ಚಿಕ್ಕಮಗಳೂರು: ಪೊಲೀಸ್ ಸಿಬ್ಬಂದಿಯ ಕರ್ತವ್ಯನಿಷ್ಠೆ, ಶಿಸ್ತು ಮತ್ತು ಪ್ರಾಮಾಣಿಕತೆ ಇಲಾಖೆಯ ಪ್ರಮುಖ ಶಕ್ತಿಯಾಗಿದ್ದು, ಒತ್ತಡದ ನಡುವೆಯೂ ಸಮನ್ವಯದಿಂದ ಕೆಲಸ ಮಾಡಲು ಕ್ರೀಡಾಕೂಟಗಳು ಸಹಕಾರಿಯಾಗುತ್ತವೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೇಳಿದರು.
ನಗರದ ರಾಮನಹಳ್ಳಿಯ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ 2026ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿ ಪೊಲೀಸ್ ಇಲಾಖೆಯ ಕೆಲಸ ಇತರ ಇಲಾಖೆಗಳಿಗಿಂತ ವಿಭಿನ್ನವಾಗಿದ್ದು, ಹಬ್ಬ, ಉತ್ಸವ, ಪ್ರತಿಭಟನೆ ಸೇರಿದಂತೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿದ್ದರೂ ಪೊಲೀಸರು ನಿರಂತರವಾಗಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ.
ಸಾರ್ವಜನಿಕರು ಹಬ್ಬ ಹಾಗೂ ರಜಾ ದಿನಗಳನ್ನು ಸಂಭ್ರಮದಿಂದ ಕಳೆಯುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಹೊತ್ತಿರುತ್ತಾರೆ. ವಾರಾಂತ್ಯಗಳಲ್ಲಿಯೂ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಇರುತ್ತದೆ. ಹೀಗಾಗಿ ಪೊಲೀಸ್ ಸಿಬ್ಬಂದಿ ಮಾನಸಿಕ ಒತ್ತಡದ ನಡುವೆಯೂ ಶಿಸ್ತು ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುವುದು ಅತ್ಯಂತ ಅಗತ್ಯ ಎಂದರು.
ಅಧಿಕಾರಿಗಳು ಮತ್ತು ಸಿಬ್ಬಂದಿಯ ನಡುವೆ ಉತ್ತಮ ಬಾಂಧವ್ಯ, ತಂಡದ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ವಾರ್ಷಿಕ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. ವಿವಿಧ ತಾಲೂಕುಗಳಿಂದ ಆಗಮಿಸುವ ಸಿಬ್ಬಂದಿ ಪರಸ್ಪರ ತಮ್ಮ ಅನುಭವ ಮತ್ತು ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಇಂತಹ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗುತ್ತವೆ. ಇದರಿಂದ ಇಲಾಖೆಯಲ್ಲಿ ಒಗ್ಗಟ್ಟು ಮತ್ತು ಪರಸ್ಪರ ಸಹಕಾರದ ಮನೋಭಾವ ಹೆಚ್ಚುತ್ತದೆ ಎಂದು ತಿಳಿಸಿದರು.
ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಬಳಕೆಯಿಂದ ನಕಲಿ ಮಾಹಿತಿ ಮತ್ತು ಸುಳ್ಳು ಸುದ್ದಿಗಳು ಹೆಚ್ಚಾಗುತ್ತಿವೆ. ಇಂತಹ ಸವಾಲಿನ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಪೊಲೀಸರು ಅತ್ಯಂತ ಎಚ್ಚರಿಕೆ, ಜವಾಬ್ದಾರಿ ಮತ್ತು ಕಟ್ಟುನಿಟ್ಟಿನಿಂದ ಕಾರ್ಯನಿರ್ವಹಿಸಬೇಕಾಗಿದೆ. ಇದಕ್ಕೆ ಶಿಸ್ತು, ನಾಯಕತ್ವದ ಗುಣ ಹಾಗೂ ಕರ್ತವ್ಯದ ಬದ್ಧತೆ ಅಗತ್ಯವಾಗಿದೆ ಎಂದು ಹೇಳಿದರು.
ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪೊಲೀಸ್ ಸಿಬ್ಬಂದಿ ನಡೆಸಿಕೊಟ್ಟ ಆಕರ್ಷಕ ಪಥಸಂಚಲನ ಹಾಗೂ ಧ್ವಜವಂದನೆ ಶಿಸ್ತಿನ ಪ್ರತೀಕವಾಗಿತ್ತು. ಇದೇ ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಪೊಲೀಸ್ ಇಲಾಖೆಯ ದೈನಂದಿನ ಕರ್ತವ್ಯದಲ್ಲಿಯೂ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಮಾತನಾಡಿ, ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಎಲ್ಲ ಕ್ರೀಡಾಪಟುಗಳಿಗೆ ಶುಭಾಶಯ ಕೋರಿದರು. ಮೂರು ದಿನಗಳ ಕ್ರೀಡಾಕೂಟವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು. ಕ್ರೀಡೆಯಲ್ಲಿ ಗೆಲುವೊಂದೇ ಮುಖ್ಯವಲ್ಲ. ತಂಡದ ಮನೋಭಾವ, ಆತ್ಮವಿಶ್ವಾಸ, ಪರಸ್ಪರ ಸಹಕಾರ ಹಾಗೂ ಕ್ರೀಡಾಸ್ಫೂರ್ತಿಗೆ ಹೆಚ್ಚಿನ ಮಹತ್ವ ನೀಡಬೇಕು. ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮತ್ತು ತಂಡವಾಗಿ ಸಾಧನೆ ಮಾಡುವ ಮನೋಭಾವ ಮುಖ್ಯ ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ. ಜಯಕುಮಾರ್ ಮಾತನಾಡಿ, ಜಿಲ್ಲಾ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆಗೆ ಆಗಮಿಸಿದ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರನ್ನು ಸ್ವಾಗತಿಸಿದರು. ಕ್ರೀಡಾಕೂಟ ಯಶಸ್ವಿಯಾಗಿ ಆಯೋಜನೆಗೊಳ್ಳಲು ಸಹಕರಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಕ್ರೀಡಾಪಟುಗಳು, ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಜಿಲ್ಲೆಯ ವಿವಿಧ ತಾಲೂಕುಗಳ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದಂತೆ ಆರು ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಮೂರು ದಿನಗಳ ಕಾಲ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಡಿವೈಎಸ್ಪಿಗಳು, ವೃತ್ತ ನಿರೀಕ್ಷಕರು, ಪಿಎಸ್ಐಗಳು, ಎಎಸ್ಐಗಳು, ಪೊಲೀಸ್ ಸಿಬ್ಬಂದಿ, ಅವರ ಕುಟುಂಬ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Police dedication to duty is the department’s key strength.
Leave a comment