ಚಿಕ್ಕಮಗಳೂರು: ಜಿಲ್ಲೆಯ ಪ್ರತ್ಯೇಕ ಕಡೆಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆಗಳು ವರದಿಯಾಗಿವೆ. ಬಸವನಕೂಡಿ ಈಶ್ವರಹಳ್ಳಿ ಗ್ರಾಮದ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸೋಮಭೋವಿ ಎಂಬುವರಿಗೆ ಪೆದ್ದ ಭೋವಿ ಎಂಬುವರು ನಂಬರಿನ ಬೈಕ್ನಲ್ಲಿ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಡಿಕ್ಕಿ ಹೊಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸೋಮಭೋವಿ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ತಲೆ ಹಾಗೂ ಮೈಕೈಗೆ ತೀವ್ರ ಗಾಯಗೊಂಡಿದ್ದ ಅವರನ್ನು ತಕ್ಷಣ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ, ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಜುಲೈ 27ರ ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ಮೃತರ ಪತ್ನಿ ತೇಜಲಕ್ಷ್ಮಿ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದೆಡೆ, ಅಜ್ಜಂಪುರ ತಾಲೂಕಿನ ನಾಗವಂಗಲ ಗೇಟ್ನ ಫೈ ಓವರ್ ಮೇಲೆ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಆನಂದ (43) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನಂದ್ ಅವರು ತಮ್ಮ ಡಿಸ್ಕವರ್ ಬೈಕ್ನಲ್ಲಿ (KA 18 X 7780) ಪತ್ನಿ ಸುಧಾ ಅವರೊಂದಿಗೆ ಸಂಚರಿಸುತ್ತಿದ್ದಾಗ, ಎದುರಿನಿಂದ ಅತಿವೇಗವಾಗಿ ಬಂದ ನಾಗಪ್ಪ ಎಂಬುವವರ KA 66 L 5916 ನಂಬರಿನ ಸ್ಕೂಟಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಆನಂದ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಅವರ ಪತ್ನಿ ಸುಧಾ ಹಾಗೂ ಸ್ಕೂಟಿಯಲ್ಲಿದ್ದ ನೇತ್ರಾವತಿ ಎಂಬುವರಿಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
Two killed in separate road accidents
Leave a comment