ಚಿಕ್ಕಮಗಳೂರು: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಅಂಗವಾಗಿ ಆಗಸ್ಟ್ ೨೬ರಿಂದ ಸೆಪ್ಟೆಂಬರ್ ೬ರವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ) ಎಂಬುದು ಅಭಿಯಾನದ ಶೀರ್ಷಿಕೆಯಾಗಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್‌ನ ಜಿಲ್ಲಾ ಸಂಚಾಲಕ ರಿಜ್ವಾನ್ ಖಾಲಿದ್ ತಿಳಿಸಿದರು.
ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾದಿ ಮುಹಮ್ಮದ್(ಸ) ಅವರು ಜಗತ್ತಿನಲ್ಲಿ ತಂದ ಪರಿವರ್ತನೆಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿತ್ತು ಎಂದರು.
ಪ್ರವಾದಿ ಮುಹಮ್ಮದ್(ಸ) ಅವರ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ಅವರ ಕುರಿತು ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸುವುದು ಹಾಗೂ ಪರಸ್ಪರ ಬಾಂಧವ್ಯವನ್ನು ಬಲಪಡಿಸುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ರಿಜ್ವಾನ್ ಖಾಲಿದ್ ತಿಳಿಸಿದರು.
ಅಭಿಯಾನದ ಅಂಗವಾಗಿ ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಯೋಗೇಶ್ ಮಾಸ್ಟರ್ ಅವರು ಬರೆದ ‘ಮಾನವ ಮನಸ್ಸಿನ ಕೃಷಿಕ’ ಮನದೊಡೆಯ ಪ್ರವಾದಿ ಮುಹಮ್ಮದ್(ಸ)’ ಹಾಗೂ ಪತ್ರಕರ್ತ ಅಬ್ದುಸ್ಸಲಾಮ್ ಪುತ್ತಿಗೆ ಅವರು ಬರೆದ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)’ ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಡಾ. ಮಹಮದ್ ಸಾಲಿ, ಸೈಯದ್ ತನ್ವೀರ್ ಹಾಗೂ ಉಮರ್ ಅಹಮದ್ ಉಪಸ್ಥಿತರಿದ್ದರು.
Seerat campaign from August 26 across the state
Leave a comment