ಕಡೂರು: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಯುವಕ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ವೇದಾವತಿ ನದಿ ಸೇತುವೆ ಬಳಿಯ ತಿರುವಿನಲ್ಲಿ ನ.10ರಂದು ನಡೆದಿದೆ.
ಹಾಸನದ ಮುಜಾಮಿಲ್ ಷರೀಫ್ (ವಯಸ್ಸು 19) ಮೃತಪಟ್ಟ ಯುವಕ. ಇರ್ಫಾನ್ ಗಾಯಗೊಂಡಿದ್ದು, ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ಕರೆದೊಯ್ಯಲಾಗಿದೆ.
ಹಾಸನದಿಂದ ಚಿತ್ರದುರ್ಗಕ್ಕೆ ಸಂಬಂಧಿಕರ ಮದುವೆಗೆ ಎಕ್ಸ್‌ಪಲ್ಸ್ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಚೌಳಹಿರಿಯೂರು ಕಡೆಯಿಂದ ಬಂದ ಕಾರು ವೇಗವಾಗಿ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದಿದ್ದು, ತೀವ್ರವಾಗಿ ಗಾಯಗೊಂಡ ಮುಜಾಮಿಲ್ ಅವರನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಈ ಸಂಬಂಧ ಕಾರು ಚಾಲಕ ಅನಿಲ್ ಮೈಸೂರು ವಿರುದ್ಧ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Youth dies in car-bike collision in Kadur
Leave a comment