ಚಿಕ್ಕಮಗಳೂರು: ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿಂದು ರೂ.೭.೩೯ ಕೋಟಿ ವೆಚ್ಚದ ನೂತನ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಇಂಧನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಶಂಕುಸ್ಥಾಪನೆ ನೆರವೇರಿಸಿದರು.
ಖೇಲೋ ಇಂಡಿಯಾ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಯುವ ಜಿಲ್ಲಾಡಳಿತ, ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಈ ಅತ್ಯಾಧುನಿಕ ಟ್ರ್ಯಾಕ್ ನಿರ್ಮಾಣವಾಗಲಿದೆ.
ಈ ವೇಳೆ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ಅನೇಕ ಕಡೆಗಳಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರುತ್ತದೆ. ಆದರೆ ಅವು ಉದ್ಘಾಟನೆಯ ಹಂತಕ್ಕೆ ಬರುವುದೇ ಇಲ್ಲ. ಆದರೆ ಈ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿಗೆ ನಾವು ಈಗಾಗಲೇ ಹಣಕಾಸಿನ ವ್ಯವಸ್ಥೆಯನ್ನು ಪೂರ್ಣಗೊಳಿಸಿದ್ದು, ಈ ಕಾಮಗಾರಿ ಶೀಘ್ರ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ, ರೂ. ೭.೩೯ ಕೋಟಿ ವೆಚ್ಚದಲ್ಲಿ ಈ ಸಿಂಥೆಟಿಕ್ ಟ್ರ್ಯಾಕ್ ಅನ್ನು ಪೂರ್ಣಗೊಳಿಸಲಾಗುತ್ತಿದ್ದು, ಇದಕ್ಕಾಗಿ ಖೇಲೋ ಇಂಡಿಯಾ ಯೋಜನೆಯಡಿ ಉಳಿದಿದ್ದ ರೂ.೩ ಕೋಟಿ, ಸಚಿವ ಕೆ.ಜೆ. ಜಾರ್ಜ್ ಅವರ ಕಂಪನಿಯ ಸಿ.ಎಸ್.ಆರ್. ನಿಧಿಯಿಂದ ರೂ.೨ ಕೋಟಿ ರೂ., ರಾಜ್ಯ ಸರ್ಕಾರದಿಂದ ರೂ.೧.೯೦ ಕೋಟಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿಶೇಷ ಅನುದಾನದಿಂದ ರೂ. ೧ ಕೋಟಿ ರೂ.ಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾಮಗಾರಿಯ ಗುಣಮಟ್ಟದ ಬಗ್ಗೆ ವಿಶೇಷ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು, ಮುಂದಿನ ದಿನಗಳಲ್ಲಿ ಕ್ರೀಡಾಂಗಣದ ಸುತ್ತ ಪೆವಿಲಿಯನ್ ನಿರ್ಮಾಣ ಮತ್ತು ಆಧುನಿಕ ಲೈಟಿಂಗ್ ವ್ಯವಸ್ಥೆ ಅಳವಡಿಸುವ ಮೂಲಕ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಮಂಜುಳಾ ಹುಲ್ಲಹಳ್ಳಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ, ಗುತ್ತಿಗೆದಾರರಾದ ಕೇಶವಮೂರ್ತಿ ಹಾಗೂ ತೀರ್ಥರಾಜು ಮತ್ತಿತರರು ಇದ್ದರು.
Construction of synthetic track at district stadium
Leave a comment