ಚಿಕ್ಕಮಗಳೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ಶಾಸಕ ಎಚ್,ಡಿ, ತಮ್ಮಯ್ಯ ಸಲಹೆ ಮಾಡಿದರು.
ನಗರದ ಐಡಿಎಸ್ ಜಿ ಸರ್ಕಾರಿ ಕಾಲೇಜಿನಲ್ಲಿ ಬುಧವಾರ ನಡೆದ ಕ್ರೀಡಾ, ಸಾಂಸ್ಕೃತಿಕ, ಎನ್‌ಎಸ್‌ಎಸ್, ಎನ್ ಸಿ ಸಿ, ಯುವ ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳು ಸರ್ವಾಂಗೀಣವಾಗಿ ಬೆಳೆಯಲು ಸಹಕಾರಿಯಾಗುತ್ತದೆ, ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ, ಅನುಭವ ಬರುತ್ತದೆ ಎಂದರು.
ವಿದ್ಯಾರ್ಥಿ ಜೀವನದಲ್ಲಿ ಸಾಕಷ್ಟು ಆಕರ್ಷಣೆಗಳಿರುತ್ತವೆ, ಅವುಗಳಿಗೆ ಬಲಿಯಾಗದೇ ವಿದ್ಯಾರ್ಥಿ ಜೀವನವನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಸಿಕ್ಕ ಅವಕಾಶವನ್ನು ಬಳಸಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲ ಗೊಳಿಸಿಕೊಳ್ಳಬೇಕು, ಸಖರಾಯ ಪಟ್ಟಣದ ಅವದೂತರ ಮಾತಿನಂತೆ ಕ್ಷಣಿಕ ಸುಖಕ್ಕೆ ಆಸೆ ಪಡದೇ, ಶಾಶ್ವತವಾದ ಸುಖದ ಗಳಿಕೆಗೆ ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.
ಸಿ ಪಿ ಐ ಜಿಲ್ಲಾ ಕಾರ್ಯದರ್ಶಿ ರಾಧಾ ಸುಂದರೇಶ್ ಮಾತನಾಡಿ ವಿದ್ಯಾರ್ಥಿಗಳು ಸ್ವಾವಲಂಬಿಗಳಾಗಿ ಬದುಕುವುದನ್ನು ಕಲಿಯಬೇಕು, ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲೆ ಡಾ. ಆರ್,ಎ, ಪುಷ್ಪ ಭಾರತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.
ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು, ಕ್ರೀಡಾಪಟುಗಳನ್ನು, ಸಮಾರಂಭದಲ್ಲಿ ಸನ್ಮಾನಿಸಲಾಯಿತು, ಪಿ ಎಚ್ ಡಿ ಪದವಿಗೆ ಪಾತ್ರರಾದ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ, ಕೆ, ಎನ್, ಲಕ್ಷ್ಮಿಕಾಂತ್ ಅವರನ್ನು ಗೌರವಿಸಲಾಯಿತು.
ವಾರ್ಷಿಕೋತ್ಸವದ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಆದಿಲ್, ಉಮೇಶ್, ಸುಮಂತ್, ರಾಜಶೇಖರ್, ಟಿ, ಪಿ, ನಾರಾಯಣ್, ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಎನ್, ಸೋಮಶೇಖರ್, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ಎನ್, ಸತೀಶ್, ಡಾ, ಎಂ, ಜೆ, ಮೋಹನ್ ಕುಮಾರ್, ಕ್ರೀಡಾ ವಿಭಾಗದ ಸಂಚಾಲಕ ಕೆ, ಸಿ, ಕುಮಾರಸ್ವಾಮಿ, ಯುವ ರೆಡ್ ಕ್ರಾಸ್ ಸಂಚಾಲಕ ಡಾ, ಎಂ, ಲೋಕೇಶ್, ಎನ್ ಸಿ ಸಿ ಅಧಿಕಾರಿ ಹೆಚ್, ಡಿ, ಕಾಂತರಾಜು ಉಪಸ್ಥಿತರಿದ್ದರು.
ಇದೇ ವೇಳೆ ಚಲನಚಿತ್ರ ಹಿನ್ನೆಲೆ ಗಾಯಕಿ ರಶ್ಮಿ ಶ್ರೀನಿವಾಸ್ ಅವರಿಂದ ನಡೆದ ಗಾಯನ ಕಾರ್ಯಕ್ರಮ ಗಮನ ಸೆಳೆಯಿತು.
Students should participate in extracurricular activities as well as curricular activities.
Leave a comment