ಚಿಕ್ಕಮಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆನ್ನಲಾದ ಪ್ರಕರಣದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಶಾಸಕರೊಬ್ಬರ ಹಿಂಬಾಲಕರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದರು. ರಾಜ್ಯ ಸರ್ಕಾರ ಪ್ರಕರಣ ವನ್ನು ಮುಚ್ಚಿ ಹಾಕಿತು. ಸಿ.ಟಿ.ರವಿಯವರ ಮೇಲೆ ಆರೋಪ ಬಂದ ಕೂಡಲೇ ಅಪರಾಧಿಯಂತೆ ಬಿಂಬಿಸಿದರು. ಸಭಾಧ್ಯಕ್ಷರಿಗೆ ಯಾವುದೇ ಮಾಹಿತಿಯನ್ನು ನೀಡದೆ ಬಂಧಿಸಿರುವುದು ಖಂಡನೀಯ ಎಂದು ತಿಳಿಸಿದರು.
ಇಡೀ ಸುವರ್ಣ ಸೌಧಕ್ಕೆ ಒಂದೇ ಬಾಗಿಲು ಇರುವುದು ಆದರೆ, ಅಷ್ಟು ಬೇಗ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಅಭಿಮಾನಿಗಳು ಹಿಂಬಾಲಕರು ಹೇಗೆ ಜಮಾವಣೆಗೊಂಡರು ಎಂದು ಪ್ರಶ್ನಿಸಿದ ಅವರು ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವಾದರೇ, ರಾಜ್ಯದ ಜನತೆ ಪಾಡೇನು ಎಂದ ಅವರು, ಪ್ರಕರಣವನ್ನು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ನಡೆಸಲಿ ಅದಕ್ಕೆ ನಮ್ಮ ಅಭ್ಯಾಂತರವಿಲ್ಲ ಎಂದು ಹೇಳಿದರು.
ಸಿ.ಟಿ.ರವಿಯನ್ನು ಅತ್ಯಂತ ಕೀಳಾಗಿ ನಡೆಸಿಕೊಂಡಿರುವ ರಾಜ್ಯ ಸರ್ಕಾರದ ನಡೆ ವಿರುದ್ಧ ಬಿಜೆಪಿ ಮುಖಂಡರು ಮತ್ತು ಕಾರ್ಯ ಕರ್ತರು ಚಿಕ್ಕಮಗಳೂರಿನಲ್ಲಿ ಹೋರಾಟ ನಡೆಸಿದ್ದು, 250ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಮುಖಂಡರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಇಂತಹ ಪ್ರಕರಣಗಳಿಗೆ ನಾವು ಹೆದರುವುದಿಲ್ಲ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರು ಕಳಿಸಿದರೇ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದರು.
ಬಿಜೆಪಿ ಮುಖಂಡ ಸಿ.ಎಚ್.ಲೋಕೇಶ್ ಮಾತನಾಡಿ, ಇಡೀ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಕೈಗೊಂಬೆ ಯಂತೆ ಕೆಲಸ ಮಾಡಿದೆ. ಚಿಕ್ಕಮಗಳೂರು ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಶಾಸಕ ಎಚ್.ಡಿ.ತಮ್ಮಯ್ಯ ಅವರು ಸಿ.ಟಿ.ರವಿಯವರು ಹೇಳಿದ ಪದವನ್ನು ನಾನು ಕೇಳಿಸಿಕೊಂಡಿದ್ದೇನೆ ಎಂದು ಮಾದ್ಯಮಗಳ ಮುಂದೇ ಹೇಳಿದ್ದಾರೆ. ಅವರು ವಿಧಾನಸಭೆಯಲ್ಲಿದ್ದರೋ, ವಿಧಾನ ಪರಿಷತ್‌ನಲ್ಲಿದ್ದರೋ ಎಂದು ಸ್ಪಷ್ಟಪಡಿಸಬೇಕು ಎಂದ ಅವರು, ರಾಜ್ಯ ಉಚ್ಛನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರುವುದನ್ನು ಗಮನಿಸಿದಾಗ ಪ್ರಕರಣದಲ್ಲಿ ಸರ್ಕಾರ ತಪ್ಪು ಮಾಡಿರುವುದು ಸಾಭೀತಾಗಿದೆ ಎಂದು ಹೇಳಿದರು.
Leave a comment