ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಬಂಡೆಗೆ ಡಿಕ್ಕಿಯೊಡೆದು ಓರ್ವ ಮಹಿಳೆ ಗಂಭೀರ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಗೆ ಬರುವಾಗ ಚಾರ್ಮಾಡಿ ಘಾಟಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನ ಚಾಲಕ ಅತ್ಯಂತ ವೇಗವಾಗಿ ಇದ್ದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೃಹತ್ ಬಂಡೆಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು ಓರ್ವ ಮಹಿಳೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಮಂಗಳೂರಿಗೆ ರವಾನಿಸಲಾಗಿದೆ.
ಚಾರ್ಮಾಡಿ ಘಾಟ್ ರಸ್ತೆಯ ಒಂದು ಬದಿ ಸಾವಿರಾರು ಅಡಿ ಆಳದ ಪ್ರಪಾತವಿರುವ ಮಾರ್ಗ. ರಸ್ತೆಯಲ್ಲಿ ವಾಹನ ಸವಾರರು ಅತ್ಯಂತ ಜಾಗರೂಕತೆ ಹಾಗೂ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು. ಸ್ವಲ್ಪ ಹೆಚ್ಚು ಕಡಿಮೆಯಾದರೂ ದೊಡ್ಡ ಅನಾಹುತವೇ ಸಂಭವಿಸುತ್ತದೆ. ಉಜಿರೆಯಿಂದ ಬರುತ್ತಿದ್ದ ಕಾರು ರಸ್ತೆಯ ಎಡ ಭಾಗದ ಬಂಡೆಗೆ ಡಿಕ್ಕಿ ಹೊಡೆದಿದೆ. ಒಂದು ವೇಳೆ ಕಾರು ಚಾಲಕನಾ ನಿಯಂತ್ರಣ ತಪ್ಪಿ, ಬಲಭಾಗಕ್ಕೆ ನುಗ್ಗಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು.
ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.
Leave a comment