ಚಿಕ್ಕಮಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಇಲ್ಲಿನ ಸರ್ಕಾರಿ ಉರ್ದು ಶಾಲೆಯಲ್ಲಿ ನೆಡೆಯುತ್ತಿದ್ದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸುವ ಮುಖಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇವರುಗಳ ವತಿಯಿಂದ ಇಂದು ದೇಶಾದ್ಯಂತ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮುಖಾಂತರ ಪ್ರತಿಭಟಿಸುತ್ತಿದ್ದೇವೆ ಎಂದರು.
೨೫ ವರ್ಷಗಳ ಬೋಧನೆ ಅನುಭವ ಹೊಂದಿರುವ ವೃತ್ತಿನಿರತ ಶಿಕ್ಷಕರಿಗೆ ಅಸಂಬದ್ಧವಾದ ಅರ್ಹತಾ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಕೈಬಿಡಬೇಕೆಂದು ಒತ್ತಾಯಿಸಿದರು.
ಸೇವಾ ಹಿರಿತನದ ಮೇಲೆ ಬಡ್ತಿ ಕೊಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು, ಎನ್ಪಿಎಸ್ ರದ್ದುಮಾಡಿ ಓಪಿಎಸ್ ಜಾರಿಗೊಳಿಸುವ ಮೂಲಕ ಎಲ್ಲಾ ಶಿಕ್ಷಕರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ದೇಶಾದ್ಯಂತ ಎಲ್ಲಾ ಶಿಕ್ಷಕರು ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮುಖಾಂತರ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಈ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ತಾಲ್ಲೂಕು ಅಧ್ಯಕ್ಷ ಅಜ್ಜಯ್ಯ, ಜಿಲ್ಲಾ ಕಾರ್ಯದರ್ಶಿ ಪರಮೇಶ್, ತಾಲ್ಲೂಕು ಕಾರ್ಯದರ್ಶಿ ರವಿ, ಹಾಗೂ ಇನ್ನಿತರ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
Primary school teachers protest for various demands
Leave a comment