ಚಿಕ್ಕಮಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಲ್ಲಾ ವೃಂದ ಸಂಘಗಳ ಸಹಯೋಗದಲ್ಲಿ ಮಾರ್ಚ್ ೧೧ ರಿಂದ ಅನಿರ್ಧಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಚಿಕ್ಕಮಗಳೂರು ಜಿಲ್ಲಾ ಘಟಕ ತಿಳಿಸಿದೆ.
ಈ ಸಂಬಂಧ ಸಂಘದ ಅಧ್ಯಕ್ಷ ಡಾ. ಡಿ.ಶ್ರೀನಿವಾಸ್ ಮತ್ತಿತರೆ ಪಾಧಿಕಾರಿಗಳ ನೇತೃತ್ವದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ, ಇನ್ನಿತರೆ ಚುನಾಯಿತ ಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಇಲಾಖೆ ಅಧಿಕಾರಿ, ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಇಲಾಖೆ ಸಚಿವರು ಹಾಗೂ ಉನ್ನತಮಟ್ಟದ ಅಧಿಕಾರಿಗಳಿಗೆ ಹಲವು ಬಾರಿ ಗಮನ ಸೆಳೆದು ಪರಿಹಾರಕ್ಕೆ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ಸಿಕ್ಕದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಮುಷ್ಕರಕ್ಕೆ ಕರೆಕೊಡಲಾಗುತ್ತಿದೆ ಎಂದು ತಿಳಿಸಿದರು.
ಇಲಾಖೆಯಲ್ಲಿ ವಿವಿ ವೃಂದಗಳಲ್ಲಿ ಒಟ್ಟು ೩೬೩೯೭ ಅಧಿಕಾರಿ, ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ವಯೋನಿವೃತ್ತಿ ಮತ್ತು ಇತರೆ ಕಾರಣಗಳಿಂದಾಗಿ ಕಡಿಮೆಯಾಗುತ್ತಿದ್ದು, ಖಾಲಿ ಹುದ್ದೆಗಳ ಭರ್ತಿ ಆಗದೇ ಹಾಲಿ ಇರುವ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚುತ್ತಿರುವ ಕಾರಣ ಖಾಲಿ ಹುದ್ದೆಗಳನ್ನು ತಕ್ಷಣ ತುಂಬಬೇಕು.
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ಇಲಾಖೆಯಿಂದ ಔಷಧಿಗಳನ್ನು ಸರಬರಾಜು ಮಾಡಬೇಕು. ಇಲಾಖೆಯ ಎಲ್ಲಾ ವೃಂದದ ಯಾವುದೇ ಅಧಿಕಾರಿ-ನೌಕರರಿಗೆ ಕಳೆದ ೫ ವರ್ಷಗಳಿಂದ ಮುಂಬಡ್ತಿಗಳನ್ನು ನೀಡಿರುವುದಿಲ್ಲ. ಕೂಡಲೇ ಮುಂಬಡ್ತಿಗಳನ್ನು ನೀಡಬೇಕು ಎಂದರು.
ನಿಯಮಗಳಲ್ಲಿದ್ದಂತೆ ಸೇವಾನಿರತ ವೈದ್ಯರು, ಅಧಿಕಾರಿ-ನೌಕರರ ಉನ್ನತ ವ್ಯಾಸಂಗ, ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ನೀಡಬೇಕು. ಅವೈಜ್ಞಾನಿಕವಾಗಿ ಕೌನ್ಸಿಲಿಂಗ್ ವರ್ಗಾವಣೆ ಮಾಡುತ್ತಿರುವುದನ್ನು ಸರಿಪಡಿಸಬೇಕು. ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ವಾಯತ್ತ ಸಂಸ್ಥೆಗಳಲ್ಲಿ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರ ಪಾಲಿಕೆಗಳಲ್ಲಿ ಮಂಜೂರಾಗಿರುವ ಆರೋಗ್ಯ ಇಲಾಖೆಯ ಎನ್-ಕೇಡರ್ ಹುದ್ದೆಗಳಿಗೆ ನೇಮಕಾತಿ, ಮುಂಬಡ್ತಿ ಮತ್ತು ವರ್ಗಾವಣೆಗಳಿಗೆ ಆರೋಗ್ಯ ಇಲಾಖೆಯ ವೈದ್ಯರು, ಅಧಿಕಾರಿ-ನೌಕರರನ್ನೇ ನಿಯೋಜಿಸಬೇಕು ಎಂದು ಒತ್ತಾಯಿಸಲಾಗಿದೆ.
ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ದೃಷ್ಟಿಯಿಂದ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು. ಆರೆ ವೈದ್ಯಕೀಯ ಹಾಗೂ ಇತರೆ ವೃಂದದ ಹುದ್ದೆಗಳನ್ನು ಭರ್ತಿ ಮಾಡಬೇಕು. ಗುತ್ತಿಗೆ ವೈದ್ಯರು-ನೌಕರರು ಹಾಗೂ ಎನ್.ಹೆಚ್.ಎಂ. ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಹಾಗೂ ಕಾಲ ಕಾಲಕ್ಕೆ ಸೂಕ್ತ ವೇತನ ಹೆಚ್ಚಳ ಮಾಡಬೇಕು. ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆ ಅಡಿ ಕಾರ್ಯನಿರತ ಸುಮಾರು ೬೦೦೦ ಅಧಿಕಾರಿ-ನೌಕರರಿಗೆ ಹಲವಾರು ವರ್ಷಗಳಿಂದ ೩-೪ ತಿಂಗಳಿಗೊಮ್ಮೆ ವೇತನ ಭತ್ಯೆಗಳನ್ನು ನೀಡುತ್ತಿದ್ದು, ಪ್ರತಿ ತಿಂಗಳ ಮೊದಲ ವಾರದಲ್ಲಿ ವೇತನ ಭತ್ಯೆಗಳನ್ನು ನೀಡಬೇಕೆಂದು ಒತ್ತಾಯಿಸಿದರು.
ಸರ್ಕಾರಿ ವೈದ್ಯರುಗಳು ಕರ್ತವ್ಯದ ಅವಧಿಯ ನಂತರ ಖಾಸಗಿ ಸೇವೆಗೆ ಈ ಹಿಂದಿನಂತೆ ಅವಕಾಶ ನೀಡಬೇಕು ಎನ್ನುವ ಬೇಡಿಕೆಗಳನ್ನು ಮುಂಡಿಡಲಾಗಿದೆ. ಅವುಗಳಿಗೆ ಪರಿಹಾರ ನೀಡದೇ ಇದ್ದಲ್ಲಿ ಅನಿವಾರ್ಯವಾಗಿ ಮೊದಲ ಹಂತದಲ್ಲಿ ಮಾರ್ಚ್ ೧೧ ರಿಂದ ೧೫ ರ ವರೆಗೆ ಎಲ್ಲಾ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಮತ್ತು ಡಿಸ್ಪೆನ್ಸರಿಗಳಲ್ಲಿನ ಎಲ್ಲಾ ವೃಂದದ ವೈದ್ಯರು, ಅಧಿಕಾರಿ-ನೌಕರರು ಕಪ್ಪು ಪಟ್ಟಿ ಧರಿಸಿ ಹೊರರೋಗಿಗಳ ಚಿಕಿತ್ಸೆಯನ್ನು ಸ್ಥಗಿತಗೊಳಿಸಿ, ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲಾಗುವುದು ಎಂದಿದ್ದಾರೆ.
ಎರಡನೇ ಹಂತದಲ್ಲಿ ಮಾರ್ಚ್ ೧೬ ರಿಂದ ರಿಂದ ಬೇಡಿಕೆ ಈಡೇರುವವರೆವಿಗೂ ರಾಜ್ಯದ ಆರೋಗ್ಯ ಇಲಾಖೆಯ ಎಲ್ಲಾ ವೈದ್ಯರು, ಅಧಿಕಾರಿ-ನೌಕರರು ಕರ್ತವ್ಯಕ್ಕೆ ಅನಿರ್ಧಿಷ್ಟಾವಧಿವರೆಗೆ ಗೈರುಹಾಜರಾಗುವ ಮೂಲಕ ಮುಷ್ಕರವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆಶ್ವತ್ಥ ಬಾಬು, ಆರ್‌ಸಿ.ಎಚ್. ಹೆಚ್.ಕೆ.ಮಂಜುನಾಥ್, ಡಾ.ಪ್ರತ್ಯಕ್ಷ ಭೈರವ ಇತ್ತಿತರರು ಇದ್ದರು.
Indefinite strike for the fulfillment of various demands
Leave a comment