ಬೀಳುತ್ತದೆ. ಹೀಗಾಗಿ ಸರ್ಕಾರದ ಬೆಲೆ ಏರಿಕೆ ನೀತಿ ಪ್ರತಿಯೊಂದು ಕುಟುಂಬದ ಜೀವನ ನಿರ್ವಹಣೆಯನ್ನು ದುಬಾರಿಯಾಗಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೆಲೆ ಏರಿಕೆಯ ವಿವರಗಳು:
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿವಿಧ ವಸ್ತುಗಳು ಮತ್ತು ಸೇವೆಗಳ ದರದಲ್ಲಿ ಏರಿಕೆಯಾಗಿರುವುದನ್ನು ಉಲ್ಲೇಖಿಸಿರುವ ಅವರು, ನಂದಿನಿ ಟೋನ್ಡ್ ಹಾಲಿನ ದರ ಲೀಟರ್‌ಗೆ ₹46ರಿಂದ ₹54ಕ್ಕೆ, ಹೋಮೋಜಿನೈಸ್ಡ್ ಟೋನ್ಡ್ ಹಾಲಿನ ದರ ₹47ರಿಂದ ₹56ಕ್ಕೆ ಹಾಗೂ ವಿಶೇಷ ಟೋನ್ಡ್ ಹಾಲಿನ ದರ ₹52ರಿಂದ ₹64ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.
ನಂದಿನಿ ಮೊಸರಿನ ದರ ಲೀಟರ್‌ಗೆ ₹54ರಿಂದ ₹68ಕ್ಕೆ ಹೆಚ್ಚಿಸಲಾಗಿದ್ದು, ಬಳಿಕ ಮುಖ್ಯಮಂತ್ರಿ ₹2 ಕಡಿತಗೊಳಿಸುವುದಾಗಿ ಘೋಷಿಸಿದ್ದಾರೆ. ಅದು ಜಾರಿಗೆ ಬಂದರೆ ದರ ₹66 ಆಗಲಿದೆ ಎಂದು ಹೇಳಿದ್ದಾರೆ.
2025ರಲ್ಲಿ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಲಾಗಿತ್ತು. ಇದೀಗ ಮತ್ತೊಮ್ಮೆ ದರ ಏರಿಸಲಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಕನಿಷ್ಠ ಟಿಕೆಟ್ ದರ ₹6ರಿಂದ ₹10ಕ್ಕೆ ಹಾಗೂ ಗರಿಷ್ಠ ದರ ₹35ರಿಂದ ₹45ಕ್ಕೆ ಹೆಚ್ಚಳವಾಗಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಬಸ್ ಪ್ರಯಾಣ ದರ ₹160ರಿಂದ ₹197ಕ್ಕೆ ಏರಿಕೆಯಾಗಿದೆ ಎಂದು ವಿವರಿಸಿದ್ದಾರೆ.
