ಚಿಕ್ಕಮಗಳೂರು: ನಗರದ ಸಂತೇ ಮೈದಾನದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ದಲಿತ ಅಪ್ರಾಪ್ತ ಯುವಕನ ಮೇಲೆ ಮುಸ್ಲಿಂ ಯುವಕರ ತಂಡವೊಂದು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ.
ಮುಸ್ಲಿಂ ಸಮುದಾಯದ ಅಪ್ರಾಪ್ತ ಯುವತಿಯ ಜೊತೆ ದಲಿತ ಯುವಕ ಇದ್ದ ಎಂಬ ಕಾರಣಕ್ಕೆ ಈ ಸಂಘರ್ಷ ನಡೆದಿದ್ದು, ಮುಸ್ಲಿಂ ಯುವಕರು ಪ್ರಶ್ನಿಸುತ್ತಿದ್ದಂತೆ ಯುವತಿ ಸ್ಥಳದಿಂದ ನಿರ್ಗಮಿಸಿದ್ದಾರೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಯುವಕ ಮತ್ತು ಯುವತಿ ಇಬ್ಬರೂ ಸ್ನೇಹಿತರಾಗಿದ್ದು, ಎರಡೂ ಕುಟುಂಬಗಳಿಗೂ ಪರಸ್ಪರ ಪರಿಚಯವಿತ್ತು ಎಂದು ತಿಳಿದುಬಂದಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದ ಎಂಟು ಜನರ ವಿರುದ್ಧ ಅಟ್ರಾಸಿಟಿ ಸೇರಿದಂತೆ ವಿವಿಧ ಕಲಂ ಅಡಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಯಾಜ್, ತಬ್ರಿಜ್ ಹಾಗೂ ಹನೀಫ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ತಲೆಮರೆಸಿಕೊಂಡಿರುವ ಉಳಿದ ನಾಲ್ಕು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ನಗರ ಪೊಲೀಸ್ ಠಾಣೆಯಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
Dalit minor attacked by a group of youths
Leave a comment