ಮೂಡಿಗೆರೆ: ಬಣಕಲ್ ಪೊಲೀಸ್ ಠಾಣೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮೂವರು ಅಂತರ್ ಜಿಲ್ಲಾ ದನ ಕಳ್ಳರನ್ನು ಬಂಧಿಸಿದ್ದಾರೆ.
ಯೂನಿಸ್ ಕಾರ್ಕಳ, ನಾಸಿರ್ ಮೂಡುಬಿದಿರೆ ಹಾಗೂ ಇಕ್ಬಾಲ್ ಮೂಡುಬಿದಿರೆ ಬಂಧಿತ ಆರೋಪಿಗಳು.
ಆರೋಪಿಗಳು ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧೆಡೆ ನೆಲೆಸಿದ್ದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲಾಗಿದ್ದು, ಕಳ್ಳತನಕ್ಕೆ ಬಳಸುತ್ತಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ 56/2025 ಮತ್ತು 72/2025 ಅಡಿಯಲ್ಲಿ ಭಾರತೀಯ ದಂಡ ಸಂಹಿತೆ ಕಲಂ 303ರಂತೆ ಪ್ರಕರಣ ದಾಖಲಾಗಿದೆ.
ಬಣಕಲ್ ಪೊಲೀಸ್ ಠಾಣೆಯ ಪಿಎಸ್ಐ ರೇಣುಕಾ ಅವರ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
Leave a comment