2024ರ ಜೂನ್‌ನಲ್ಲಿ ಪೆಟ್ರೋಲ್ ಮೇಲಿನ ರಾಜ್ಯ ಮಾರಾಟ ತೆರಿಗೆಯನ್ನು ಶೇ.25.92ರಿಂದ ಶೇ.29.84ಕ್ಕೆ ಹೆಚ್ಚಿಸಲಾಗಿದ್ದು, ಇದರಿಂದ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ ಸುಮಾರು ₹3 ಹೆಚ್ಚಾಗಿದೆ. ಡೀಸೆಲ್ ಮೇಲಿನ ರಾಜ್ಯ ಮಾರಾಟ ತೆರಿಗೆಯನ್ನೂ ಶೇ.14.34ರಿಂದ ಶೇ.18.44ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
2023ರಲ್ಲಿ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಿಸಲಾಗಿದ್ದು, ನಂತರದ ಸ್ಥಿರ ಶುಲ್ಕ ಮತ್ತು ಇಂಧನ ಹೊಂದಾಣಿಕೆ ಶುಲ್ಕಗಳೂ ಗ್ರಾಹಕರಿಗೆ ಹೆಚ್ಚುವರಿ ಹೊರೆಯಾಗಿವೆ. ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣದ ಗರಿಷ್ಠ ದರವನ್ನು ₹60ರಿಂದ ₹90ಕ್ಕೆ ಹೆಚ್ಚಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
200ಕ್ಕೂ ಹೆಚ್ಚು ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಸೇವೆಗಳ ಬೆಲೆ ಏರಿಕೆ ಮಾಡುತ್ತಲೇ, ಮತ್ತೊಂದೆಡೆ ಗ್ಯಾರಂಟಿ ಯೋಜನೆಗಳ ಸಾಧನೆಯ ಲೆಕ್ಕ ಹೇಳುತ್ತಿರುವ ಸರ್ಕಾರ, ಜನರಿಂದ ತೆರಿಗೆ ಮತ್ತು ಶುಲ್ಕಗಳ ಮೂಲಕ ವಸೂಲಿ ಮಾಡುತ್ತಿರುವ ಹೆಚ್ಚುವರಿ ಹಣದ ಲೆಕ್ಕವನ್ನೂ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಜನರ ಆದಾಯ ಹೆಚ್ಚಾಗಿಲ್ಲ, ಉದ್ಯೋಗಾವಕಾಶಗಳೂ ನಿರೀಕ್ಷಿತ ಪ್ರಮಾಣದಲ್ಲಿ ಸೃಷ್ಟಿಯಾಗಿಲ್ಲ. ಆದರೆ ದಿನನಿತ್ಯದ ಜೀವನಕ್ಕೆ ಅಗತ್ಯವಾದ ವಸ್ತುಗಳು ಮತ್ತು ಸೇವೆಗಳ ವೆಚ್ಚ ಮಾತ್ರ ಹೆಚ್ಚುತ್ತಲೇ ಇದೆ. ಜನಸಾಮಾನ್ಯರು ತಮ್ಮ ಆದಾಯದ ಬಹುಪಾಲನ್ನು ಜೀವನ ನಿರ್ವಹಣೆಗಾಗಿಯೇ ವ್ಯಯಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಜನಪರ ಆಡಳಿತದ ಲಕ್ಷಣವಲ್ಲ ಎಂದು ಟೀಕಿಸಿದ್ದಾರೆ.
ರಾಜ್ಯ ಸರ್ಕಾರ ತಕ್ಷಣ ಬಸ್ ಪ್ರಯಾಣ ದರ ಏರಿಕೆ ಸೇರಿದಂತೆ ಇತ್ತೀಚೆಗೆ ಜಾರಿಗೆ ತಂದಿರುವ ಬೆಲೆ ಏರಿಕೆಗಳನ್ನು ಹಿಂಪಡೆಯಬೇಕು. ಹಾಲು, ಮೊಸರು ಸೇರಿದಂತೆ ಅಗತ್ಯ ವಸ್ತುಗಳು ಹಾಗೂ ಸಾರ್ವಜನಿಕ ಸೇವೆಗಳು ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕೆ ಸೀಮಿತವಾಗದೆ ಜನರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಕೊಡುಗೆ ನೀಡಿದ್ದೇವೆ ಎಂದು ಬೆನ್ನು ತಟ್ಟಿಕೊಳ್ಳುವ ಬದಲು, ಬೆಲೆ ಏರಿಕೆಯ ಮೂಲಕ ಜನರ ಬದುಕನ್ನು ದುಬಾರಿಯಾಗಿಸುವುದನ್ನು ಸರ್ಕಾರ ನಿಲ್ಲಿಸಬೇಕು. ಜನರ ಜೇಬಿಗೆ ಕತ್ತರಿ ಹಾಕುವ ಆಡಳಿತದ ವಿರುದ್ಧ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಡಾ. ರವಿ ಸಿ.ಟಿ. ಎಚ್ಚರಿಸಿದ್ದಾರೆ.
Congress government picks the pockets of the common people
Leave a comment