ಕಡೂರು: ಹೊನ್ನಾವರ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿನಿಮೀಯ ರೀತಿಯಲ್ಲಿ ಅಡಿಕೆ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 58 ಲಕ್ಷ ರೂ. ದರೋಡೆ ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಕಡೂರು ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನವೆಂಬರ್ 7ರ ಮಧ್ಯರಾತ್ರಿ ಬೀರೂರು ಮೂಲದ ಅಡಿಕೆ ವ್ಯಾಪಾರಿ ತೌಫಿಕ್ ಅವರು ಫಾರ್ಚುನರ್ ಕಾರಿನಲ್ಲಿ ಬೆಂಗಳೂರಿನಿಂದ ಬರುತ್ತಿದ್ದಾಗ ಕಡೂರು ಪಟ್ಟಣದ ಹೊರವಲಯದಲ್ಲಿ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ 58 ಲಕ್ಷ ರೂ. ಹಣವನ್ನು ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಭದ್ರಾವತಿಯಲ್ಲಿ ಅಡಗಿದ್ದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ತೌಫಿಕ್ ಅವರ ಬಳಿ ಕೆಲಸ ಮಾಡುತ್ತಿದ್ದ ಇರ್ಫಾನ್ ಎಂಬಾತ ಕೆಲಸ ಬಿಟ್ಟ ಬಳಿಕ ದರೋಡೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ. ವ್ಯಾಪಾರಿ ಒಬ್ಬರೇ ಹಣದೊಂದಿಗೆ ಪ್ರಯಾಣಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ತನ್ನ ಸಹಚರರೊಂದಿಗೆ ಸೇರಿ ಕೃತ್ಯ ಎಸಗಿದ್ದನು.
ಈ ಸಂಬಂಧ ಇರ್ಫಾನ್ ಹಾಗೂ ಗೌಸ್ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ 30 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
ಜಿಲ್ಲೆಯ ಅಡಿಕೆ ವ್ಯಾಪಾರಿಗಳಲ್ಲಿ ಆತಂಕ ಮೂಡಿಸಿದ್ದ ಭಾರೀ ದರೋಡೆ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಕಡೂರು ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
Car intercepted and Rs 58 lakh robbed – Five accused arrested
Leave a comment