ಅಜ್ಜಂಪುರ : ಶಾಸಕ ಜಿ.ಹೆಚ್. ಶ್ರೀನಿವಾಸ್ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅಜ್ಜಂಪುರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ಶಿವನಿ ಗ್ರಾಮದಲ್ಲಿ ನಡೆದ ಸರ್ಕಾರಿ ಕಾಮಗಾರಿಗಳ ಗುದ್ದಲಿ ಪೂಜೆ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಶಾಸಕರು, ಭದ್ರಾ ಮೇಲ್ದಂಡೆ ಯೋಜನೆಯಡಿ ಸರ್ಕಾರ ನೀಡಿದ್ದ ಹನಿ ನೀರಾವರಿ ಪರಿಕರಗಳನ್ನು ದಲಿತರು ತಮ್ಮ ಕುಡಿತದ ಚಟಗಳಿಗಾಗಿ ಮಾರಿಕೊಂಡಿದ್ದಾರೆ ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಹೀಗಾಗಿ ದಲಿತಪರ ಸಂಘಟನೆಗಳ ಮುಖಂಡರು ಅಜ್ಜಂಪುರ ಪಟ್ಟಣದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಉಪ ತಹಶೀಲ್ದಾರ್ ನೇತ್ರಾವತಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.
ಇದೇ ವೇಳೆ ಅಜ್ಜಂಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಿಗೆ ದೂರು ನೀಡಿದ ದಲಿತ ಸಂಘಟನೆಗಳ ಪ್ರಧಾನ ಕಾರ್ಯದರ್ಶಿ ಬಸವರಾಜ ಬಿ.ಸಿ. ಅವರು, ಶಾಸಕರ ವಿರುದ್ಧ ಕೂಡಲೇ ಎಫ್.ಐ.ಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಈ ಹೇಳಿಕೆಯು ಸಮುದಾಯಕ್ಕೆ ಮಾಡಿರುವ ಅಪಮಾನವಾಗಿದ್ದು, ಮುಂಬರುವ ಚುನಾವಣೆಗಳಲ್ಲಿ ದಲಿತರು ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ
Protest against MLA G.H. Srinivas
Leave a comment