ಚಿಕ್ಕಮಗಳೂರು: ಅರ್ಹ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಪಿಂಚಣಿ ಒದಗಿಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಪಿಂಚಣಿ ಯೋಜನೆಗಳ ಅನುಷ್ಠಾನದಲ್ಲಿರುವ ತಾಂತ್ರಿಕ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ ತಿಳಿಸಿದರು.
ಚಿಕ್ಕಮಗಳೂರು ಪ್ರೆಸ್ ಕ್ಲಬ್‌ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಯೋವೃದ್ಧರು, ವಿಧವೆಯರು ಹಾಗೂ ವಿಶೇಷಚೇತನರು ಸೇರಿದಂತೆ ಅರ್ಹ ಫಲಾನುಭವಿಗಳಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಪಿಂಚಣಿ ಯೋಜನೆಗಳ ಫಲಾನುಭವಿಗಳ ವಾರ್ಷಿಕ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ಇದರಿಂದ ಸಾವಿರಾರು ಅರ್ಹರಿಗೆ ಅನುಕೂಲವಾಗಲಿದೆ ಎಂದರು.
ಅರ್ಹ ಫಲಾನುಭವಿಗಳನ್ನು ಗುರುತಿಸಿ ಅನರ್ಹರನ್ನು ಹೊರಗಿಡುವ ಪ್ರಕ್ರಿಯೆ ನಡೆಯುತ್ತಿದೆ. ಪಿಂಚಣಿ ಪಾವತಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸುವ ಕಾರ್ಯವೂ ಆರಂಭವಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಂಚಣಿ ದಾಖಲೆಗಳೊಂದಿಗೆ ಇ-ಕೆವೈಸಿ ಲಿಂಕ್ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಇದು ಪೂರ್ಣಗೊಂಡ ಕೆಲವೇ ದಿನಗಳಲ್ಲಿ ಅರ್ಹ ಫಲಾನುಭವಿಗಳ ಖಾತೆಗೆ ಪಿಂಚಣಿ ಹಣ ಜಮೆಯಾಗಲಿದೆ ಎಂದು ಹೇಳಿದರು.
69,057 ಅರ್ಜಿಗಳ ಪರಿಶೀಲನೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಈಗಾಗಲೇ 69,057 ಪಿಂಚಣಿ ಅರ್ಜಿಗಳು ಪರಿಶೀಲನೆಗೆ ಒಳಪಟ್ಟಿವೆ. ಈ ಪೈಕಿ 26,229 ಅರ್ಜಿಗಳು ಪುರಸ್ಕೃತವಾಗಿದ್ದು, ಪುರಸ್ಕೃತ ಫಲಾನುಭವಿಗಳಿಗೆ ಮುಂದಿನ ತಿಂಗಳಿನಿಂದ ಪಿಂಚಣಿ ಹಣ ಜಮೆಯಾಗಲಿದೆ. ಇನ್ನೂ 40,626 ಅರ್ಜಿಗಳ ಪರಿಶೀಲನೆ ನಡೆಯುತ್ತಿದೆ. ವಿವಿಧ ಕಾರಣಗಳಿಂದ 2,740 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಮಾಹಿತಿ ನೀಡಿದರು.
ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲನೆಗೂ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜನರ ಬದುಕಿಗೆ ಆರ್ಥಿಕ ಭದ್ರತೆ ಒದಗಿಸುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ಮುಂದುವರಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದರು.
ಪಿಂಚಣಿ ವಿಚಾರದಲ್ಲಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯನ್ನು ಟೀಕಿಸಿದ ಅವರು, ಜನಪರ ಕೆಲಸ ಮಾಡದೆ ಧರ್ಮ ಮತ್ತು ಕೋಮುವಾದದ ಹೆಸರಿನಲ್ಲಿ ರಾಜಕಾರಣ ಮಾಡಿರುವ ಬಿಜೆಪಿ ಇದೀಗ ಪಿಂಚಣಿ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಯಿಂದ ಕಾರ್ಯನಿರ್ವಹಿಸುತ್ತಿರುವುದನ್ನು ಸಹಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಕ್ಷೇತ್ರದ ಮಾಜಿ ಶಾಸಕರು ಹಿಂದೆ 20 ವರ್ಷಗಳ ಕಾಲ ಈ ವಿಚಾರದಲ್ಲಿ ಏನನ್ನೂ ಮಾಡದೆ ಇದೀಗ ಪಿಂಚಣಿ ಹೆಸರಿನಲ್ಲಿ ರಾಜಕೀಯ ಮಾಡಲು ಮುಂದಾಗಿದ್ದಾರೆ ಎಂದು ಮಂಜೇಗೌಡ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಎಂ.ಸಿ. ಶಿವಾನಂದ ಸ್ವಾಮಿ, ರೂಬಿನ್ ಮೋಸಸ್, ಪ್ರವೀಣ್ ಬೆಟ್ಟಗೆರೆ, ಶಿವು ಹಿರೇಗೌಜ, ತನುಜ್ ನಾಯ್ಡು, ಬಸವರಾಜು ಹಾಗೂ ಸಂತೋಷ್ ಉಪಸ್ಥಿತರಿದ್ದರು.
The Congress government is committed to providing pensions to eligible beneficiaries.
Leave a comment