ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಾನವ ಹಾಗೂ ವನ್ಯಜೀವಿಗಳ ನಡುವಿನ ಸಂಘರ್ಷ ತಡೆಯಲು ಅರಣ್ಯ ಇಲಾಖೆಯಿಂದ ಹಲವು ಮಹತ್ವದ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದ್ದು, ಮಾನವ ಮತ್ತು ಪ್ರಾಣಿ ಇಬ್ಬರ ಸುರಕ್ಷತೆಗೂ ಆದ್ಯತೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಕೀರ್ತಿಚಕ್ರ ಶ್ರೀ ಪಿ.ಶ್ರೀನಿವಾಸ್ ಅರಣ್ಯ ಸಂಕೀರ್ಣ ಭವನವನ್ನು ಮಂಗಳವಾರ ಉದ್ಘಾಟಿಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ರೂ.೧೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅರಣ್ಯ ಸಂಕೀರ್ಣ ಭವನದ ಎರಡು ಅಂತಸ್ತುಗಳ ನೂತನ ಕಟ್ಟಡವನ್ನು ಉದ್ಘಾಟಿಸಲಾಗಿದೆ. ಈ ಮೊದಲು ಜಿಲ್ಲೆಯ ವಿವಿದೆಡೆ ಹಂಚಿಹೋಗಿದ್ದ ಅರಣ್ಯ ಇಲಾಖೆಯ ಕಚೇರಿಗಳನ್ನು ಈಗ ಒಂದೇ ಸೂರಿನಡಿ ತರಲಾಗಿದ್ದು, ಇದರಿಂದ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಕಾರ್ಯನಿರ್ವಹಿಸಲು ಸಾಕಷ್ಟು ಅನುಕೂಲವಾಗಲಿದೆ ಎಂದರು.
ಮಾನವ-ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ ಸುಮಾರು ೨೦ ಕಿಲೋಮೀಟರ್ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರದಲ್ಲೇ ಈ ಕಾಮಗಾರಿ ಪ್ರಾರಂಭವಾಗಲಿದೆ. ಕಾಡಾನೆಗಳು ಸಂಚರಿಸಲು ಅನುಕೂಲವಾಗುವಂತೆ ಆನೆ ಕಾರಿಡಾರ್ ನಿರ್ಮಿಸಲು ಯೋಜಿಸಲಾಗಿದೆ. ಕಾರಿಡಾರ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆಸ್ತಿಗಳಿರುವುದರಿಂದ, ಜಮೀನು ಸ್ವಾಧೀನ ಪಡಿಸಿಕೊಳ್ಳುವ ಅಥವಾ ಪರ್ಯಾಯ ಜಮೀನು ನೀಡುವ ಪ್ರಸ್ತಾವನೆ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಸದ್ಯ ೪ ಆನೆ ಕಾರ್ಯಪಡೆಗಳು (ಎಲಿಫೆಂಟ್ ಟಾಸ್ಕ್ ಫೋರ್ಸ್) ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚುವರಿಯಾಗಿ ಮತ್ತು ೪ ಪಡೆಗಳನ್ನು ರಚಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಜೂರಾತಿ ದೊರೆತ ತಕ್ಷಣ ಒಟ್ಟು ೮ ಪಡೆಗಳು ಕಾರ್ಯಾಚರಣೆ ನಡೆಸಲಿವೆ. ತರೀಕೆರೆ ತಾಲ್ಲೂಕಿನ ತ್ಯಾಗದ ಬಾಗಿಲು ಬಳಿ ಸುಮಾರು ೫,೦೦೦ ಎಕರೆ ಪ್ರದೇಶದಲ್ಲಿ ಕಾಡಾನೆಗಳನ್ನು ಪಳಗಿಸಿ ಮರಳಿ ಕಾಡಿಗೆ ಬಿಡುವ ಕೇಂದ್ರ ಸ್ಥಾಪಿಸಲಾಗುತ್ತಿದೆ. ಈ ಯೋಜನೆಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಂದಿನ ೫-೬ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸರ್ವೇ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಕೆಲವು ಕಡೆ ಸರ್ವೇಯರ್ ಕೊರತೆಯಿದ್ದು, ಈ ಕುರಿತು ಚರ್ಚಿಸಿ ಮುಂದಿನ ೨-೩ ತಿಂಗಳಲ್ಲಿ ಬಾಕಿ ಸರ್ವೇ ಪೂರ್ಣಗೊಳಿಸಿ ರೈತರ ಸಮಸ್ಯೆ ಪರಿಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶೃಂಗೇರಿ ವಿಧಾನ ಸಭಾ ಕ್ಷೇತ್ರ ಶಾಸಕ ಟಿ.ಡಿ ರಾಜೇಗೌಡ, ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ, ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಶಾಸಕಿ ನಯನ ಮೋಟಮ್ಮ, ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್, ವಿಧಾನ ಪರಿಷತ್ ಸದಸ್ಯರಾದ ಡಾ.ಆರತಿ ಕೃಷ್ಣ, ಎ.ವಿ. ಗಾಯಿತ್ರಿ ಶಾಂತೇಗೌಡ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಖಾರದ ಅಧ್ಯಕ್ಷ ಎಂ.ಸಿ. ಶಿವಾನಂದ ಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ, ಮೀನಾಕ್ಷಿ ನೇಗಿ, ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಚಿಕ್ಕಮಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಯಶ್ಪಾಲ್ ಕ್ಷೀರ ಸಾಗರ್, ಮುಂತಾದವರಿದ್ದರು.
Priority for Preventing Human-Wildlife Conflict
Leave a comment