ಮೂಡಿಗೆರೆ: ಕಾಫಿತೋಟದಲ್ಲಿ ಎಂದಿನಂತೆ ಕೆಲಸದಲ್ಲಿ ತೊಡಗಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡುಕೋಣವೊಂದು ಏಕಾಏಕಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ತಾಲೂಕಿನ ಮಾಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯ ಮಾಕೋನಹಳ್ಳಿ ಗ್ರಾಮದ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಸತ್ಯ ಎಂಬ ಕಾರ್ಮಿಕರೇ ಕಾಡುಕೋಣದ ದಾಳಿಗೆ ಒಳಗಾದವರು. ಏಕಾಏಕಿ ದಾಳಿ ನಡೆಸಿದ ಕಾಡುಕೋಣ ತೀವ್ರವಾಗಿ ಗಾಯಗೊಳಿಸಿದ್ದು, ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡ ಸತ್ಯ ಅವರನ್ನು ಸ್ಥಳೀಯರ ಸಹಾಯದಿಂದ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮಲೆನಾಡಿನಲ್ಲಿ ಹೆಚ್ಚಿದ ಕಾಡುಕೋಣಗಳ ಹಾವಳಿ
ಇತ್ತೀಚಿನ ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು, ಕಾಫಿತೋಟಗಳಿಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಹಾಗೂ ಬೆಳೆಗಾರರಲ್ಲಿ ಆತಂಕ ಹೆಚ್ಚಾಗಿದೆ. ಕಾಡುಕೋಣಗಳ ದಾಳಿ ಪ್ರಕರಣಗಳು ಪದೇಪದೇ ನಡೆಯುತ್ತಿರುವ ಹಿನ್ನೆಲೆಯಲ್ಲಿ ತೋಟಗಳಿಗೆ ತೆರಳಲು ಕಾರ್ಮಿಕರು ಜೀವಭಯ ಪಡುವಂತಾಗಿದೆ.
ಕಾಡುಕೋಣಗಳ ಹಾವಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಅರಣ್ಯ ಇಲಾಖೆ ಕೂಡಲೇ ಕ್ರಮ ಕೈಗೊಂಡು ಕಾಡುಕೋಣಗಳನ್ನು ಸುರಕ್ಷಿತವಾಗಿ ಕಾಡಿನತ್ತ ಓಡಿಸುವ ಹಾಗೂ ಮಾನವ–ವನ್ಯಜೀವಿ ಸಂಘರ್ಷ ನಿಯಂತ್ರಿಸುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Wild bison attacks in coffee plantation; daily wage worker critically injured
Leave a comment