Home namma chikmagalur chikamagalur ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕು
chikamagalurHomeLatest Newsnamma chikmagalur

ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕು

Share
Share

ಚಿಕ್ಕಮಗಳೂರು: ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಪಕ್ಷದ ಸಂಘಟನೆಗೆ ಮಹತ್ವದ ಅವಕಾಶಗಳಾಗಿವೆ. ಮಂಜೇಗೌಡರ ನೇತೃತ್ವದಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕು. 2028ರ ವಿಧಾನಸಭಾ ಚುನಾವಣೆಯಲ್ಲಿಯೂ ಐದೂ ಕ್ಷೇತ್ರಗಳನ್ನು ಉಳಿಸಿಕೊಳ್ಳುವ ಗುರಿ ಹೊಂದಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ನಗರದ ಗಾಯತ್ರಿ ದೇವಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 110ನೇ ಜನ್ಮದಿನಾಚರಣೆ ಹಾಗೂ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳು ಸಮಾಜದ ಎಲ್ಲ ವರ್ಗಗಳ ಜನರಿಗೆ ನೆರವಾಗುತ್ತಿವೆ. ಸಾಮಾಜಿಕ ಅಸಮಾನತೆ ನಿವಾರಿಸಿ ಸಮಾನ ಅವಕಾಶ ಕಲ್ಪಿಸುವುದು ಕಾಂಗ್ರೆಸ್ ಪಕ್ಷದ ಆಶಯವಾಗಿದೆ. ಬಸವಣ್ಣ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ ಸಮ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕು ಎಂದರು.

ಇಂದಿರಾ ಗಾಂಧಿ ಅವರಿಗೂ ಚಿಕ್ಕಮಗಳೂರು ಜಿಲ್ಲೆಗೂ ಅವಿನಾಭಾವ ಸಂಬಂಧವಿದೆ. 1978ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಮಹತ್ವದ ತಿರುವು ಪಡೆದಿದ್ದರು. ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು 20 ಅಂಶಗಳ ಕಾರ್ಯಕ್ರಮ ಹಾಗೂ ಗರೀಬಿ ಹಠಾವೋ ಘೋಷಣೆಯ ಮೂಲಕ ಬಡವರ ಕಲ್ಯಾಣಕ್ಕೆ ಆದ್ಯತೆ ನೀಡಿದ್ದರು ಎಂದು ಸ್ಮರಿಸಿದರು.

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ನಿರುದ್ಯೋಗ ಮತ್ತು ಬಡತನ ಹೆಚ್ಚಾಗಿದೆ ಎಂದು ಆರೋಪಿಸಿದರು. ಹಿಂದಿನ ಸರ್ಕಾರಗಳ ಅವಧಿಯಲ್ಲಿ ದೇಶದ ಮೇಲಿದ್ದ ಸಾಲ ಸುಮಾರು 53 ಲಕ್ಷ ಕೋಟಿ ರೂ.ಗಳಷ್ಟಿದ್ದರೆ, ಈಗ ಅದು 200 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ಹೇಳಿದರು. ರೈತರ ಆದಾಯ ದುಪ್ಪಟ್ಟುಗೊಳಿಸುವುದು, ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದು ಸೇರಿದಂತೆ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.

ಕರ್ನಾಟಕಕ್ಕೆ ಬರ ಪರಿಹಾರ ನೀಡುವಲ್ಲಿಯೂ ಕೇಂದ್ರ ಸರ್ಕಾರ ವಿಳಂಬ ಮಾಡಿದೆ. ರಾಜ್ಯಕ್ಕೆ ಬರದಿಂದ ಉಂಟಾದ ನಷ್ಟಕ್ಕೆ ಪರಿಹಾರ ಕೋರಿ ಮನವಿ ಸಲ್ಲಿಸಿದರೂ ಸಮರ್ಪಕ ನೆರವು ನೀಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಘೋಷಿಸಿದ್ದ 5,300 ಕೋಟಿ ರೂ.ಗಳನ್ನೂ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಇಂದಿರಾ ಗಾಂಧಿ ಅವರ ಜನ್ಮದಿನದಂದೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜೇಗೌಡರು ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದು ವಿಶೇಷವಾಗಿದೆ. 1978ರಲ್ಲಿ ಇಂದಿರಾ ಗಾಂಧಿ ಅವರ ಚುನಾವಣಾ ಪ್ರಚಾರದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಭಾಗವಹಿಸಿದ್ದ ತಮಗೆ ಚಿಕ್ಕಮಗಳೂರು ಜಿಲ್ಲೆಯೊಂದಿಗಿನ ರಾಜಕೀಯ ಸಂಬಂಧ ಬಹಳ ಹಳೆಯದು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವೆಂದರೆ ಕೇವಲ ಅಧಿಕಾರವಲ್ಲ, ಅದೊಂದು ದೊಡ್ಡ ಜವಾಬ್ದಾರಿ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸರ್ಕಾರದ ಮೇಲೆ ರಾಜಕೀಯ ಒತ್ತಡ ತರುವುದು ಹಾಗೂ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಅನುಷ್ಠಾನಗೊಳಿಸುವುದು ಅಧ್ಯಕ್ಷರ ಕರ್ತವ್ಯವಾಗಬೇಕು ಎಂದು ಹೇಳಿದರು.

