ಮೂಡಿಗೆರೆ: ಕಾಡಾನೆಗಳ ಸ್ಥಳಾಂತರ ಕಾರ್ಯಾಚರಣೆ ವಿರೋಧಿಸಿ ಹಾಗೂ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಸರ್ವಪಕ್ಷಗಳು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಇಂದು (ಬುಧವಾರ) ಮೂಡಿಗೆರೆ ಪಟ್ಟಣ ಬಂದ್ಗೆ ಕರೆ ನೀಡಲಾಗಿದೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಸರ್ವಪಕ್ಷಗಳ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಸಭೆಯಲ್ಲಿ ಬಂದ್ ನಡೆಸುವ ನಿರ್ಧಾರ ಕೈಗೊಳ್ಳಲಾಯಿತು. ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿ ಅರಣ್ಯ ಇಲಾಖೆ ಕೈಗೊಂಡಿರುವ ಆನೆ ಕಾರ್ಯಾಚರಣೆ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಮುಖಂಡರು ತೀರ್ಮಾನಿಸಿದ್ದಾರೆ.
ಬಂದ್ಗೆ ವಿವಿಧ ಸಂಘಟನೆಗಳು, ವರ್ತಕರು ಹಾಗೂ ಸ್ಥಳೀಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳನ್ನು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಓಡಿಸುವ ಕಾರ್ಯಾಚರಣೆಯಿಂದ ಸಮಸ್ಯೆ ಶಾಶ್ವತವಾಗಿ ಬಗೆಹರಿಯುವುದಿಲ್ಲ. ಇದರಿಂದ ಮತ್ತೊಂದು ಪ್ರದೇಶದ ಜನರಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಜನರ ಜೀವ ಮತ್ತು ಆಸ್ತಿ ರಕ್ಷಣೆಗೆ ಶಾಶ್ವತ ಪರಿಹಾರ ರೂಪಿಸಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.
ಮೂಡಿಗೆರೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿದ್ದು, ಬೆಳೆ ಹಾಗೂ ತೋಟಗಳಿಗೆ ಹಾನಿಯಾಗುವುದರ ಜೊತೆಗೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಕಾಡಾನೆಗಳ ಚಲನವಲನಕ್ಕೆ ಶಾಶ್ವತ ಕಡಿವಾಣ ಹಾಕುವ ಮೂಲಕ ಜನರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಅರಣ್ಯ ಇಲಾಖೆ ನಡೆಸುತ್ತಿರುವ ಪ್ರಸ್ತುತ ಕಾರ್ಯಾಚರಣೆಯನ್ನು ವಿರೋಧಿಸಿ ನಡೆಯಲಿರುವ ಬಂದ್ ಹಾಗೂ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಸಂಘಟನೆಗಳ ಮುಖಂಡರು ಮನವಿ ಮಾಡಿದ್ದಾರೆ.
25ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರ ರಾಜೀನಾಮೆ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕೊಪ್ಪ ತಾಲೂಕಿನ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ವಿವಿಧ ಜವಾಬ್ದಾರಿ ಮತ್ತು ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕೊಪ್ಪ ತಾಲೂಕಿನ ಜಲದುರ್ಗ ಬೂತ್ ಸಮಿತಿ ಅಧ್ಯಕ್ಷ ಐನಾರ್ ಹಾಗೂ ಸಂದೀಪ್ ಅವರ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ತಾಲೂಕು ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಪಂಚಾಯಿತಿಯಿಂದ ಹಿಡಿದು ವಿವಿಧ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದರೂ, ಶಾಸಕರಿಂದ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂದು ರಾಜೀನಾಮೆ ನೀಡಿರುವವರು ಆರೋಪಿಸಿದ್ದಾರೆ. ತಮ್ಮ ಕ್ಷೇತ್ರದ ಕೆಲಸ ಕಾರ್ಯಗಳಿಗೆ ಶಾಸಕರನ್ನು ಭೇಟಿಯಾಗಲು ತೆರಳಿದಾಗ ನಿರೀಕ್ಷಿತ ರೀತಿಯಲ್ಲಿ ಸ್ಪಂದನೆ ಸಿಗುತ್ತಿಲ್ಲ. ಪಕ್ಷದ ಕಾರ್ಯಕರ್ತರಿಗೆ ಗೌರವ ದೊರೆಯುತ್ತಿಲ್ಲ ಎಂಬ ಅಸಮಾಧಾನವನ್ನೂ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮನನೊಂದು ಸ್ವಯಂಪ್ರೇರಿತವಾಗಿ ಪಕ್ಷದ ಜವಾಬ್ದಾರಿ ಹಾಗೂ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಶಾಸಕರ ರಾಜೀನಾಮೆ ಕುರಿತ ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿರುವುದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನಲ್ಲಿ ಅಸಮಾಧಾನ ತೀವ್ರಗೊಂಡಿರುವುದಕ್ಕೆ ಕಾರಣವಾಗಿದೆ.
Mudigere bandh today to oppose the elephant operation
Leave a comment