ಚಿಕ್ಕಮಗಳೂರು: ಚಿಕ್ಕಮಗಳೂರು ಹಾಗೂ ಮೂಡಿಗೆರೆ ಭಾಗದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಪ್ರಮುಖ ಮುಖಂಡರು ಹಾಗೂ ೨೦೦ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್‌ಗೆ ಸೇರ್ಪಡೆಯಾದರು.
ಬುಧವಾರ ಬೆಂಗಳೂರಿನ ಜೆಡಿಎಸ್ ಕೇಂದ್ರ ಕಚೇರಿಯಲ್ಲಿ ಪಕ್ಷದ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ಸಮ್ಮುಖದಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಜೆಡಿಎಸ್ ಶಾಲು ಧರಿಸುವ ಮೂಲಕ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನ ಪ್ರಮುಖ ಆಕಾಂಕ್ಷಿಯಾಗಿದ್ದ ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಭಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು, ಡಿ.ಜೆ. ಸುರೇಶ್, ಡಿ.ಬಿ. ಅಶೋಕ್ ಗೌಡ, ಬಿ.ಎಸ್. ಅಜಿತ್ ಗೌಡ, ಜಿ.ಯು. ಚಂದ್ರೇಗೌಡ ಸೇರಿದಂತೆ ಹಲವು ಮುಖಂಡರು ಹಾಗೂ ೨೦೦ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಸೇರಿದರು.
ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಸಚಿವ ನಾಗೇಂದ್ರ ಅವರ ಮೇಲಿನ ಆರೋಪ ನಿನ್ನೆ-ಮೊನ್ನೆಯದಲ್ಲ. ಕಳೆದ ವರ್ಷದಿಂದಲೇ ಈ ಆರೋಪ ಕೇಳಿಬರುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲೇ ೮೭ ಕೋಟಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಒಪ್ಪಿಕೊಂಡಿದ್ದರೂ, ಇಂತಹ ಗಂಭೀರ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಮತ್ತೆ ಸಚಿವ ಸ್ಥಾನ ನೀಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿ, ನೈತಿಕ ಹೊಣೆ ಹೊತ್ತು ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.
ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳಲ್ಲಿ ಪ್ರವಾಸ ನಡೆಸಿದ ವೇಳೆ ರೈತರ ಪರಿಸ್ಥಿತಿ ಚಿಂತಾಜನಕವಾಗಿರುವುದು ಕಂಡುಬಂದಿದೆ. ರೈತರು ಬೀದಿಗೆ ಬಿದ್ದಿದ್ದು, ರಾಜ್ಯದಲ್ಲಿ ೩ ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯೇ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ವಿಧಾನಸಭೆ ಕಲಾಪದಲ್ಲಿ ನೈಸ್ ರಸ್ತೆ ಹಗರಣ, ಬಿಡದಿ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆಯಾಗಬೇಕಿತ್ತು. ಆದರೆ ರೈತರು ಮತ್ತು ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸದೆ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಚಿಕ್ಕಮಗಳೂರು ಮತ್ತು ಮೂಡಿಗೆರೆ ಭಾಗದ ಪ್ರಮುಖ ಮುಖಂಡರು ಹಾಗೂ ನೂರಾರು ಕಾರ್ಯಕರ್ತರ ಜೆಡಿಎಸ್ ಸೇರ್ಪಡೆಯು ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ಪ್ರಯತ್ನಕ್ಕೆ ಹೊಸ ಚೈತನ್ಯ ನೀಡಿದೆ ಎಂದರು
More than 200 BJP-Congress workers join JDS
Leave a comment