ಚುನಾವಣೆಯಲ್ಲಿ ಗೆಲ್ಲುವುದು ಮಾತ್ರ ರಾಜಕಾರಣವಲ್ಲ. ಅಧಿಕಾರ ದೊರೆತ ಬಳಿಕ ಸಮಾಜದ ಎಲ್ಲ ವರ್ಗಗಳ ಕಲ್ಯಾಣಕ್ಕಾಗಿ ದುಡಿಯಬೇಕು. ಚಿಕ್ಕಮಗಳೂರು ಜಿಲ್ಲೆ ಧಾರ್ಮಿಕ ಸೌಹಾರ್ದತೆಗೆ ಹೆಸರಾಗಿದ್ದು, ಬಾಬಾಬುಡನ್ಗಿರಿ ಮತ್ತು ಶೃಂಗೇರಿ ಶಾರದಾಪೀಠ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳನ್ನು ಹೊಂದಿರುವ ಈ ಜಿಲ್ಲೆಯ ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡಬೇಕು ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಮಾತನಾಡಿ, ಇಂದಿರಾ ಗಾಂಧಿ ಅವರು ದೇಶದ ಪ್ರಧಾನಿಯಾಗಿ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ಪ್ರತಿನಿಧಿಸಿದ ಉಕ್ಕಿನ ಮಹಿಳೆಯಾಗಿದ್ದರು. ದೇಶದ ಅಣುಶಕ್ತಿ ಮತ್ತು ಬಾಹ್ಯಾಕಾಶ ಕ್ಷೇತ್ರದ ಬೆಳವಣಿಗೆಗೆ ಅವರ ಕೊಡುಗೆ ಮಹತ್ವದ್ದಾಗಿದೆ ಎಂದರು.

ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಎಲ್ಲರಿಗೂ ಸಮಾನ ಅವಕಾಶ ದೊರೆತಾಗ ಮಾತ್ರ ದೇಶದ ಐಕ್ಯತೆ ಬಲಗೊಳ್ಳಲು ಸಾಧ್ಯ. ಕಾಂಗ್ರೆಸ್ ಪಕ್ಷ ಎಲ್ಲ ಜಾತಿ, ಧರ್ಮ ಮತ್ತು ವರ್ಗದ ಜನರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ಧ್ವನಿಯಿಲ್ಲದ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ 31 ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದು, ಸುಮಾರು 100 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಕಾಮಗಾರಿಗಳು ಆರಂಭವಾಗಿವೆ. ಚಿಕ್ಕಮಗಳೂರು ನಗರದಲ್ಲಿ 20 ಕೋಟಿ ರೂ. ವೆಚ್ಚದ ಆಧುನಿಕ ಬಸ್ ನಿಲ್ದಾಣ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಿದ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ ಮಾತನಾಡಿ, ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದಲ್ಲಿ ದುಡಿದಿದ್ದಕ್ಕೆ ಇಂದು ಜಿಲ್ಲಾ ಅಧ್ಯಕ್ಷನಾಗುವ ಅವಕಾಶ ದೊರೆತಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಾಲ್ಕು ಬಾರಿ ಗೆಲುವು ಸಾಧಿಸಿದ್ದು, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದರೂ ಪಕ್ಷದ ಕಾರ್ಯಕರ್ತನಾಗಿ ನಿರಂತರವಾಗಿ ಕೆಲಸ ಮಾಡಿದ್ದೇನೆ. ಸುಮಾರು ಏಳು ವರ್ಷಗಳಿಗೂ ಹೆಚ್ಚು ಕಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟಿಸಿದ್ದೇನೆ ಎಂದರು.

ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗೂ ತೆಲಂಗಾಣ ಉಸ್ತುವಾರಿ ಬಿ.ಎಂ. ಸಂದೀಪ್, ಶಾಸಕರಾದ ಬಿ.ಎಚ್. ಶ್ರೀನಿವಾಸ್, ಕೆ.ಎಸ್. ಆನಂದ್, ನಯನಾ ಮೋಟಮ್ಮ ಮಾಜಿ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ಮಾತನಾಡಿದರು,

ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಮಾಜಿ ಸಚಿವೆ ಮೋಟಮ್ಮ, ಡಾ. ಆರತಿ ಕೃಷ್ಣ, ಸೇರಿದಂತೆ ಹಲವು. ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು. ಮಾಜಿ ಸಭಾಪತಿ ಬಿ ಎಲ್ ಶಂಕರ್ ಹಾಗೂ ಮುಖಂಡರಾದ ಬಿಬಿ ನಿಂಗಯ್ಯ, ಹೆಚ್ ಹೆಚ್ ದೇವರಾಜ್ ರೇಖಾಹುಲಿಯಪ್ಪ ಗೌಡ ಹಲವು ಮುಖಂಡರು ಉಪಸ್ಥಿತರಿದ್ದರು, ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷ ಎಂಎಸ್ ಶಿವಾನಂದ ಸ್ವಾಮಿ ಸ್ವಾಗತಿಸಿದರು ಜಿಲ್ಲಾ ಕಾಂಗ್ರೆಸ್ ವಕ್ತಾರ ನಿರೂಪಿಸಿದರು

Efforts must be made for a Congress victory in all constituencies of the district.

Share

Leave a comment

Leave a Reply

Your email address will not be published. Required fields are marked *

Don't Miss

ಕೊಪ್ಪ ತಾಲ್ಲೂಕಿನಲ್ಲಿ ಕಾಡುಕೋಣಗಳ ಉಪಟಳ

ಕೊಪ್ಪ: ಕಾಡುಕೋಣಗಳ ಉಪಟಳ ದಿನೇ ದಿನೇ ಮಿತಿ ಮೀರುತ್ತಿದ್ದು, ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಏಕಾಏಕಿ ಕಾಡುಕೋಣ ದಾಳಿಗೆ ಯತ್ನಿಸಿದ ಆತಂಕಕಾರಿ ಘಟನೆ ಕೊಪ್ಪ ಅರಣ್ಯ ವಲಯ ವ್ಯಾಪ್ತಿಯ...

ಕೆಂಪುಬಸ್ ಬಲೂ ಗ್ಯಾರಂಟಿ ಡೇಂಜರ್ ? ಡೇಂಜರ್ ? ಕೆಟ್ಟು ನಿಲ್ಲುವ ಬಸ್ಸುಗಳು

ಚಿಕ್ಕಮಗಳೂರು:  ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಬಲೂ ಡೇಂಜರ್ ಯಾವಾಗ ಎಲ್ಲಿ ಕೆಟ್ಟು ನಿಲ್ಲುತ್ತವೆ ಎಂದು ಪ್ರಯಾಣಿಕರು ದೂರುವುದು ಸಾಮಾನ್ಯವಾಗಿದ್ದು ಜೊತೆಗೆ ತಳ್ಳು ಮಾಡಲ್ ಐಸಾ ಎಂದು ಬಸ್ಸುಗಳನ್ನು ತಳ್ಳುವ ದೃಶ್ಯ ಸಾಮಾನ್ಯವಾಗಿ...

Related Articles

ಕಾಡಾನೆ ದಾಳಿ ಖಂಡಿಸಿ ನರಸಿಂಹರಾಜಪುರ ಬಂದ್‌ ಯಶಸ್ವಿ

ನರಸಿಂಹರಾಜಪುರ: ಬಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆನ್ನಂಗಿ ಗ್ರಾಮದ ರೈತ ಕೃಷ್ಣಮೂರ್ತಿ ಅವರು ಬುಧವಾರ ಕಾಡಾನೆ...

20 ವರ್ಷ ಅಧಿಕಾರದಲ್ಲಿದ್ದರೂ ಜಿಲ್ಲೆಯ ಅಭಿವೃದ್ಧಿಗೆ ರವಿ ಕೊಡುಗೆ ಏನು?

ಚಿಕ್ಕಮಗಳೂರು: ಸುಮಾರು 20 ವರ್ಷಗಳ ಕಾಲ ಶಾಸಕರಾಗಿ ಅಧಿಕಾರ ಅನುಭವಿಸಿರುವ ಸಿ.ಟಿ. ರವಿ ಅವರು ಜಿಲ್ಲೆಗೆ...

ಮನೆಗೆ ನುಗ್ಗಿ ₹3.44 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಹಾಗೂ ನಗದು ಕಳವು

ಚಿಕ್ಕಮಗಳೂರು, ನ.20: ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿ ಕಳ್ಳರು ಮನೆಗೆ ನುಗ್ಗಿ ₹3.44 ಲಕ್ಷ...

ಕೋಮುವಾದಿ ರಾಜಕಾರಣವನ್ನೂ ಸೋಲಿಸಬೇಕು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಜನತೆ ಚುನಾವಣೆಯಲ್ಲಿ ಕೋಮುವಾದಿ ನಾಯಕರನ್ನು ಸೋಲಿಸಿ ಮನೆಗೆ ಕಳುಹಿಸಿದ್ದಾರೆ. ಆದರೆ ಕೇವಲ...