ಚಿಕ್ಕಮಗಳೂರು: ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸದೃಢಗೊಳಿಸುವ ಉದ್ದೇಶದೊಂದಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಸರ್ಕಾರ ಮುಂದಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.
ಅವರು ಇಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮವಸ್ತ್ರ ವಿತರಿಸಿ ಮಾತನಾಡಿದರು.
ಈ ಯೋಜನೆಯಡಿ ಚಿಕ್ಕಮಗಳೂರು ತಾಲ್ಲೂಕಿನಲ್ಲಿ ೪೦ ಅಂಗನವಾಡಿ ಕೇಂದ್ರಗಳನ್ನು ಗುರ್ತಿಸಿದ್ದು, ಈ ಅಂಗನವಾಡಿ ಕೇಂದ್ರಗಳಿಗೆ ಟಿವಿ, ಪೆನ್‌ಡ್ರೈವ್, ಸ್ಟೆಬಿಲೈಜರ್ ವಿತರಣೆ ಮಾಡಲಾಗುತ್ತಿದ್ದು, ಅಂಗನವಾಡಿ ಕೇಂದ್ರಕ್ಕೆ ಆಗಮಿಸುವ ೩-೬ ವರ್ಷದ ಮಕ್ಕಳಿಗೆ ಹಾಗೂ ಇತರೆ ಫಲಾನುಭವಿಗಳಿಗೆ ಶಿಕ್ಷಣ ನೀಡಲಾಗುವುದು ಎಂದು ಹೇಳಿದರು.
ಪ್ರತಿ ವರ್ಷದಂತೆ ತಾಲ್ಲೂಕಿನ ೪೦೭ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಮಾಡಿದ ಅವರು, ಜೊತೆಗೆ ಇತರ ಪರಿಕರಗಳನ್ನು ನೀಡಲಾಗುವುದು. ಇಲಾಖೆ ವತಿಯಿಂದ ಉತ್ತಮ ಗುಣಮಟ್ಟದ ಎರಡು ಸಮವಸ್ತ್ರದ ಸೀರೆಗಳನ್ನು ವಿತರಿಸಲಾಗುವುದೆಂದರು.
ಅಕ್ಟೋಬರ್.೨ ಕ್ಕೆ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಿ ೫೦ ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ತಾಲ್ಲೂಕಿನ ೪೭ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ ಎಂದರು.
ಈ ಸಂಬಂಧ ಈಗಾಗಲೇ ಪಠ್ಯಪುಸ್ತಕಗಳು ಸರಬರಾಜಾಗುತ್ತಿದ್ದು, ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ತರಗತಿಗಳನ್ನು ನಡೆಸಲಾಗುವುದು. ೪-೫ ವರ್ಷದ ಮಕ್ಕಳಿಗೆ ಎಲ್‌ಕೆಜಿ, ೫-೬ ವರ್ಷದ ಮಕ್ಕಳಿಗೆ ಯುಕೆಜಿ ತರಗತಿಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ನಡೆಸಲಾಗುವುದೆಂದು ಮಾಹಿತಿ ನೀಡಿದರು.
ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳಿಗೆ ಮಡಿಷನ್ ಕಿಟ್ ಸರಬರಾಜು ಮಾಡಲಾಗಿದ್ದು, ಅಂಗನವಾಡಿ ಫಲಾನುಭವಿಗಳಿಗೆ ಈ ಕಿಟ್ಟನ್ನು ಪ್ರಥಮ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂದರು.
ಮೊದಲಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್ ಸ್ವಾಗತಿಸಿ ಮಾತನಾಡಿ, ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಹಂತ ಹಂತವಾಗಿ ಆಂಗ್ಲ ಮಾಧ್ಯಮದಲ್ಲಿ ಎಲ್‌ಕೆಜಿ, ಯುಕೆಜಿ ವಿನೂತನ ತರಗತಿಗಳನ್ನು ೨೦೨೫ ರ ಅಕ್ಟೋಬರ್ ೨ ರಂದು ವಿದ್ಯುಕ್ತವಾಗಿ ಸರ್ಕಾರದ ಆದೇಶದಂತೆ ಆರಂಭಿಸಲಾಗುವುದು. ಖಾಸಗಿ ಶಾಲೆಗಳ ಶಿಕ್ಷಣಕ್ಕೆ ಕಡಿಮೆ ಇಲ್ಲದಂತೆ ಕಾರ್ಯ ನಿರ್ವಹಿಸಲು ಸಚಿವರು ಸೂಚನೆ ನೀಡಿದ್ದಾರೆ ಎಂದು ಹೇಳದರು.
ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ವಿಜಯ್‌ಕುಮಾರ್, ಎಸಿಡಿಪಿಓ ರೂಪಾ ಕುಮಾರಿ, ವಸಂತ ಕುಮಾರಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಉಪಸ್ಥಿತರಿದ್ದರು.
Uniforms distributed to Anganwadi workers and helpers
Leave a comment