ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ ಎನ್ನದೆ ಕರಡಿಗಳು ಜನವಸತಿ ಪ್ರದೇಶಗಳ ಸುತ್ತಮುತ್ತ ಸಂಚರಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಅಜ್ಜಂಪುರ ಸೇರಿದಂತೆ ಸೊಕ್ಕೆ, ರಂಗಾಪುರ, ತಿಮ್ಮಾಪುರ, ಕಲ್ಲುಶೆಟ್ಟಿಹಳ್ಳಿ ಹಾಗೂ ಕರಡೀಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಕರಡಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದಾರೆ. ಕರಡಿ ಸಂಚಾರದಿಂದಾಗಿ ರೈತರು, ಕೂಲಿ ಕಾರ್ಮಿಕರು ಹಾಗೂ ರಾತ್ರಿ ವೇಳೆ ಸಂಚರಿಸುವ ಸಾರ್ವಜನಿಕರು ಆತಂಕದಿಂದ ಓಡಾಡುವಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕರಡಿ ಹಾವಳಿ ಕುರಿತು ಅರಣ್ಯ ಇಲಾಖೆಗೆ ಹಲವು ಬಾರಿ ಮಾಹಿತಿ ಹಾಗೂ ದೂರು ನೀಡಿದ್ದರೂ, ಸೂಕ್ತ ಕ್ರಮ ಕೈಗೊಳ್ಳದೆ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕರಡಿಯನ್ನು ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವ ಮೂಲಕ ಜನರ ಆತಂಕ ನಿವಾರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸಮಸ್ಯೆ ಮುಂದುವರಿದರೆ ಅರಣ್ಯ ಇಲಾಖೆಯ ಕಚೇರಿ ಮುಂದೆ ಪ್ರತಿಭಟನೆ ನಡೆಸುವ ಕುರಿತು ಗ್ರಾಮಸ್ಥರು ಚರ್ಚೆ ನಡೆಸುತ್ತಿದ್ದಾರೆ. ಕರಡಿ ಹಾವಳಿಯಿಂದ ಯಾವುದೇ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
Bear infestation around Ajjampur
Leave a comment