ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೂಡಿಗೆರೆ ಠಾಣಾ ವ್ಯಾಪ್ತಿಯ ಕುನ್ನಳ್ಳಿ ಗ್ರಾಮದ ವಿನೋದ್ (28) ಅವರು ಕೂಲಿ ಕೆಲಸ ಮುಗಿಸಿಕೊಂಡು ಸ್ನೇಹಿತ ರಮೇಶ್ ಜೊತೆ ಬೈಕ್‌ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹಳಸೆ ದಿಕ್ಕಿನಿಂದ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ಮತ್ತೊಂದು ಬೈಕ್ ವಿನೋದ್ ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ವಿನೋದ್ ಅವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿ, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರನ್ನು ಮೃತರಾಗಿದ್ದಾರೆಂದು ಘೋಷಿಸಿದ್ದಾರೆ. ಈ ಸಂಬಂಧ ಮೃತರ ತಂದೆ ಹರಿಶ್ಚಂದ್ರ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೊಂದು ಘಟನೆ ಸಕ್ಕರಾಯಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿಳ್ಳೇನಹಳ್ಳಿಯ ತಿಮ್ಮಯ್ಯ ಅವರು ಸಕ್ಕರಾಯಪಟ್ಟಣದ ಪ್ಲೇಗಿನಮ್ಮ ದೇವಾಲಯದ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಚಿಕ್ಕಮಗಳೂರು ದಿಕ್ಕಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡ ತಿಮ್ಮಯ್ಯ ಅವರನ್ನು ಮೊದಲಿಗೆ ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಿ, ಬಳಿಕ ಮಂಗಳೂರು ಮತ್ತು ಹಾಸನ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರ ಭಾವ ಸುರೇಶ್ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Two killed in separate accidents
Leave a comment