ಚಿಕ್ಕಮಗಳೂರು: ನ್ಯಾಯದ ಹರಿಕಾರ ಪ್ರವಾದಿ ಮುಹಮ್ಮದ್ ಅವರ ಸಾರ್ವಕಾಳಿಕ ಬೋಧನೆಗಳನ್ನು ಜನತೆಗೆ ತಿಳಿಯಪಡಿಸಲು ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಸೆಪ್ಟೆಂಬರ್ ೩ ರಿಂದ ೧೪ ರವರೆಗೆ ಸೀರತ್ ಅಭಿಯಾನ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಜಿಲ್ಲಾ ಸಂಚಾಲಕ ರಿಜ್ವಾನ್ ಖಾಲಿದ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರವಾದಿ ಮುಹಮ್ಮದ್‌ರ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ವಿವಿಧ ಧರ್ಮಿಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ತಿಳಿಸಿದರು.
ಈ ಅಭಿಯಾನದ ಪ್ರಯುಕ್ತ ಶಾಂತಿ ಪ್ರಕಾಶನ ಪ್ರಕಟಿಸಿರುವ ಪ್ರವಾದಿಯವರ ಬದುಕು ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಈ ಅಭಿಯಾನದ ಭಾಗವಾಗಿ ರಾಜ್ಯಾದ್ಯಂತ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಹಲವು ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಸಮಾಜ ಸೇವೆ, ವೈಯಕ್ತಿಕ ಭೇಟಿ, ಆಸ್ಪತ್ರೆಗಳಿಗೆ ತೆರಳಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಗುವುದು. ಜಿಲ್ಲೆಯ ವಿವಿಧ ಕಡೆಗಳಲ್ಲಿ ಸೀರತ್ ಅಭಿಯಾನ ನಡೆಯಲಿದೆ. ಮುಸ್ಲಿಂ ಪ್ರಮುಖರೊಂದಿಗೆ ಸಂವಾದ, ಅನ್ಯ ಧರ್ಮಿಯರ ಪ್ರಮುಖರೊಂದಿಗೆ ಸಂವಾದ, ಜನಸಾಮಾನ್ಯ ಹಾಗೂ ಪ್ರಮುಖರೊಂದಿಗೆ ಭೇಟಿ ಮತ್ತು ಚರ್ಚೆ, ಸೀರತ್ ಪ್ರವಚನ ನಡೆಯಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸ್ಥಾನೀಯ ಅಧ್ಯಕ್ಷ ಡಾ.ಮುಹಮ್ಮದ್ ಸಾಲಿಹ್, ಮುಖಂಡರಾದ ಉಸ್ರತ್ ರಹೀಂ, ಇಕ್ಬಾಲ್, ನಯಿಮ್ ಅಹಮದ್ ಉಪಸ್ಥಿತರಿದ್ದರು.
Seerat campaign in the district from Sept. 3
Leave a comment