ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.
ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಶಾಸಕ ಟಿ.ಡಿ. ರಾಜೇಗೌಡರ ಚುನಾವಣಾ ಏಜೆಂಟ್ ಸುಧೀರ್ ಕುಮಾರ್ ಮುರೊಳ್ಳಿ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವರಾಜ್ ಹೈಕೋರ್ಟ್ನಿಂದ ತಡೆಯಾಜ್ಞೆ ಪಡೆದಿದ್ದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯ ಇದೀಗ ಪ್ರಕರಣವನ್ನು ವಜಾಗೊಳಿಸಿದೆ.
2023ರ ವಿಧಾನಸಭಾ ಚುನಾವಣೆಯ ಶೃಂಗೇರಿ ಕ್ಷೇತ್ರದ ಫಲಿತಾಂಶದ ಮರು ಎಣಿಕೆ ವಿವಾದ ಮಾತ್ರ ಸುಪ್ರೀಂಕೋರ್ಟ್ನಲ್ಲಿ ಮುಂದುವರಿದಿದೆ. ತಿರಸ್ಕೃತ ಅಂಚೆ ಮತಗಳ ಮರು ಎಣಿಕೆಯಲ್ಲಿ ರಾಜೇಗೌಡರಿಗೆ ಒಂದು ಮತ ಹೆಚ್ಚುವರಿಯಾಗಿ ಲಭಿಸಿ, ಅವರ ಮುನ್ನಡೆ 202ಕ್ಕೆ ಏರಿತ್ತು. ಬಳಿಕ ಚುನಾವಣಾಧಿಕಾರಿ ಪುರಸ್ಕೃತ ಮತಗಳನ್ನೂ ಎಣಿಕೆಗೆ ಪರಿಗಣಿಸಿ ಜೀವರಾಜ್ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಿದ್ದರು. ಇದರ ವಿರುದ್ಧ ರಾಜೇಗೌಡರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಚುನಾವಣಾ ಮತ ಎಣಿಕೆ ಕೊಠಡಿಯ ಸಿಸಿಟಿವಿ ದೃಶ್ಯಾವಳಿ ಲಭ್ಯವಿಲ್ಲದಿರುವ ವಿಚಾರವಾಗಿ ಸುಪ್ರೀಂಕೋರ್ಟ್ ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದು, ಮುಂದಿನ ವಿಚಾರಣೆಗೆ ಅಗತ್ಯ ದಾಖಲೆಗಳು ಹಾಗೂ ದೃಶ್ಯಾವಳಿಗಳನ್ನು ಸಲ್ಲಿಸುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.
ಈ ಪ್ರಕರಣದ ಮುಂದಿನ ವಿಚಾರಣೆ 2027ರ ಫೆಬ್ರವರಿಯಲ್ಲಿ ನಡೆಯಲಿದ್ದು, ಚುನಾವಣಾ ಆಯೋಗ ಸಲ್ಲಿಸಲಿರುವ ದಾಖಲೆಗಳ ಬಗ್ಗೆ ಕುತೂಹಲ ಮೂಡಿದೆ.
Criminal case filed against Jeevaraj dismissed by High Court
Leave a comment