ಚಿಕ್ಕಮಗಳೂರು: ಕಡೂರು ತಾಲ್ಲೂಕಿನ ಎಮ್ಮೆದೊಡ್ಡಿ ಹಾಗೂ ಕಾಮೇನಹಳ್ಳಿ ವ್ಯಾಪ್ತಿಯ ೨೨ ಗ್ರಾಮಗಳನ್ನು ಕಂದಾಯ ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ವಿಧಾನಸಭೆ ಉಪಸಭಾಪತಿಗಳು ಹಾಗೂ ವಿಧಾನ ಸಭೆ ಅರ್ಜಿಗಳ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ತಿಳಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ವಿಧಾನಸಭೆಯ ಅರ್ಜಿಗಳ ಸಮಿತಿಯು ಅಧಿಕಾರಿಗಳ ಜೊತೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅರಣ್ಯ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು, ಇದೊಂದು ಗಂಭೀರ ಸಮಸ್ಯೆಯಾಗಿದ್ದು, ಹತ್ತಾರು ವರ್ಷಗಳಿಂದ ವಾಸವಾಗಿರುವ ಈ ಗ್ರಾಮದ ನಿವಾಸಿಗಳಿಗೆ ಸರ್ಕಾರದಿಂದ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ.
ಆದರೆ ಇಡೀ ಜಾಗವು ಅರಣ್ಯ ಇಲಾಖೆಯ ಹೆಸರಿನಲ್ಲಿದೆ. ಹಾಗಾಗಿ ಅವರುಗಳಿಗೆ ಹಕ್ಕುಪತ್ರವಾಗಲಿ, ಇ-ಖಾತೆ ಸ್ವತ್ತು ಮಾಡಲಾಗಲಿ ಸಾಧ್ಯವಾಗಿಲ್ಲ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಮಿತಿ ಸದಸ್ಯರು ಹಾಗೂ ಕಡೂರು ಶಾಸಕರು ಆದ ಕೆ.ಎಸ್.ಆನಂದ್ ಗಮನ ಸೆಳೆದರು. ಈ ಬಗ್ಗೆ ಚರ್ಚೆ ನಡೆದು, ಈಗಾಗಲೇ ಜಿಲ್ಲಾಧಿಕಾರಿಗಳು ಪರ್ಯಾಯ ಜಾಗವನ್ನು ಗುರುತಿಸಿದ್ದು, ಈ ಜಾಗವನ್ನು ಅರಣ್ಯ ಇಲಾಖೆಗೆ ನೀಡಲು ಸಭೆ ನಿರ್ಧರಿಸಿತು.
ಅಲ್ಲಿರುವ ನಿವಾಸಿಗಳಿಗೆ ಇರುವ ಸ್ಥಳದಲ್ಲೇ ಹಕ್ಕುಪತ್ರ ಹಾಗೂ ಇ-ಸ್ವತ್ತು ಮಾಡಿಸಿಕೊಡಲು ತೀರ್ಮಾನ ಮಾಡಲಾಯಿತಲ್ಲದೆ, ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಸಮಸ್ಯೆಗೆ ಪರಿಹಾರ ನೀಡುವಂತೆ ಸಭೆ ಸಲಹೆ ನೀಡಿತು. ಈ ಬಗ್ಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಬಗ್ಗೆಯೂ ಸಭೆ ನಿರ್ಧಾರ ಕೈಗೊಂಡಿತು.
ಕಡೂರು ಪಟ್ಟಣದಲ್ಲಿ ತುರ್ತಾಗಿ ಒಳಚರಂಡಿ ವ್ಯವಸ್ಥೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ ಸಂದರ್ಭ ಪಟ್ಟಣದಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೆ ಸಮಸ್ಯೆಯಾಗಿರುವ ಬಗ್ಗೆ ಸಮಿತಿ ಸದಸ್ಯ ಹಾಗೂ ಶಾಸಕ ಕೆ.ಎಸ್.ಆನಂದ್ ಸಭೆಯ ಗಮನ ಸೆಳೆದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್ ಸುಭಾಷ್ ನಾಯಕ್ ಮಾತನಾಡಿ, ಈ ಬಗ್ಗೆ ೧೫೬ ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ಈ ಪೈಕಿ ೩೪ ಕೋಟಿ ರೂ. ಬಿಡುಗಡೆಯಾಗಿದೆ ಎಂದು ಆನಂದ್ ಅವರು ತಿಳಿಸಿದರು.
ಚಿಕ್ಕಮಗಳೂರು ನಗರದಲ್ಲಿ ಕಳಪೆಯಾಗಿರುವ ಒಳಚರಂಡಿ ಕಾಮಗಾರಿಯನ್ನು ಸರಿಪಡಿಸುವ ಬಗ್ಗೆ ಚರ್ಚೆ ನಡೆದಾಗ ಮಾತನಾಡಿದ ಶಾಸಕ ಹೆಚ್.ಡಿ.ತಮ್ಮಯ್ಯ ಅವರು, ೨೦೧೨ ರಲ್ಲಿ ಆರಂಭವಾದ ಈ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಈ ಕಾಮಗಾರಿಯನ್ನು ಜನವರಿ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ತಿಳಿಸಿದರು.
ಕಡೂರು ಪಟ್ಟಣದ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡುವ ಕುರಿತು ಶಾಸಕ ಕೆ.ಎಸ್.ಆನಂದ್ ಸಭೆಯ ಗಮನಕ್ಕೆ ತಂದರು. ಈ ಬಗ್ಗೆ ಚರ್ಚಿಸಿದ ಸಭೆಯು ಈ ಸಂಬಂಧದ ಅಗತ್ಯ ಪ್ರಕ್ರಿಯೆಗಳು ಈಗಾಗಲೇ ಮುಗಿದಿದ್ದು ಸಂಬಂಧಿಸಿದ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿತು.
ಬರಪೀಡಿತ ಪ್ರದೇಶವಾದ ಕಡೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಯ ಬಗ್ಗೆ ಚರ್ಚೆ ನಡೆಸಿದ ಸಭೆಯು ಅಗತ್ಯ ಕ್ರಮ ಕೈಗೊಂಡು ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ವೈದ್ಯಕೀಯ ಕಾಲೇಜಿನ ಅವಶ್ಯಕತೆಗಳ ಬಗ್ಗೆ ತಿಳಿಸಿದರು. ರೈನಿ ರಿಸರ್ಚ್ ಅಂಡ್ ಮ್ಯಾನ್ಯುಫ್ಯಾಕ್ಚರ್ ಸಂಸ್ಥೆಯ ಮೈಕಲ್ ಸದಾನಂದ ಬ್ಯಾಪ್ಟಿಸ್ಟ್ ಅವರು ಹಾಜರಿದ್ದು, ಮಳೆ ನೀರಿನ ಕೊಯ್ಲು ಯೋಜನೆಯ ಬಗ್ಗೆ ಸಭೆಗೆ ವಿಸ್ತೃತ ಮಾಹಿತಿ ನೀಡಿದರು.
ಸಮಿತಿ ಸದಸ್ಯರು ಹಾಗೂ ಶಾಸಕರಾದ ಎಸ್.ಮುನಿರಾಜು, ಯು.ಬಿ.ಬಣಕಾರ್, ಡಾ.ಅವಿನಾಶ್ ಉಮೇಶ್ ಜಾದವ್ ಎಸ್.ಟಿ.ಸೋಮಶೇಖರ್, ಡಾ.ಹೆಚ್.ಡಿ.ರಂಗನಾಥ್, ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Kadur: Necessary action to declare 22 villages as revenue villages
Leave a comment