ಚಿಕ್ಕಮಗಳೂರು: ಪೌರ ಕಾರ್ಮಿಕರ ಸಮಸ್ಯೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಹಂತದಲ್ಲಿ ಪರಿಹರಿಸಲು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು.
ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿ?ಧ ಮತ್ತು ಅವರ ಪುನರ್ವಸತಿ ಅಧಿನಿಯಮ ೨೦೧೩ ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೌರ ಕಾರ್ಮಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಅವರಿಗೆ ಸವಲತ್ತುಗಳನ್ನು ಕಲ್ಪಿಸುವತ್ತ ಗಮನ ಹರಿಸಬೇಕು ಎಂದ ಅವರು, ಸರ್ಕಾರ ಪೌರ ಕಾರ್ಮಿಕರಿಗಾಗಿ ನೀಡಿರುವ ಸವಲತ್ತುಗಳನ್ನು ಕೊಡುವಲ್ಲಿ ಅಧಿಕಾರಿಗಳು ವಿಳಂಬ ಮಾಡಬಾರದು ಎಂದರು.
ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಅವರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಸಬೇಕು, ಗುರುತಿನ ಚೀಟಿಯನ್ನು ಕಡ್ಡಾಯವಾಗಿ ನೀಡಬೇಕೆಂದ ಅವರು, ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾದ ವಿಶ್ರಾಂತಿ ಗೃಹಗಳನ್ನು ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಮಾಡಬೇಕಲ್ಲದೆ, ಸರ್ಕಾರಿ ಆಸ್ಪತ್ರೆಗಳಲ್ಲೂ ಕೂಡ ಅವರಿಗೆ ವಿಶ್ರಾಂತಿ ಗೃಹಗಳನ್ನು ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಸ ಸಂಗ್ರಹಣೆಗಾಗಿ ಬರುವ ಪೌರ ಕಾರ್ಮಿಕರಿಗೆ ಕಡಿಮೆ ವೇತನ ನೀಡಲಾಗುತ್ತಿದ್ದು, ಕನಿಷ್ಠ ವೇತನವನ್ನಾದರೂ ನೀಡುವಂತೆ ಸಮಿತಿಯ ಸದಸ್ಯರಾದ ವೆಂಕಟೇಶ್ ಅವರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಈ ಮೊದಲು ಕಸ ಸಂಗ್ರಹಣೆಗೆ ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ಅವಧಿ ಇನ್ನೂ ಒಂದು ತಿಂಗಳಲ್ಲಿ ಮುಗಿಯುತ್ತದೆ. ನಂತರ ಈ ಕುರಿತು ಕ್ರಮ ವಹಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು.
ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಪ್ರತಿ ಮಾಹೆ ೫ನೇ ತಾರೀಖಿನೊಳಗೆ ವೇತನ ಪಾವತಿಸಲು ಕ್ರಮ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದ ಅವರು, ಪೌರ ಕಾರ್ಮಿಕರಿಗೆ ರಜೆ ಮಂಜೂರು ಮಾಡಲು ಸಂಬಂಧಿಸಿದ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಕ್ರಮ ವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಲತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರುಗಳು ಹಾಜರಿದ್ದರು.
Notice to solve the problem of civic workers at taluk level
Leave a comment