ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಹಾಗೂ ವಿಧಾನ ಪರಿಷತ್ ಮಾಜಿ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಆವರಣದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದ ಬಳಿ ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಚಿವ ನಾಗೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.
ನಂತರ ಪ್ರತಿಭಟನಾಕಾರರು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳ ಕಚೇರಿ ಮುಂಭಾಗ ತೆರಳಿ ಪ್ರತಿಭಟನೆ ನಡೆಸಲು ಮುಂದಾದರು. ಮಾರ್ಗಮಧ್ಯೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದರೂ, ಪೊಲೀಸರ ಸೂಚನೆಯನ್ನು ಲೆಕ್ಕಿಸದೆ ಮಹಿಳೆಯರು ಸೇರಿದಂತೆ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಎಸ್‌ಪಿ ಕಚೇರಿ ಕಡೆಗೆ ತೆರಳಲು ಮುಂದಾದರು.
ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು. ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು.
ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ ಶೆಟ್ಟಿ, ನಗರಾಧ್ಯಕ್ಷ ಪುಷ್ಪರಾಜ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಕೆ.ಪಿ. ವೆಂಕಟೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ. ಕಲ್ಮರುಡಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪುಣ್ಯಪಾಲ್, ಬೆಳವಾಡಿ ರವೀಂದ್ರ, ನರೇಂದ್ರ ಸೇರಿದಂತೆ ಮುಖಂಡರಾದ ವಿನೋದ್ ಬೊಗಸೆ, ಪ್ರದೀಪ್ ಕೋಟೆ, ಹಿರೇಮಗಳೂರು ಕೇಶವ, ನಂದೀಶ್ ಮದಕರಿ, ಕಬೀರ್ ಹಾಗೂ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.
BJP protests demanding Minister Nagendra’s resignation
Leave a comment