ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ ಚಿಕ್ಕಮಗಳೂರಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕಿ ಮಂಜುಳಾ ತಿಳಿಸಿದ್ದಾರೆ.
ಈ ಬಾರಿ ಜಿಲ್ಲೆಯಲ್ಲಿ ಒಟ್ಟು 8,890 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಅಭ್ಯರ್ಥಿಗಳಲ್ಲಿ 8,315 ಹೊಸ ವಿದ್ಯಾರ್ಥಿಗಳಾದರೆ, 351 ಪುನರಾವರ್ತಿತ ಅಭ್ಯರ್ಥಿಗಳು, 222 ಖಾಸಗಿ ಅಭ್ಯರ್ಥಿಗಳು ಹಾಗೂ ಇಬ್ಬರು ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಉದ್ದೇಶದಿಂದ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.
ಜಿಲ್ಲೆಯ ಎಲ್ಲಾ ತಾಲೂಕುಗಳೂ ಸೇರಿ ಒಟ್ಟು 19 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಗಾಗಿ ಪ್ರತಿಯೊಂದು ಕೇಂದ್ರದಲ್ಲಿಯೂ ವೆಬ್ಕಾಸ್ಟಿಂಗ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ.
ಈ ವ್ಯವಸ್ಥೆಯನ್ನು ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೆ ರಾಜ್ಯ ಕೇಂದ್ರ ಕಚೇರಿಯಿಂದಲೂ ನೇರವಾಗಿ ವೀಕ್ಷಣೆ ಮಾಡಲಾಗುತ್ತದೆ ಎಂದು ಉಪನಿರ್ದೇಶಕರು ತಿಳಿಸಿದ್ದಾರೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಅವರ ಮಾರ್ಗದರ್ಶನದಂತೆ ಮೂರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.
ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರೀಕ್ಷಾ ದಿನಗಳಂದು ನಿರಂತರ ವಿದ್ಯುತ್ ಸರಬರಾಜು ಮಾಡುವಂತೆ ಮೆಸ್ಕಾಂ ಇಲಾಖೆಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಪರೀಕ್ಷಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ತೋರಿಸಿ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಸಾರಿಗೆ ಇಲಾಖೆಯು ವ್ಯವಸ್ಥೆ ಮಾಡಿದೆ.
ಕಳೆದ ವರ್ಷ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನದಲ್ಲಿದ್ದ ಚಿಕ್ಕಮಗಳೂರು ಜಿಲ್ಲೆಯನ್ನು ಈ ಬಾರಿ ಅಗ್ರ ಸ್ಥಾನಕ್ಕೆ ಕೊಂಡೊಯ್ಯುವ ಗುರಿಯನ್ನು ಇಲಾಖೆ ಹೊಂದಿದೆ. ಇದಕ್ಕಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷವಾಗಿ ಎರಡು ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗಿದ್ದು, ಮೊದಲ ಪರೀಕ್ಷೆಗಿಂತ ಎರಡನೇ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಶೇಕಡಾವಾರು ಫಲಿತಾಂಶ ಸುಧಾರಿಸಿರುವುದು ಆಶಾದಾಯಕವಾಗಿದೆ.
ಪರೀಕ್ಷೆಯ ಭಯವಿಲ್ಲದೆ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಹಾಗೂ ಈ ಬಾರಿ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿ ಇರುವುದಾಗಿ ಇಲಾಖೆಯ ಉಪನಿರ್ದೇಶಕಿ ಮಂಜುಳಾ ಅವರು ತಿಳಿಸಿದ್ದಾರೆ.
Second PUC exam in the district from today
Leave a comment