ಚಿಕ್ಕಮಗಳೂರು: ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರ ಸಹಯೋಗದಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ೨೦೨೫-೨೬ನೇ ಸಾಲಿನ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯನ್ನು ಡಿ.೨೦ ಮತ್ತು ೨೧ ರಂದು ಎರಡು ದಿನಗಳ ಕಾಲ ನಗರದ ಎಐಟಿ ಕಾಲೇಜಿನ ಆಂಫಿ ಥಿಯೇಟರ್‌ನಲ್ಲಿ ಆಯೋಜಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಮಂಜುಳ.ಕೆ ಅವರು ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ವಹಿಸಲಿದ್ದು, ಉದ್ಘಾಟನೆಯನ್ನು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ನೆರವೇರಿಸಲಿದ್ದಾರೆ ಎಂದರು.
ಶಿಕ್ಷಣ ಸಚಿವ ಮಧುಬಂಗಾರಪ್ಪ ಕ್ರೀಡಾ ಧ್ವಜಾರೋಹಣ ನೆರವೇರಿಸುವರು. ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ ಪ್ರಾಣೇಶ್ ಕೀಡಾ ಜ್ಯೋತಿ ಸ್ವೀಕರಿಸುವರು. ಶಾಸಕ ಹೆಚ್.ಡಿ. ತಮ್ಮಯ್ಯ ಅಧ್ಯಕ್ಷತೆ ವಹಿಸುವರು. ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಭೋಜೇಗೌಡ, ಡಾ. ಧನಂಜಯ ಸರ್ಜಿ, ನಗರಸಭಾಧ್ಯಕ್ಷೆ ಶೀಲಾದಿನೇಶ್ ಮತ್ತಿತರರು ಭಾಗವಹಿಸಲಿದ್ದಾರೆಂದು ಹೇಳಿದರು.
ವಿಶೇಷ ಆಹ್ವಾನಿತರಾಗಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿಮಹೇಶ್, ಜಿಲ್ಲಾಧಿಕಾರಿ ಮೀನಾನಾಗರಾಜ್, ಜಿ.ಪಂ ಸಿಇಓ ಹೆಚ್.ಎಸ್. ಕೀರ್ತನ, ಜಿಲ್ಲಾ ಪೊಲೀಸ್ ಅಧೀಕ್ಷಕ ವಿಕ್ರಮ ಅಮಟೆ ಮತ್ತಿತರರು ಭಾಗವಹಿಸಲಿದ್ದಾರೆಂದು ಹೇಳಿದರು.
ಈ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು ೮೦೦ ಸ್ಪರ್ಧಿಗಳು ಭಾಗವಹಿಸುತ್ತಿದ್ದು, ಇಲಾಖೆಯ ವಿವಿಧ ಕಾಲೇಜುಗಳಲ್ಲಿ ಬಾಲಕ-ಬಾಲಕಿಯರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಮಾಡಲಾಗಿದೆ. ಪಂದ್ಯಾವಳಿಯಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಮತ್ತು ತಂಡದ ಮೇಲ್ವಿಚಾರಕರು, ತೀರ್ಪುಗಾರರಿಗೆ ೨ ದಿನ ಊಟ ತಿಂಡಿಯ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಈ ಸಂಬಂಧ ಜಿಲ್ಲಾಧಿಕಾರಿ ಸಿ.ಎನ್.ಮೀನಾನಾಗರಾಜ್‌ರವರ ನೇತೃತ್ವದಲ್ಲಿ ೧೪ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಈ ಕ್ರೀಡಾಕೂಟಕ್ಕೆ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸರು, ಉಪನಿರ್ದೇಶಕರ ಕಚೇರಿ, ಜಿಲ್ಲೆಯ ಕಾಲೇಜುಗಳ ಸಿಬ್ಬಂದಿ ವರ್ಗ ಸಂಪೂರ್ಣ ಸಹಕಾರ ನೀಡಲಿದ್ದು, ರಾಜ್ಯ ಕರಾಟೆ ಅಸೋಸಿಯೇಷನ್ ತಾಂತ್ರಿಕ ಸಹಕಾರ ನೀಡಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಾಚಾರ್ಯರುಗಳಾದ ಸುರೇಂದ್ರ, ವಿರೂಪಾಕ್ಷ, ಸೋಮಶೇಖರ, ಮಂಜುನಾಥ, ನಾಗರಾಜ್‌ರಾವ್ ಕಲ್ಕಟ್ಟೆ ಉಪಸ್ಥಿತರಿದ್ದರು.
State level karate tournament at AIT Amphitheater on December 20-21
Leave a comment