ಚಿಕ್ಕಮಗಳೂರು: ಕ್ಷೇತ್ರದಲ್ಲಿ ಆಡಳಿತ ವೈಫಲ್ಯ, ವ್ಯಾಪಕ ಭ್ರಷ್ಟಾಚಾರ ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನ ಹೆಚ್ಚಾಗಿದೆ ಎಂದು ಆರೋಪಿಸಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯು ನವೆಂಬರ್ 23 ಮತ್ತು 24ರಂದು ಎರಡು ದಿನಗಳ ಬೃಹತ್ ವಾಹನ ಜಾಥಾ ಹಮ್ಮಿಕೊಂಡಿದೆ.
ನಗರದ ಪ್ರೆಸ್ ಕ್ಲಬ್‌ನಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ SDPI ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಸೈಯದ್ ಅಜ್ಜತ್ ಪಾಷ ಮಾತನಾಡಿ, ‘ಬೈಕ್–ಕಾರ್ ಓಡಿಸಿ, ನೈಜ ಸಮಸ್ಯೆ ತಿಳಿಸಿ’ ಎಂಬ ಘೋಷವಾಕ್ಯದಡಿ ಕ್ಷೇತ್ರದ ವಿವಿಧ ಭಾಗಗಳಲ್ಲಿ ವಾಹನ ಜಾಥಾ ನಡೆಸಿ ಜನರ ಸಮಸ್ಯೆಗಳನ್ನು ನೇರವಾಗಿ ಪರಿಶೀಲಿಸಿ ಆಡಳಿತ ವ್ಯವಸ್ಥೆಯ ವೈಫಲ್ಯಗಳನ್ನು ಜನರ ಮುಂದಿಡಲಾಗುವುದು ಎಂದು ತಿಳಿಸಿದರು.
ಶಾಸಕರು ಈ ಹಿಂದೆ ನಡೆಸಿದ್ದ ‘ಸೈಕಲ್ ತುಳಿ, ಸಮಸ್ಯೆ ತಿಳಿ’ ಅಭಿಯಾನ ಕೇವಲ ಮಾಧ್ಯಮ ಪ್ರಚಾರ ಹಾಗೂ ಕ್ಯಾಮೆರಾ ಮುಂದೆ ಪೋಸ್ ನೀಡುವ ಕಾರ್ಯಕ್ರಮವಾಗಿತ್ತು. ಇದರಿಂದ ಕ್ಷೇತ್ರದ ಯಾವುದೇ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ದೊರೆತಿಲ್ಲ. ಶಾಸಕರಿಗೆ ಅಧಿಕಾರಿಗಳು ಹಾಗೂ ಇಲಾಖೆಗಳ ಮೇಲೆ ಹಿಡಿತವಿಲ್ಲದ ಕಾರಣ ಜಿಲ್ಲಾಡಳಿತ ನಿಷ್ಕ್ರಿಯವಾಗಿದೆ. ಜನರ ಕಲ್ಯಾಣಕ್ಕೆ ಬಳಕೆಯಾಗಬೇಕಾದ ಅಧಿಕಾರವನ್ನು ವೈಯಕ್ತಿಕ ಪ್ರಚಾರ ಮತ್ತು ಗುತ್ತಿಗೆದಾರರ ಹಿತಾಸಕ್ತಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದರು.
ಜಿಲ್ಲಾ ಮತ್ತು ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳ ಕುರಿತು ಜನಪ್ರತಿನಿಧಿಗಳು ಹಾಗೂ ಸಮುದಾಯದ ಮುಖಂಡರು ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ಕರೆ ಸ್ವೀಕರಿಸದಿದ್ದರೂ ಕನಿಷ್ಠ ಮರಳಿ ಕರೆ ಮಾಡುವ ಸೌಜನ್ಯವನ್ನೂ ತೋರುತ್ತಿಲ್ಲ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಅರ್ಜಿಗಳು ತಿಂಗಳುಗಟ್ಟಲೆ ವಿಲೇವಾರಿಯಾಗದೆ ಬಾಕಿ ಉಳಿದಿದ್ದು, ಜನಸ್ಪಂದನ ಕಾರ್ಯಕ್ರಮವೂ ನಿರೀಕ್ಷಿತ ಫಲ ನೀಡುತ್ತಿಲ್ಲ ಎಂದು ದೂರಿದರು.
ತಾಲೂಕು ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಗಳಲ್ಲಿನ ಅಕ್ರಮಗಳನ್ನು ಬಹಿರಂಗಪಡಿಸಲು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದರೂ ಸಮರ್ಪಕ ಮಾಹಿತಿ ನೀಡುತ್ತಿಲ್ಲ. ಮೊದಲ ಮೇಲ್ಮನವಿಗೂ ಸ್ಪಂದನೆ ಸಿಗದಿರುವುದು ಆಡಳಿತ ವ್ಯವಸ್ಥೆಯ ಪಾರದರ್ಶಕತೆಯ ಬಗ್ಗೆ ಅನುಮಾನ ಮೂಡಿಸಿದೆ ಎಂದರು.
