ಚಿಕ್ಕಮಗಳೂರು: ನಗರದ ರಾಂಪುರದ ಶ್ರೀನಿವಾಸನಗರದಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿದ್ದ ಶಿವಕುಮಾರ್ ಎಂಬ ಕಾರ್ಮಿಕನಿಗೆ ಅತಿವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ.
ಆದಿಶಕ್ತಿನಗರದಿಂದ ರಾಂಪುರದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ, ಎದುರಿನಿಂದ ನಿರ್ಲಕ್ಷ್ಯ ಹಾಗೂ ದುಡುಕುತನದಿಂದ ಬಂದ ಬೈಕ್ ಸವಾರ ನೇರವಾಗಿ ಶಿವಕುಮಾರ್ ಅವರಿಗೆ ಡಿಕ್ಕಿ ಹೊಡೆದು, ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದ ಶಿವಕುಮಾರ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದರು. ಸ್ಥಳೀಯರು ಕೂಡಲೇ ಅವರನ್ನು ಚಿಕ್ಕಮಗಳೂರು ಸರ್ಕಾರಿ ಎಂ.ಜಿ. ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ, ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಮುಂದುವರಿದರೂ, ಚಿಕಿತ್ಸೆಗೆ ಸ್ಪಂದಿಸದೆ ಬೆಳಗಿನ ಜಾವ ಶಿವಕುಮಾರ್ ಕೊನೆಯುಸಿರೆಳೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಪಘಾತವೆಸಗಿ ಪರಾರಿಯಾಗಿರುವ ಬೈಕ್ ಸವಾರನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಕುರಿತು ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Pedestrian dies in bike collision in Srinivasanagar Rampur
Leave a comment