ಚಿಕ್ಕಮಗಳೂರು: ಕೈಗಾರಿಕಾ ಮಾಲಿನ್ಯದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಅಪ್ರಾಪ್ತ ಮಕ್ಕಳನ್ನು ಕಾನೂನುಬಾಹಿರವಾಗಿ ಬಳಸಿಕೊಂಡ ಆರೋಪದಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.18ರಂದು ರಾತ್ರಿ 8.30ಕ್ಕೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪರವಾಗಿ ಮಕ್ಕಳ ಸಹಾಯವಾಣಿ ಸಂಯೋಜಕ ದಿನೇಶ್ ಎ.ಬಿ. ಅವರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಪ್ರಕಾರ, ನ.17ರಂದು ಚಿಕ್ಕಮಗಳೂರು ತಾಲೂಕಿನ ಆಂಬಳೆ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ಮಾಲಿನ್ಯದ ವಿರುದ್ಧ ಗೌಡನಹಳ್ಳಿ ಗ್ರಾಮದ ರೈತರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕ–ಬಾಲಕಿಯರನ್ನು ಪ್ರತಿಭಟನೆಯ ಮುಂಚೂಣಿಯಲ್ಲಿ ಕಾನೂನುಬಾಹಿರವಾಗಿ ತೊಡಗಿಸಿಕೊಂಡಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಅಪ್ರಾಪ್ತ ಮಕ್ಕಳನ್ನು ಪ್ರತಿಭಟನೆಯಲ್ಲಿ ಬಳಸಿಕೊಳ್ಳುವುದರಿಂದ ಅವರ ಶೈಕ್ಷಣಿಕ ಹಕ್ಕುಗಳಿಗೆ ಧಕ್ಕೆಯಾಗುವುದಲ್ಲದೆ, ಅವರ ಸುರಕ್ಷತೆಗೂ ಅಪಾಯ ಉಂಟಾಗುವ ಸಾಧ್ಯತೆಯಿದೆ ಎಂದು ಮಕ್ಕಳ ರಕ್ಷಣಾ ಘಟಕ ತಿಳಿಸಿದೆ.
ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಖುದ್ದು ಭೇಟಿ ನೀಡಿ, ಪ್ರತಿಭಟನೆಯ ಮುಖ್ಯ ಸಂಘಟಕರಾದ ಸುನೀಲ್ ಕುಮಾರ್ ಅವರಿಗೆ ಮಕ್ಕಳನ್ನು ಪ್ರತಿಭಟನೆಯಲ್ಲಿ ಬಳಸಿಕೊಳ್ಳದಂತೆ ಸೂಚನೆ ಹಾಗೂ ಎಚ್ಚರಿಕೆ ನೀಡಿದ್ದರು. ಆದರೆ, ಈ ಸೂಚನೆಯನ್ನು ಲೆಕ್ಕಿಸದೆ ಪ್ರತಿಭಟನೆಯಲ್ಲಿ ಮಕ್ಕಳನ್ನು ಮುಂದುವರಿಸಿ ತೊಡಗಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ, 2015ರ ಸಂಬಂಧಿತ ನಿಯಮಗಳಡಿ ಮುಖ್ಯ ಸಂಘಟಕ ಸುನೀಲ್ ಕುಮಾರ್ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.
ದೂರನ್ನು ಸ್ವೀಕರಿಸಿರುವ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Use of minors in protest – Case filed against organizer
Leave a comment