ತೋಟದ ಕಾರ್ಮಿಕರ ಲೈನ್‌ಗಳು, ಕೊಳೆಗೇರಿ ಪ್ರದೇಶಗಳು ಹಾಗೂ ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ಮನೆಗಳಿಗೆ 94ಸಿ ಮತ್ತು 94ಸಿಸಿ ಅಡಿಯಲ್ಲಿ ಹಕ್ಕುಪತ್ರ ನೀಡುವಲ್ಲಿ ವಿಳಂಬವಾಗುತ್ತಿದೆ. ಬಡವರು, ಕಾರ್ಮಿಕರು ಮತ್ತು ಅಲ್ಪಸಂಖ್ಯಾತರ ಭೂಮಿಯ ಹಕ್ಕಿನ ವಿಚಾರದಲ್ಲಿ ಸರ್ಕಾರಗಳು ನಿರ್ಲಕ್ಷ್ಯ ವಹಿಸುತ್ತಿವೆ. ಚುನಾವಣಾ ಸಂದರ್ಭದಲ್ಲಿ ಮಾತ್ರ ಮತಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಜಿಲ್ಲಾಸ್ಪತ್ರೆಯಲ್ಲಿಯೂ ಅಗತ್ಯ ತಜ್ಞ ವೈದ್ಯರು, ನುರಿತ ಸರ್ಜನ್‌ಗಳು ಹಾಗೂ ಹೃದಯ ಸಂಬಂಧಿ ತುರ್ತು ಚಿಕಿತ್ಸಾ ಸೌಲಭ್ಯಗಳ ಕೊರತೆಯಿದೆ. ಇದರಿಂದ ಹೃದಯಾಘಾತದಂತಹ ತುರ್ತು ಸಂದರ್ಭಗಳಲ್ಲಿ ಬಡ ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಜೀವ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದರು.
ಇದಲ್ಲದೆ, ಐತಿಹಾಸಿಕ ದೇವಸ್ಥಾನಗಳು, ದರ್ಗಾಗಳು ಹಾಗೂ ಮುಸ್ಲಿಂ ಸಮುದಾಯದ ಖಬರಸ್ಥಾನಗಳಿಗೆ ಸೇರಿದ ಮುಜರಾಯಿ ಮತ್ತು ವಕ್ಫ್ ಆಸ್ತಿಗಳ ಒತ್ತುವರಿ ತೆರವುಗೊಳಿಸುವಲ್ಲಿ ಆಡಳಿತ ನಿರ್ಲಕ್ಷ್ಯ ತೋರುತ್ತಿದೆ. ಸಬ್‌ರಿಜಿಸ್ಟ್ರಾರ್ ಕಚೇರಿ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಲಂಚದ ಹಾವಳಿ ಹೆಚ್ಚಾಗಿದೆ. ಹಣ ನೀಡದಿದ್ದರೆ ಕಡತಗಳು ವಿಲೇವಾರಿಯಾಗದ ಪರಿಸ್ಥಿತಿ ಇದೆ ಎಂದು ದೂರಿದರು.
ಬಡವರ ಸಣ್ಣ ಗುಡಿಸಲುಗಳನ್ನು ತೆರವುಗೊಳಿಸಲು ಜೆಸಿಬಿ ಬಳಸುವ ಅಧಿಕಾರಿಗಳು, ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಭೂಮಿಯನ್ನು ತೆರವುಗೊಳಿಸಲು ಹಿಂದೇಟು ಹಾಕುತ್ತಿದ್ದಾರೆ. ನಗರದಲ್ಲಿ ರಸ್ತೆಗಳ ಗುಂಡಿಗಳು, ಸಮರ್ಪಕ ಬೈಪಾಸ್ ರಸ್ತೆ ಹಾಗೂ ಪಾರ್ಕಿಂಗ್ ವ್ಯವಸ್ಥೆಯ ಕೊರತೆಯಿಂದ ಸಾರ್ವಜನಿಕರು ಪ್ರತಿನಿತ್ಯ ಸಂಚಾರ ದಟ್ಟಣೆಯ ಸಮಸ್ಯೆ ಎದುರಿಸುತ್ತಿದ್ದಾರೆ. ಪೊಲೀಸ್ ಇಲಾಖೆಯಲ್ಲಿಯೂ ಸಾಮಾನ್ಯ ಜನರಿಗೆ ನ್ಯಾಯ ದೊರೆಯುತ್ತಿಲ್ಲ. ರೌಡಿಸಂ ಮತ್ತು ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ಬದಲು ವಾಹನ ಸವಾರರಿಂದ ದಂಡ ವಸೂಲಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಟೀಕಿಸಿದರು.
ನವೆಂಬರ್ 23 ಮತ್ತು 24ರಂದು ನಡೆಯಲಿರುವ ವಾಹನ ಜಾಥಾ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಗುರುತಿಸಲಿದೆ. ಜಿಲ್ಲಾಡಳಿತ ಹಾಗೂ ಸರ್ಕಾರ ಸಾರ್ವಜನಿಕರ ಜ್ವಲಂತ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಕಚೇರಿಗಳಿಗೆ ಬೀಗ ಜಡಿದು ‘ಜನತಾ ದಿಗ್ಬಂಧನ’ ಹೋರಾಟ ನಡೆಸಲಾಗುವುದು ಎಂದು ಸೈಯದ್ ಅಜ್ಜತ್ ಪಾಷ ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಸೈಯದ್ ಇಬ್ರಾಹಿಂ, ಮಹಮದ್ ಅಬ್ರಾರ್, ಖಲೀದ್, ಮಹಮದ್ ಜಿಲಾನ್, ಸೈಯದ್ ಇಮ್ರಾನ್ ಹಾಗೂ ಮುಬಾರಕ್ ಉಪಸ್ಥಿತರಿದ್ದರು.
Two-day SDPI vehicle rally starting November 23
Leave a comment